ಹಾಸನದಲ್ಲಿ ಕಾಡಾನೆ ದಾಳಿಗೆ ಮಹಿಳೆ ಬಲಿ; ಶಾಶ್ವತ ಪರಿಹಾರಕ್ಕೆ ಗ್ರಾಮಸ್ಥರ ಪಟ್ಟು
x

ಕಾಡಾನೆಗಳ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೂ ತೊಂದರೆಯಾಗುತ್ತಿದ್ದು, ಜನರ ಜೀವಕ್ಕೆ ಅಪಾಯ ಎದುರಾಗಿದೆ.

ಹಾಸನದಲ್ಲಿ ಕಾಡಾನೆ ದಾಳಿಗೆ ಮಹಿಳೆ ಬಲಿ; ಶಾಶ್ವತ ಪರಿಹಾರಕ್ಕೆ ಗ್ರಾಮಸ್ಥರ ಪಟ್ಟು

ಮಹಿಳೆ ಕಾಡಾನೆ ದಾಳಿಗೆ ಬಲಿಯಾದ ಬೆನ್ನಲ್ಲೇ ಗ್ರಾಮಸ್ಥರು ಆನೆ ಹಾವಳಿ ತಡೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ. ಮೃತ ಮಹಿಳೆಯ ಶವವನ್ನು ಸ್ಥಳದಿಂದ ಮೇಲೆತ್ತಲು ಬಿಡದೆ ಅಹೋರಾತ್ರಿ ಧರಣಿ ನಡೆಸಿದ್ದಾರೆ.


Click the Play button to hear this message in audio format

ಕಾಡಾನೆ ದಾಳಿಗೆ ದನ ಮೇಯಿಸಲು ತೆರಳಿದ್ದ ಮಹಿಳೆಯೊಬ್ಬರು ದಾರುಣವಾಗಿ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನ ಕುಶಾವರ ಗ್ರಾಮದ ಬಳಿ ನಡೆದಿದೆ. ಚೌಡನಹಳ್ಳಿಯ ಜಯಮ್ಮ (48) ಮೃತ ದುರ್ದೈವಿ. ಕಳೆದ ಒಂದು ವಾರದಿಂದ ಗ್ರಾಮದ ಸುತ್ತಮುತ್ತ ಕಾಡಾನೆಗಳು ಬೀಡುಬಿಟ್ಟಿದ್ದವು. ಈ ಪೈಕಿ ಗುಂಪಿನಿಂದ ಬೇರ್ಪಟ್ಟಿದ್ದ ಒಂಟಿ ಸಲಗವೊಂದು ಜಯಮ್ಮ ಅವರ ಮೇಲೆ ದಾಳಿ ನಡೆಸಿದ್ದು, ಸ್ಥಳದಲ್ಲೇ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಘಟನೆ ತಿಳಿಯುತ್ತಿದ್ದಂತೆ ಅರಣ್ಯಾಧಿಕಾರಿಗಳು ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅರೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಶಾಶ್ವತ ಪರಿಹಾರಕ್ಕೆ ಆಗ್ರಹಿಸಿ ಅಹೋರಾತ್ರಿ ಪ್ರತಿಭಟನೆ

ಮಹಿಳೆ ಕಾಡಾನೆ ದಾಳಿಗೆ ಬಲಿಯಾದ ಬೆನ್ನಲ್ಲೇ ಗ್ರಾಮಸ್ಥರು ಆನೆ ಹಾವಳಿ ತಡೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ. ಮೃತ ಮಹಿಳೆಯ ಶವವನ್ನು ಸ್ಥಳದಿಂದ ಮೇಲೆತ್ತಲು ಬಿಡದೆ ಅಹೋರಾತ್ರಿ ಧರಣಿ ನಡೆಸಿದ್ದಾರೆ.

ಘಟನೆ ನಡೆದು 12 ಗಂಟೆಗಳಾದರೂ ಸ್ಥಳೀಯ ಶಾಸಕರು ಸ್ಥಳಕ್ಕೆ ಭೇಟಿ ನೀಡಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಬಾರಿ ಕಾಡಾನೆ ದಾಳಿಯಿಂದ ಸಾವು ಸಂಭವಿಸಿದಾಗ ಅಧಿಕಾರಿಗಳು ಪರಿಹಾರದ ಚೆಕ್ ನೀಡಿ ಹೋಗುತ್ತಾರೆ. ಆದರೆ, ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುತ್ತಿಲ್ಲ ಎಂದು ಪ್ರತಿಭಟನಾಕಾರರು ಅಸಮಾಧಾನ ಹೊರಹಾಕಿದ್ದಾರೆ.

ಕಾಡಾನೆಗಳ ನಿರಂತರ ಸಂಚಾರದಿಂದ ರೈತರು ಹಾಗೂ ಗ್ರಾಮಸ್ಥರು ಪ್ರತಿದಿನ ಆತಂಕದಲ್ಲೇ ಜೀವನ ನಡೆಸುವಂತಾಗಿದೆ. ಇನ್ನು ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಚೌಡನಹಳ್ಳಿ ಸಮೀಪ 17 ಕಾಡಾನೆಗಳು ಪ್ರತ್ಯಕ್ಷ

ಇದರ ನಡುವೆ ಚೌಡನಹಳ್ಳಿ ಗ್ರಾಮದ ಸಮೀಪವೇ 17 ಕಾಡಾನೆಗಳು ಕಾಣಿಸಿಕೊಂಡಿರುವುದು ಸ್ಥಳೀಯರ ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ. ಜಯಮ್ಮ ಅವರ ಪ್ರಾಣ ತೆಗೆದಿದ್ದ ಒಂಟಿ ಸಲಗ ಮತ್ತೆ ತನ್ನ ಗುಂಪನ್ನು ಸೇರಿಕೊಂಡಿದೆ ಎನ್ನಲಾಗಿದೆ.

ಚೌಡನಹಳ್ಳಿ, ಕುಶಾವರ ಹಾಗೂ ಬಕ್ರವಳ್ಳಿ ಸುತ್ತಮುತ್ತ ಕಾಡಾನೆಗಳ ಸಂಚಾರದ ಬಗ್ಗೆ ಆನೆ ಕಾರ್ಯಪಡೆಯ ಸಿಬ್ಬಂದಿ ಗ್ರಾಮಸ್ಥರಿಗೆ ಮಾಹಿತಿ ನೀಡುತ್ತಿದ್ದಾರೆ. ನಿರಂತರವಾಗಿ ಕಾಡಾನೆಗಳು ಗ್ರಾಮಗಳ ಸಮೀಪವೇ ಕಾಣಿಸಿಕೊಳ್ಳುತ್ತಿರುವುದರಿಂದ ಜನರು ಭಯಭೀತರಾಗಿದ್ದಾರೆ.

ಕಾಡಾನೆಗಳ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೂ ತೊಂದರೆಯಾಗುತ್ತಿದ್ದು, ಜನರ ಜೀವಕ್ಕೆ ಅಪಾಯ ಎದುರಾಗಿದೆ. ಪದೇಪದೆ ಇಂತಹ ದುರಂತಗಳು ಸಂಭವಿಸುತ್ತಿದ್ದರೂ ಶಾಶ್ವತ ಪರಿಹಾರ ಸಿಗದಿರುವುದಕ್ಕೆ ಗ್ರಾಮಸ್ಥರು ಅರಣ್ಯ ಇಲಾಖೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Read More
Next Story