
ಕರ್ನಾಟಕದ 10 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ರಾಜ್ಯಾದ್ಯಂತ ವರುಣನ ಅಬ್ಬರ: 10 ಜಿಲ್ಲೆಗಳಿಗೆೆ ಯೆಲ್ಲೋ,ಆರೆಂಜ್ ಅಲರ್ಟ್
ಕರ್ನಾಟಕದ 10 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದ್ದು, ಬಿರುಗಾಳಿ ಸಹಿತ ಭಾರೀ ಮಳೆಯ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಮುಂದಿನ ಕೆಲವು ದಿನಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಮುನ್ನೆಚ್ಚರಿಕೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಪ್ರಮುಖ ಹತ್ತು ಜಿಲ್ಲೆಗಳಿಗೆ ಹಳದಿ ಮುನ್ನೆಚ್ಚರಿಕೆ ಅಂದರೆ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಚಾಮರಾಜನಗರ, ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಸಿಡಿಲು ಸಂಭವಿಸುವ ಸಾಧ್ಯತೆಯಿದ್ದು, ಈ ಭಾಗಗಳಲ್ಲಿ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದ್ದು, ಸಮುದ್ರದ ಅಲೆಗಳ ಅಬ್ಬರ ಹೆಚ್ಚಿರಲಿರುವುದರಿಂದ ಮೀನುಗಾರರು ಸಮುದ್ರಕ್ಕಿಳಿಯದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ಉತ್ತರ ಒಳನಾಡಿನ ಜಿಲ್ಲೆಗಳಾದ ಧಾರವಾಡ, ಗದಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಹವಾಮಾನದ ವೈಪರೀತ್ಯ ಜೋರಾಗಿರಲಿದ್ದು, ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬಲವಾದ ಬಿರುಗಾಳಿ ಬೀಸಲಿದೆ. ಇದರೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯೂ ಇದೆ. ಉಳಿದಂತೆ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಾಪುರ, ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಗಳ ಹಲವೆಡೆ ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಪ್ರಮುಖ ಜಿಲ್ಲೆಗಳಾದ ಕೊಡಗು, ಮೈಸೂರು, ಹಾಸನ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹಾಗೂ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದ ಬಿರುಗಾಳಿಯೊಂದಿಗೆ ಭಾರಿ ಮಳೆಯಾಗಲಿದೆ. ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಸೇರಿದಂತೆ ಬಳ್ಳಾರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಯೆಲ್ಲೋ ಅಲರ್ಟ್ ಘೋಷಿಸಲಾಗಿರುವ ಜಿಲ್ಲೆಗಳ ಸಾರ್ವಜನಿಕರು ಹಾಗೂ ರೈತರು ಮುನ್ನೆಚ್ಚರಿಕೆ ವಹಿಸುವುದು ಅತ್ಯಗತ್ಯವಾಗಿದೆ. ಗುಡುಗು ಮತ್ತು ಸಿಡಿಲಿನ ಸಂದರ್ಭದಲ್ಲಿ ಸಾರ್ವಜನಿಕರು ಬಯಲು ಪ್ರದೇಶಗಳಲ್ಲಿ ಅಥವಾ ಮರದ ಕೆಳಗೆ ನಿಲ್ಲುವುದನ್ನು ಕಡ್ಡಾಯವಾಗಿ ತಪ್ಪಿಸಬೇಕು ಮತ್ತು ತಕ್ಷಣವೇ ಸುರಕ್ಷಿತ ಕಟ್ಟಡಗಳಲ್ಲಿ ಆಶ್ರಯ ಪಡೆಯಬೇಕು ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

