
ಹಾವೇರಿ ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಅವಘಡ; ಮಗು ಸೇರಿ ನಾಲ್ವರು ಸಾವು
ರಾಣೇಬೆನ್ನೂರು ತಾಲೂಕಿನ ಚಳಗೇರಿ ಟೋಲ್ ಗೇಟ್ ಬಳಿ ರಸ್ತೆ ಬದಿ ನಿಲ್ಲಿಸಿದ್ದ ಲಾರಿಗೆ ವೇಗವಾಗಿ ಬಂದ ಕಾರೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕು ವ್ಯಾಪ್ತಿಯಲ್ಲಿ ಗುರುವಾರ ಸಂಭವಿಸಿದ ಎರಡು ಪ್ರತ್ಯೇಕ ಅವಘಡಗಳಲ್ಲಿ ಮಗು ಸೇರಿ ನಾಲ್ವರು ಮೃತಪಟ್ಟು, ಮೂವರು ಗಾಯಗೊಂಡಿದ್ದಾರೆ. ರಾಣೇಬೆನ್ನೂರು ತಾಲೂಕಿನ ಚಳಗೇರಿ ಟೋಲ್ ಗೇಟ್ ಬಳಿ ರಸ್ತೆ ಬದಿ ನಿಲ್ಲಿಸಿದ್ದ ಲಾರಿಗೆ ವೇಗವಾಗಿ ಬಂದ ಕಾರೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ದಾವಣಗೆರೆಯ ನಿಟವಳ್ಳಿ ಮೌನೇಶ್ವರ ಬಡಾವಣೆ ನಿವಾಸಿಗಳಾದ ಸಿದ್ದಾರ್ಥ (27), ಹಸನ್ಮುಖಿ (29) ಹಾಗೂ ಯಶೋಧಾ ಬಾಯಿ (51) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಸೌಂದರ್ಯ (26), ಸಿಂಧು (24) ಮತ್ತು ಒಂದು ವರ್ಷದ ಪುಟ್ಟ ಮಗು ಗಂಭೀರವಾಗಿ ಗಾಯಗೊಂಡಿದೆ. ರಾಣೇಬೆನ್ನೂರಿನಿಂದ ದಾವಣಗೆರೆಗೆ ಹಿಂತಿರುಗುವಾಗ ಈ ದುರಂತ ಸಂಭವಿಸಿದೆ. ಗಾಯಾಳುಗಳನ್ನು ದಾವಣಗೆರೆಯ ಎಸ್.ಎಸ್. ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.
ಸೇತುವೆಯಿಂದ ಕೆಳಗೆ ಬಿದ್ದ ಲಾರಿ; ಚಾಲಕ ಸಾವು
ರಾಣೇಬೆನ್ನೂರು ತಾಲೂಕಿನ ಹುಲಿಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲಿ ನಡೆದ ಮತ್ತೊಂದು ಘಟನೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಸೇತುವೆಯಿಂದ ಕೆಳಗೆ ಬಿದ್ದಿದೆ. ಮೃತರನ್ನು ಹುಬ್ಬಳ್ಳಿ ಮೂಲದ ಬಸವರಾಜ್ (45) ಎಂದು ಗುರುತಿಸಲಾಗಿದೆ. ಲಾರಿ ಹುಬ್ಬಳಿಯಿಂದ ಬೆಂಗಳೂರಿನತ್ತ ಸಾಗುತ್ತಿತ್ತು. ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

