ಸಿಎಂ ಡಿಕೆ ಶಿವಕುಮಾರ್ ನಿವಾಸ, ವಿಧಾನಸೌಧಕ್ಕೆ ಬಾಂಬ್ ಬೆದರಿಕೆ: ಆಟೋ ಚಾಲಕನಿಗೆ ಕರೆ ಮಾಡಿದ್ದ ಅಪರಿಚಿತ
x

ದೆಹಲಿಯಲ್ಲಿಯೂ ಬಸವಣ್ಣನವರ ಪ್ರತಿಮೆ ಸ್ಥಾಪಿಸಲಾಗಿದ್ದು, ರಾಜ್ಯದ ಪ್ರತಿಯೊಂದು ಊರು, ಮನೆ, ಶಾಲೆ ಹಾಗೂ ಸರ್ಕಾರಿ ಕಚೇರಿಗಳಲ್ಲಿ ಅವರ ಭಾವಚಿತ್ರ ಅಳವಡಿಸಿ ವಿಚಾರಗಳನ್ನು ತಲುಪಿಸುವ ಕೆಲಸ ಮಾಡಲಾಗುತ್ತಿದೆ ಎಂದು ಶಿವಕುಮಾರ್ ವಿವರಿಸಿದರು.

ಸಿಎಂ ಡಿಕೆ ಶಿವಕುಮಾರ್ ನಿವಾಸ, ವಿಧಾನಸೌಧಕ್ಕೆ ಬಾಂಬ್ ಬೆದರಿಕೆ: ಆಟೋ ಚಾಲಕನಿಗೆ ಕರೆ ಮಾಡಿದ್ದ ಅಪರಿಚಿತ

ಕರ್ನಾಟಕ ಸಿಎಂ ಡಿ.ಕೆ. ಶಿವಕುಮಾರ್ ಅವರ ಸದಾಶಿವನಗರ ನಿವಾಸ ಹಾಗೂ ವಿಧಾನಸೌಧಕ್ಕೆ ಬಾಂಬ್ ಇಟ್ಟಿರುವುದಾಗಿ ಅಪರಿಚಿತ ವ್ಯಕ್ತಿ ಬೆದರಿಕೆ ಹಾಕಿದ್ದಾನೆ. ನವೆಂಬರ್ 7ರಂದು ಆಟೋ ಚಾಲಕನ ಮೊಬೈಲ್ ಮೂಲಕ ಪೊಲೀಸರಿಗೆ ಕರೆ ಮಾಡಿದ್ದು, ತಪಾಸಣೆ ವೇಳೆ ಹುಸಿ ಬೆದರಿಕೆ ಎಂಬುದು ದೃಢಪಟ್ಟಿದೆ.


Click the Play button to hear this message in audio format

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸದಾಶಿವನಗರ ನಿವಾಸ ಹಾಗೂ ವಿಧಾನಸೌಧಕ್ಕೆ ಬಾಂಬ್ ಇಟ್ಟಿರುವುದಾಗಿ ಅಪರಿಚಿತ ವ್ಯಕ್ತಿಯೊಬ್ಬ ಬೆದರಿಕೆ ಹಾಕಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನವೆಂಬರ್ 7ರಂದು ಆಟೋ ಚಾಲಕನ ಮೊಬೈಲ್ ಮೂಲಕ ಪೊಲೀಸರಿಗೆ ಕರೆ ಮಾಡಿದ್ದ ವ್ಯಕ್ತಿ ಬಾಂಬ್ ಬೆದರಿಕೆ ಹಾಕಿದ್ದಾನೆ. ಬಳಿಕ ಪೊಲೀಸರು ತಪಾಸಣೆ ನಡೆಸಿದಾಗ ಇದೊಂದು ಹುಸಿ ಬೆದರಿಕೆ ಕರೆ ಎಂಬುದು ತಿಳಿದುಬಂದಿದೆ.

ಘಟನೆಯ ವಿವರಗಳ ಪ್ರಕಾರ, ಭಗವಂತರಾಯನ್ ಎಂಬುವವರು ನಮ್ಮ ಯಾತ್ರಿ ಆ್ಯಪ್ ಮೂಲಕ ಆಟೋ ಚಾಲನೆ ಮಾಡುತ್ತಿದ್ದರು. ನವೆಂಬರ್ 7ರಂದು ಕಾರ್ತಿಕ್ ಎಂಬ ವ್ಯಕ್ತಿ ಸದಾಶಿವನಗರದಿಂದ ಆರ್.ಆರ್. ನಗರಕ್ಕೆ ತೆರಳಲು ಆಟೋ ಬುಕ್ ಮಾಡಿದ್ದ. ಆತ ಕಳುಹಿಸಿದ್ದ ಪಿಕಪ್ ಸ್ಥಳ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸದಾಶಿವನಗರ ನಿವಾಸದ ಸಮೀಪ ತೋರಿಸಿತ್ತು. ಹೀಗಾಗಿ ಆಟೋ ಚಾಲಕ ನಿಗದಿತ ಸ್ಥಳಕ್ಕೆ ತೆರಳಿ ಬುಕ್ಕಿಂಗ್ ಮಾಡಿದ್ದ ವ್ಯಕ್ತಿಗೆ ಕರೆ ಮಾಡಿದ್ದಾನೆ.

ಈ ವೇಳೆ ಕರೆ ಸ್ವೀಕರಿಸಿದ ಅಪರಿಚಿತ ವ್ಯಕ್ತಿ, ತಾನು ಮುಖ್ಯಮಂತ್ರಿ ನಿವಾಸದಲ್ಲಿರುವುದಾಗಿ ಹೇಳಿದ್ದಾನೆ. ಅಲ್ಲದೆ, ನಿವಾಸದ ಸಮೀಪ ಬ್ಯಾರಿಕೇಡ್ ಬಳಿ ಪೊಲೀಸರು ಇರುವುದರಿಂದ ಆಟೋ ಚಾಲಕನ ಮೊಬೈಲ್ ಅನ್ನು ಪೊಲೀಸರಿಗೆ ನೀಡುವಂತೆ ಸೂಚಿಸಿದ್ದಾನೆ. ಅದರಂತೆ ಚಾಲಕ ಅಲ್ಲಿದ್ದ ಪೊಲೀಸರಿಗೆ ಮೊಬೈಲ್ ಹಸ್ತಾಂತರಿಸಿದ್ದಾನೆ. ಪೊಲೀಸರು ಕರೆ ಸ್ವೀಕರಿಸುತ್ತಿದ್ದಂತೆ ಮಾತನಾಡಿದ ಅಪರಿಚಿತ ವ್ಯಕ್ತಿ, ಮುಖ್ಯಮಂತ್ರಿ ನಿವಾಸ ಹಾಗೂ ವಿಧಾನಸೌಧಕ್ಕೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಿ ಕರೆ ಸ್ಥಗಿತಗೊಳಿಸಿದ್ದಾನೆ. ಇದರಿಂದ ಎಚ್ಚೆತ್ತ ಪೊಲೀಸರು ತಕ್ಷಣವೇ ಕಾರ್ಯಪ್ರವೃತ್ತರಾಗಿದ್ದಾರೆ.

ಮೊದಲಿಗೆ ಪಿಕಪ್ ಸ್ಥಳಕ್ಕೆ ಬಂದಿದ್ದ ಆಟೋವನ್ನು ಪರಿಶೀಲಿಸಿದ ಪೊಲೀಸರು, ಬಳಿಕ ಮುಖ್ಯಮಂತ್ರಿ ನಿವಾಸ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ತಪಾಸಣೆ ನಡೆಸಿದ್ದಾರೆ. ನಂತರ ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗದ ಹಿನ್ನೆಲೆಯಲ್ಲಿ ಇದೊಂದು ಹುಸಿ ಬಾಂಬ್ ಬೆದರಿಕೆ ಕರೆ ಎಂಬುದು ದೃಢಪಟ್ಟಿದೆ.

ಘಟನೆಗೆ ಸಂಬಂಧಿಸಿದಂತೆ ಆಟೋ ಚಾಲಕ ಭಗವಂತರಾಯನ್ ನೀಡಿದ ದೂರಿನ ಮೇರೆಗೆ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕರೆ ಮಾಡಿದ ಅಪರಿಚಿತ ವ್ಯಕ್ತಿ ಯಾರು ಮತ್ತು ಯಾವ ಉದ್ದೇಶದಿಂದ ಬಾಂಬ್ ಬೆದರಿಕೆ ಹಾಕಿದ್ದ ಎಂಬುದನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Read More
Next Story