ಆರ್. ಅಶೋಕ್ ನನ್ನ ವೈರಿಯಲ್ಲ, ಸ್ನೇಹಿತರು; ಹಿರಿಯೂರು ಉಪಚುನಾವಣೆ ಬಗ್ಗೆ ನಾಲ್ಕು ಗೋಡೆಗಳ ಮಧ್ಯೆ ಚರ್ಚೆ: ಹೆಚ್.ಡಿ. ಕುಮಾರಸ್ವಾಮಿ
x

ನಾಯಕರು ನಾಲ್ಕು ಗೋಡೆಗಳ ಮಧ್ಯೆ ಕುಳಿತು ಚರ್ಚಿಸಿ ಕೈಗೊಳ್ಳುತ್ತೇವೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದರು.

ಆರ್. ಅಶೋಕ್ ನನ್ನ ವೈರಿಯಲ್ಲ, ಸ್ನೇಹಿತರು; ಹಿರಿಯೂರು ಉಪಚುನಾವಣೆ ಬಗ್ಗೆ ನಾಲ್ಕು ಗೋಡೆಗಳ ಮಧ್ಯೆ ಚರ್ಚೆ: ಹೆಚ್.ಡಿ. ಕುಮಾರಸ್ವಾಮಿ

ನವದೆಹಲಿಯ ಭಾರತ ಮಂಟಪದಲ್ಲಿ ನಡೆದ ಮಂತ್ರಿ ಪರಿಷತ್ ಸಭೆಯ ಸಂದರ್ಭದಲ್ಲಿ ಅಮಿತ್ ಶಾ ಅವರು ರಾಜ್ಯದ ಬೆಳವಣಿಗೆಗಳ ಕುರಿತು ಸಂಕ್ಷಿಪ್ತವಾಗಿ ಚರ್ಚಿಸಿ, ಮರುದಿನ ಭೇಟಿಯಾಗುವಂತೆ ತಿಳಿಸಿದ್ದರು.


Click the Play button to hear this message in audio format

ಬೆಂಗಳೂರು, ನ. 20: ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ನನ್ನ ವೈರಿಯಲ್ಲ, ನಾವಿಬ್ಬರೂ ಆತ್ಮೀಯ ಸ್ನೇಹಿತರಾಗಿದ್ದೇವೆ. ಹಿರಿಯೂರು ಉಪಚುನಾವಣೆಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಎಲ್ಲಾ ಮಾಹಿತಿ ನೀಡಿದ್ದು, ಮುಂದಿನ ತೀರ್ಮಾನವನ್ನು ರಾಜ್ಯ ನಾಯಕರು ನಾಲ್ಕು ಗೋಡೆಗಳ ಮಧ್ಯೆ ಕುಳಿತು ಚರ್ಚಿಸಿ ಕೈಗೊಳ್ಳುತ್ತೇವೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದರು.

ಬೆಂಗಳೂರಿನಲ್ಲಿ ಶುಕ್ರವಾರ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಚಾರದಲ್ಲಿ ಸಾರ್ವಜನಿಕವಾಗಿ ಚರ್ಚೆ ಮಾಡುವ ಅಗತ್ಯವಿಲ್ಲ ಎಂದರು. ಇಲ್ಲಿ ನನ್ನ ವೈಯಕ್ತಿಕ ಪ್ರತಿಷ್ಠೆಯ ಪ್ರಶ್ನೆ ಬರುವುದಿಲ್ಲ. ವಿಧಾನ ಪರಿಷತ್ ಚುನಾವಣೆಯಲ್ಲಿ ನಾಲ್ಕು ಕ್ಷೇತ್ರಗಳಲ್ಲಿ ಎನ್‌ಡಿಎ ಅಭ್ಯರ್ಥಿಗಳು ಗೆಲುವು ಸಾಧಿಸಿದಂತೆ, ಹಿರಿಯೂರು ಕ್ಷೇತ್ರದಲ್ಲಿಯೂ ಎನ್‌ಡಿಎ ಅಭ್ಯರ್ಥಿ ಗೆಲ್ಲಬೇಕು ಎಂಬುದು ನನ್ನ ಅಪೇಕ್ಷೆಯಾಗಿದೆ. ಇದನ್ನೇ ಅಮಿತ್ ಶಾ ಅವರಿಗೆ ತಿಳಿಸಿದ್ದು, ಕ್ಷೇತ್ರದ ಗ್ರೌಂಡ್ ರಿಪೋರ್ಟ್ ಅನ್ನು ಗೃಹ ಸಚಿವರಿಗೆ ನೀಡಿದ್ದೇನೆ ಎಂದು ಹೇಳಿದರು.

ರಾಜ್ಯದಲ್ಲಿ ಎನ್‌ಡಿಎ ಮೈತ್ರಿಕೂಟ ಗಟ್ಟಿಯಾಗಿದ್ದು, ಕಾಂಗ್ರೆಸ್ ಸರ್ಕಾರದ ದುರಾಡಳಿತದ ವಿರುದ್ಧ ಹೋರಾಟ ನಡೆಸುತ್ತಿದ್ದೇವೆ. ಇಂತಹ ಸಂದರ್ಭದಲ್ಲಿ ಜೆಡಿಎಸ್‌ಗೆ ಟಿಕೆಟ್ ಬೇಕು ಎನ್ನುವ ಪ್ರತಿಷ್ಠೆ ಅಥವಾ ಆತುರ ನನಗಿಲ್ಲ ಎಂದು ಸ್ಪಷ್ಟಪಡಿಸಿದರು. ಬಿಡದಿ ಟೌನ್‌ಶಿಪ್, ನೈಸ್, ಕೆಪಿಎಸ್‌ಸಿ ಹಾಗೂ ಸ್ಟಿಂಗ್ ಆಪರೇಷನ್ ಸೇರಿದಂತೆ ಹಲವು ವಿಚಾರಗಳಲ್ಲಿ ಸರ್ಕಾರದ ವಿರುದ್ಧ ಕಟುವಾಗಿ ಟೀಕಿಸಿ ಹೋರಾಟ ಮಾಡಿದ್ದೇನೆ. ಅದಕ್ಕೆ ಪ್ರತಿಫಲವಾಗಿ ಕೆಟ್ಟದಾಗಿ ಬೈಸಿಕೊಂಡಿದ್ದೇನೆ. ಈ ಎಲ್ಲಾ ಮಾಹಿತಿಯೂ ಅಮಿತ್ ಶಾ ಅವರಿಗೆ ಇದೆ ಎಂದರು.

### ಅಮಿತ್ ಶಾ ಭೇಟಿ ಮತ್ತು ಹಿರಿಯೂರು ಚುನಾವಣಾ ತಂತ್ರ

ನವದೆಹಲಿಯ ಭಾರತ ಮಂಟಪದಲ್ಲಿ ನಡೆದ ಮಂತ್ರಿ ಪರಿಷತ್ ಸಭೆಯ ಸಂದರ್ಭದಲ್ಲಿ ಅಮಿತ್ ಶಾ ಅವರು ರಾಜ್ಯದ ಬೆಳವಣಿಗೆಗಳ ಕುರಿತು ಸಂಕ್ಷಿಪ್ತವಾಗಿ ಚರ್ಚಿಸಿ, ಮರುದಿನ ಭೇಟಿಯಾಗುವಂತೆ ತಿಳಿಸಿದ್ದರು. ಅದರಂತೆ ಗುರುವಾರ ಸಂಜೆ ದೆಹಲಿಯಲ್ಲಿ ಅವರನ್ನು ಭೇಟಿಯಾಗಿ ಹಿರಿಯೂರು ಉಪಚುನಾವಣೆ ಸೇರಿದಂತೆ ರಾಜ್ಯದ ಎಲ್ಲಾ ಬೆಳವಣಿಗೆಗಳ ಬಗ್ಗೆ ಸಮಾಲೋಚನೆ ನಡೆಸಿದ್ದೇನೆ ಎಂದು ಕುಮಾರಸ್ವಾಮಿ ವಿವರಿಸಿದರು.

ಅಮಿತ್ ಶಾ ಅವರು ಕೆಲವು ಮಹತ್ವದ ಸೂಚನೆಗಳನ್ನು ನೀಡಿದ್ದು, ಅದರಂತೆಯೇ ಕೆಲಸ ಮಾಡುತ್ತೇನೆ ಹಾಗೂ ರಾಜ್ಯ ಬಿಜೆಪಿ ನಾಯಕರೊಂದಿಗೆ ಮಾತುಕತೆ ನಡೆಸುತ್ತೇನೆ. ನಮ್ಮ ಪಕ್ಷವೇ ನಿಲ್ಲಬೇಕು ಎನ್ನುವುದಕ್ಕಿಂತ ಮೈತ್ರಿಕೂಟ ಚುನಾವಣೆ ಗೆಲ್ಲುವುದು ಮುಖ್ಯವಾಗಿದೆ. ಹಿರಿಯೂರಿನಲ್ಲಿ ಕಾಂಗ್ರೆಸ್ ಪಕ್ಷ ಒಂದೊಂದು ಜಾತಿಗೆ ಒಬ್ಬೊಬ್ಬ ಸಚಿವರನ್ನು ನೇಮಕ ಮಾಡಿದ್ದು, ಅಧಿಕಾರ ಹಾಗೂ ಹಣಬಲದಿಂದ ಚುನಾವಣೆ ನಡೆಸಲು ಮುಂದಾಗಿದೆ. ನಾವು ಒಗ್ಗಟ್ಟಿನಿಂದ ಎದುರಿಸದಿದ್ದರೆ ಅವರು ಅಡ್ಡಮಾರ್ಗದಲ್ಲಿ ಗೆಲ್ಲುತ್ತಾರೆ. ಕ್ಷೇತ್ರದ ನೈಜ ಪರಿಸ್ಥಿತಿಯನ್ನು ಅಮಿತ್ ಶಾ ಅವರ ಗಮನಕ್ಕೆ ತಂದಿದ್ದು, ರಾಜ್ಯದ ಬಿಜೆಪಿ ನಾಯಕರಿಗೂ ಇದನ್ನೇ ಹೇಳಲು ಬಯಸುತ್ತೇನೆ ಎಂದು ತಿಳಿಸಿದರು.

### ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸಲು ಒತ್ತಾಯ

ಭಾರತ್ ಜೋಡೋ ಸಂಘಗಳಿಗೆ ಸಾವಿರ ಕೋಟಿ ರೂಪಾಯಿ ಕೊಡಲು ಹಣವಿದೆ. ಆದರೆ, ನಿರಂತರವಾಗಿ ಜನರ ಆರೋಗ್ಯ ರಕ್ಷಣೆ ಮಾಡುವ ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸಲು ಈ ಸರ್ಕಾರದ ಬಳಿ ಹಣವಿಲ್ಲ ಎಂದು ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದರು. ಅನಗತ್ಯವಾಗಿ ಸಾರ್ವಜನಿಕರ ತೆರಿಗೆ ಹಣವನ್ನು ಪೋಲು ಮಾಡುತ್ತಿರುವ ಸರ್ಕಾರಕ್ಕೆ, ಚಳಿಯನ್ನು ಲೆಕ್ಕಿಸದೆ ಮಕ್ಕಳೊಂದಿಗೆ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರು ಕಣ್ಣಿಗೆ ಕಾಣುತ್ತಿಲ್ಲ. ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕುವುದೇ ಸರ್ಕಾರಕ್ಕೆ ದೊಡ್ಡ ಕೆಲಸವಾಗಿದೆ ಎಂದು ಆರೋಪಿಸಿದರು.

ಆಶಾ ಕಾರ್ಯಕರ್ತೆಯರು ರಸ್ತೆಯಲ್ಲಿ ಮಲಗಿ ಪ್ರತಿಭಟನೆ ನಡೆಸುತ್ತಿರುವುದು ನಾಗರಿಕ ಸರ್ಕಾರಕ್ಕೆ ಶೋಭೆ ತರುವುದಿಲ್ಲ. ಸರ್ಕಾರ ತಕ್ಷಣವೇ ಅವರಿಗೆ ಸ್ಪಂದಿಸಿ, ಗೌರವಧನ ಹೆಚ್ಚಳ ಹಾಗೂ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು ಎಂದು ಒತ್ತಾಯಿಸಿದರು. ಕೆಲವು ತಿಂಗಳ ಹಿಂದೆ ಆಶಾ ಕಾರ್ಯಕರ್ತೆಯರು ರಾಜ್ಯದಲ್ಲಿ ಪ್ರತಿಭಟನೆ ನಡೆಸಿದಾಗ, ಅವರನ್ನು ದೆಹಲಿಗೆ ಕರೆಸಿಕೊಂಡು ಅಂದಿನ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಅನ್ನಪೂರ್ಣ ದೇವಿ ಅವರೊಂದಿಗೆ ಸಭೆ ನಡೆಸಿದ್ದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಕೂಡ ಈ ನಿಟ್ಟಿನಲ್ಲಿ ಪ್ರಯತ್ನಿಸಿದ್ದು, ಅವರ ಸಮಸ್ಯೆಗಳ ಬಗ್ಗೆ ನನಗೂ ಅರಿವಿದೆ ಎಂದು ಕುಮಾರಸ್ವಾಮಿ ಹೇಳಿದರು.

Read More
Next Story