
ಭದ್ರಾ ಜಲಾಶಯದಿಂದ ನೀರು ಬಿಡುಗಡೆಗೆ ಆಗ್ರಹಿಸಿ ದಾವಣಗೆರೆ ಬಂದ್‌ಗೆ ರೈತ ಸಂಘಟನೆಗಳು ಕರೆ ನೀಡಿವೆ.
ಇಂದು ದಾವಣಗೆರೆ ಬಂದ್- ಭದ್ರಾ ನೀರು ಬಿಡುಗಡೆಗೆ ರೈತರ ಆಗ್ರಹ, ಪೊಲೀಸರ ಕಟ್ಟೆಚ್ಚರ
ರೈತರ ಬೆಳೆಗಳಿಗೆ ಹಾಗೂ ಕುಡಿಯುವ ನೀರಿನ ಅಗತ್ಯಕ್ಕೆ ತಕ್ಷಣ ಭದ್ರಾ ನಾಲೆ ಮೂಲಕ ನೀರು ಹರಿಸಬೇಕು ಎಂಬುದು ಪ್ರತಿಭಟನಾಕಾರರ ಪ್ರಮುಖ ಬೇಡಿಕೆಯಾಗಿದೆ. ರೈತರ ಹೋರಾಟಕ್ಕೆ ಸಾರ್ವಜನಿಕರು, ವ್ಯಾಪಾರಿಗಳು ಸೇರಿದಂತೆ ವಿವಿಧ ವರ್ಗಗಳ ಜನರು ಬೆಂಬಲ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಭದ್ರಾ ಜಲಾಶಯದಿಂದ ರೈತರ ಜಮೀನುಗಳಿಗೆ ನೀರು ಹರಿಸದಿರುವುದನ್ನು ವಿರೋಧಿಸಿ ದಾವಣಗೆರೆಯಲ್ಲಿ ರೈತ ಸಂಘಟನೆಗಳು ಬಂದ್‌ಗೆ ಕರೆ ನೀಡಿವೆ. ಭಾರತೀಯ ರೈತ ಒಕ್ಕೂಟದ ನೇತೃತ್ವದಲ್ಲಿ ನಡೆಯಲಿರುವ ಪ್ರತಿಭಟನೆಗೆ ಮಾಜಿ ಸಚಿವ ಎಸ್.ಎ. ರವೀಂದ್ರನಾಥ್ ನೇತೃತ್ವ ವಹಿಸಲಿದ್ದಾರೆ.
ರೈತರ ಬೆಳೆಗಳಿಗೆ ಹಾಗೂ ಕುಡಿಯುವ ನೀರಿನ ಅಗತ್ಯಕ್ಕೆ ತಕ್ಷಣ ಭದ್ರಾ ನಾಲೆ ಮೂಲಕ ನೀರು ಹರಿಸಬೇಕು ಎಂಬುದು ಪ್ರತಿಭಟನಾಕಾರರ ಪ್ರಮುಖ ಬೇಡಿಕೆಯಾಗಿದೆ. ರೈತರ ಹೋರಾಟಕ್ಕೆ ಸಾರ್ವಜನಿಕರು, ವ್ಯಾಪಾರಿಗಳು ಸೇರಿದಂತೆ ವಿವಿಧ ವರ್ಗಗಳ ಜನರು ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಸಂಘಟನೆಗಳು ತಿಳಿಸಿವೆ.
ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಂದೋಬಸ್ತ್
ಬಂದ್ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ದಾವಣಗೆರೆ ಪೊಲೀಸರು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ. ನಗರದ ಪ್ರಮುಖ ವೃತ್ತಗಳು ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಪ್ರತಿಭಟನೆ ವೇಳೆ ಜನಸಂದಣಿ ಹೆಚ್ಚಾಗುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಸಿಬ್ಬಂದಿ ನಿರಂತರ ನಿಗಾ ವಹಿಸಲಿದ್ದಾರೆ.
ಭದ್ರಾ ಜಲಾಶಯದಲ್ಲಿ ನೀರಿದ್ದರೂ ಬೆಳೆಗಳಿಗೆ ನೀರಿಲ್ಲ: ರೈತರ ಆಕ್ರೋಶ
ಭದ್ರಾ ಜಲಾಶಯದಲ್ಲಿ ಸಾಕಷ್ಟು ನೀರಿನ ಸಂಗ್ರಹವಿದ್ದರೂ ರೈತರ ಜಮೀನುಗಳಿಗೆ ನೀರು ಹರಿಸದಿರುವುದು ಸರ್ಕಾರದ ನಿರ್ಲಕ್ಷ್ಯ ಎಂದು ರೈತ ಸಂಘಟನೆಗಳು ಆರೋಪಿಸಿವೆ. ಜಲಾಶಯದಲ್ಲಿ ಸುಮಾರು 175 ಅಡಿ ನೀರಿದ್ದರೂ ಬೆಳೆಗಳಿಗೆ ಅಗತ್ಯ ನೀರು ಒದಗಿಸದಿರುವುದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಅವರು ಹೇಳಿದ್ದಾರೆ. ಅಡಿಕೆ ಬೆಳೆ ಸೇರಿದಂತೆ ಹಲವು ಬೆಳೆಗಳಿಗೆ ನೀರಿನ ಅಗತ್ಯವಿದ್ದು, ಸಕಾಲದಲ್ಲಿ ನೀರು ಸಿಗದಿದ್ದರೆ ಬೆಳೆಗಳಿಗೆ ಹಾನಿಯಾಗುವ ಆತಂಕವಿದೆ ಎಂದು ರೈತರು ತಿಳಿಸಿದ್ದಾರೆ.
ಬೇಡಿಕೆ ಈಡೇರದಿದ್ದರೆ ತೀವ್ರ ಹೋರಾಟ
ಪ್ರತಿ ವರ್ಷ ಭದ್ರಾ ನೀರಿಗಾಗಿ ಹೋರಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಕ್ಷಣ ನೀರು ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಒತ್ತಾಯಿಸಿರುವ ಅವರು, ಬೇಡಿಕೆ ಈಡೇರದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವ ಎಚ್ಚರಿಕೆ ನೀಡಿದ್ದಾರೆ.

