
ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬ ದೇವಿಯ ಸಾರ್ವಜನಿಕ ದರ್ಶನಕ್ಕೆ ಇಂದು ಕೊನೆಯ ದಿನ. ಭಕ್ತಸಾಗರದ ನಿರೀಕ್ಷೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ವಿಶೇಷ ವ್ಯವಸ್ಥೆ ಮಾಡಲಾಗಿದೆ.
ಹಾಸನಾಂಬ ದರ್ಶನಕ್ಕೆ ಇಂದು ಕೊನೆಯ ದಿನ; ಭಕ್ತಸಾಗರ ನಿರೀಕ್ಷೆ
ಭಕ್ತರ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ಹಾಗೂ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಈಗಾಗಲೇ ಭಕ್ತರಿಗೆ ಮನವಿ ಮಾಡಿದ್ದಾರೆ.
ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಸಾರ್ವಜನಿಕ ದರ್ಶನಕ್ಕೆ ಇಂದು ಕೊನೆಯ ದಿನವಾಗಿದೆ. ಈ ಬಾರಿ ಜಾತ್ರಾ ಮಹೋತ್ಸವದಲ್ಲಿ ದಾಖಲೆಯ ಸಂಖ್ಯೆಯಲ್ಲಿ ಭಕ್ತರು ದೇವಿಯ ದರ್ಶನ ಪಡೆದಿದ್ದು, ಕೊನೆಯ ದಿನವಾದ ಇಂದು ನಿರೀಕ್ಷೆಗೂ ಮೀರಿ ಭಕ್ತರು ಆಗಮಿಸುವ ಸಾಧ್ಯತೆಯಿದೆ. ಬುಧವಾರ ಮಧ್ಯಾಹ್ನ 12 ಗಂಟೆಯ ಬಳಿಕ ಶಾಸ್ತ್ರೋಕ್ತವಾಗಿ ಗರ್ಭಗುಡಿಯ ಬಾಗಿಲು ಮುಚ್ಚಲಾಗುತ್ತದೆ.
ಕೊನೆಯ ದಿನ ಭಕ್ತರ ಮಹಾಸಾಗರ ನಿರೀಕ್ಷೆ
ಹಾಸನಾಂಬ ದೇವಿಯ ದರ್ಶನ ಪಡೆಯಲು ಪ್ರತಿವರ್ಷ ಆಗಮಿಸುವ ಭಕ್ತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಬಾರಿಯೂ ಜಾತ್ರಾ ಮಹೋತ್ಸವಕ್ಕೆ ಲಕ್ಷಾಂತರ ಭಕ್ತರು ಭೇಟಿ ನೀಡಿದ್ದು, ವಿಶೇಷ ದರ್ಶನದ ಟಿಕೆಟ್ ಹಾಗೂ ಲಾಡು ಮಾರಾಟದಿಂದ ಕೋಟ್ಯಂತರ ರೂಪಾಯಿ ಆದಾಯ ಸಂಗ್ರಹವಾಗಿದೆ. ಸಾರ್ವಜನಿಕ ದರ್ಶನದ ಕೊನೆಯ ದಿನವಾದ್ದರಿಂದ ಇಂದು ಭಕ್ತರ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ.
ಭಕ್ತರ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ಹಾಗೂ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಈಗಾಗಲೇ ಭಕ್ತರಿಗೆ ಮನವಿ ಮಾಡಿದ್ದಾರೆ. ಕೊನೆಯ ದಿನ ಹತ್ತರಿಂದ ಹನ್ನೆರಡು ಗಂಟೆಗಳವರೆಗೆ ಕಾಯಬೇಕಾದ ಪರಿಸ್ಥಿತಿ ಎದುರಾಗಬಹುದು. ಹೀಗಾಗಿ ಭಕ್ತರು ಮಾನಸಿಕವಾಗಿ ಸಿದ್ಧರಾಗಿ ಆಗಮಿಸುವಂತೆ ತಿಳಿಸಿದ್ದಾರೆ.
ದರ್ಶನದ ಸಮಯದಲ್ಲಿ ಬದಲಾವಣೆ
ಇಂದು ಬೆಳಿಗ್ಗೆ 6 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ನಿರಂತರ 11 ಗಂಟೆಗಳ ಕಾಲ ಹಾಸನಾಂಬ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಸಂಜೆ 7 ಗಂಟೆಯಿಂದ ಮಧ್ಯರಾತ್ರಿ 1 ಗಂಟೆಯವರೆಗೆ ನೈವೇದ್ಯಕ್ಕಾಗಿ ಗರ್ಭಗುಡಿಯ ಬಾಗಿಲು ಮುಚ್ಚಲಾಗುತ್ತದೆ. ಬಳಿಕ ಮಧ್ಯರಾತ್ರಿ 1 ಗಂಟೆಯಿಂದ ಬುಧವಾರ ಬೆಳಿಗ್ಗೆ 7 ಗಂಟೆಯವರೆಗೆ ಸಾರ್ವಜನಿಕ ದರ್ಶನ ಮುಂದುವರಿಯಲಿದೆ.
ಬುಧವಾರ ಬೆಳಿಗ್ಗೆ 8ರಿಂದ 10 ಗಂಟೆಯವರೆಗೆ ಗೋಲ್ಡ್ ಪಾಸ್ ಹೊಂದಿರುವವರಿಗೆ ದರ್ಶನಕ್ಕೆ ಅವಕಾಶವಿದೆ. ಬೆಳಿಗ್ಗೆ 10.30ರಿಂದ ಮಧ್ಯಾಹ್ನ 12.30ರವರೆಗೆ ಪ್ರೋಟೋಕಾಲ್ ಅಡಿಯಲ್ಲಿ ಆಗಮಿಸುವ ಗಣ್ಯರಿಗೆ ದರ್ಶನ ಕಲ್ಪಿಸಲಾಗುತ್ತದೆ. ಈ ಸಂದರ್ಭದಲ್ಲಿ ಧರ್ಮದರ್ಶನ ಹಾಗೂ 1,000 ಮತ್ತು 300 ರೂ. ವಿಶೇಷ ದರ್ಶನದ ಸರತಿ ಸಾಲಿನಲ್ಲಿರುವ ಭಕ್ತರಿಗೆ ದರ್ಶನ ವಿಳಂಬವಾಗುವ ಸಾಧ್ಯತೆಯಿದೆ.
ಮಧ್ಯಾಹ್ನ 12 ಗಂಟೆಗೆ ಗರ್ಭಗುಡಿ ಬಾಗಿಲು ಬಂದ್
ಕೊನೆಯ ದಿನ ಭಕ್ತರ ದಟ್ಟಣೆ ಹೆಚ್ಚಾಗುವ ಹಿನ್ನೆಲೆಯಲ್ಲಿ ಯಾವುದೇ ಗೊಂದಲ ಅಥವಾ ನೂಕುನುಗ್ಗಲು ಉಂಟಾಗದಂತೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಅಗತ್ಯ ಕ್ರಮಗಳನ್ನು ಕೈಗೊಂಡಿವೆ. ಬುಧವಾರ ಮಧ್ಯಾಹ್ನ 12 ಗಂಟೆಯ ಬಳಿಕ ವಿಶ್ವರೂಪ ದರ್ಶನದೊಂದಿಗೆ ಹಾಸನಾಂಬ ದೇವಿಯ ಗರ್ಭಗುಡಿಯ ಬಾಗಿಲನ್ನು ಶಾಸ್ತ್ರೋಕ್ತವಾಗಿ ಮುಚ್ಚಲಾಗುತ್ತದೆ. ಇದರೊಂದಿಗೆ ಈ ವರ್ಷದ ಹಾಸನಾಂಬ ಜಾತ್ರಾ ಮಹೋತ್ಸವಕ್ಕೆ ತೆರೆ ಬೀಳಲಿದೆ.

