ಇಂಡಿಯಾ ಮೈತ್ರಿಕೂಟದ ಮಿತ್ರಪಕ್ಷಗಳನ್ನೊಳಗೊಂಡ ರಾಜ್ಯಮಟ್ಟದ ಸಮನ್ವಯ ಸಮಿತಿ ರಚನೆ
x

ಇಂಡಿಯಾ ಮೈತ್ರಿಕೂಟದ ಮಿತ್ರಪಕ್ಷಗಳನ್ನೊಳಗೊಂಡ ರಾಜ್ಯಮಟ್ಟದ ಸಮನ್ವಯ ಸಮಿತಿ ರಚನೆ

ಎಸ್‌ಐಆರ್‌ನಲ್ಲಿನ ಲೋಪದೋಷಗಳು, ಅರ್ಹ ಮತದಾರರ ಹೆಸರನ್ನು ಕೈಬಿಡುವ ಕ್ರಮ ಖಂಡಿಸಿ, ರಾಜ್ಯಾದ್ಯಂತ ಮತ ಉಳಿಸಿ – ದೇಶ ಉಳಿಸಿ ಎಂಬ ಘೋಷವಾಕ್ಯದಡಿ ಸಂಘಟಿತ ಹೋರಾಟ ನಡೆಸಲು ತೀರ್ಮಾನಿಸಲಾಗಿದೆ.


Click the Play button to hear this message in audio format

ದೇಶದ ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕಿನ ರಕ್ಷಣೆಗಾಗಿ ಇಂಡಿಯಾ ಮೈತ್ರಿಕೂಟದ ಮಿತ್ರಪಕ್ಷಗಳು ಐತಿಹಾಸಿಕ ಹೋರಾಟಕ್ಕೆ ಸಜ್ಜಾಗಿವೆ. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿನ ಲೋಪದೋಷಗಳು ಮತ್ತು ಅರ್ಹ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡುತ್ತಿರುವುದನ್ನು ಖಂಡಿಸಿ, ರಾಜ್ಯಾದ್ಯಂತ ಮತ ಉಳಿಸಿ – ದೇಶ ಉಳಿಸಿ ಎಂಬ ಘೋಷವಾಕ್ಯದಡಿ ಸಂಘಟಿತ ಹೋರಾಟ ನಡೆಸಲು ತೀರ್ಮಾನಿಸಲಾಗಿದೆ.

ಬೆಂಗಳೂರಿನ ಶಾಸಕರ ಭವನದಲ್ಲಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ನೇತೃತ್ವದಲ್ಲಿ ನಡೆದ ರಾಜ್ಯಮಟ್ಟದ ಸಭೆಯಲ್ಲಿ ಕಾಂಗ್ರೆಸ್‌ನೊಂದಿಗೆ ಸಿಪಿಐ, ಸಿಪಿಐ(ಎಂ), ಸಿಪಿಐ(ಎಂಎಲ್) ಲಿಬರೇಶನ್, ಸಮಾಜವಾದಿ ಪಕ್ಷ ಹಾಗೂ ಫಾರ್ವರ್ಡ್ ಬ್ಲಾಕ್ ಮುಂತಾದ ಮಿತ್ರಪಕ್ಷಗಳ ಮುಖಂಡರು ಭಾಗವಹಿಸಿದ್ದರು. ಈ ಸಭೆಯು ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿದ್ದು, ಕೇಂದ್ರ ಸರ್ಕಾರದ ಧೋರಣೆಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಲಾಯಿತು.

ಸಭೆಯನ್ನುದ್ದೇಶಿಸಿ ಮಾತನಾಡಿದ ಬಿ.ಕೆ. ಹರಿಪ್ರಸಾದ್, ಪ್ರಜಾಪ್ರಭುತ್ವದ ಅಸ್ತಿತ್ವಕ್ಕೆ ಧಕ್ಕೆ ತರುವಂತಹ ಪ್ರಕ್ರಿಯೆಗಳನ್ನು ಸರ್ಕಾರ ಮಾಡುತ್ತಿದೆ ಎಂದು ಆಪಾದಿಸಿದರು. "ಮತದಾನದ ಹಕ್ಕು ಪ್ರತಿಯೊಬ್ಬ ನಾಗರಿಕನ ಶಕ್ತಿ. ಆದರೆ, ದೇಶಾದ್ಯಂತ ಸುಮಾರು 13 ಕೋಟಿ ಅರ್ಹ ಮತದಾರರನ್ನು ಪಟ್ಟಿಯಿಂದ ಅಕ್ರಮವಾಗಿ ಕೈಬಿಡಲಾಗಿದೆ. ಈ ಎಸ್‌ಐಆರ್ ಪ್ರಕ್ರಿಯೆಯು ಸಂಪೂರ್ಣವಾಗಿ ದೋಷಪೂರಿತವಾಗಿದ್ದು, ಇದನ್ನು ತಕ್ಷಣವೇ ರದ್ದುಗೊಳಿಸಬೇಕು" ಎಂದು ಒತ್ತಾಯಿಸಿದರು. ಚುನಾವಣಾ ಆಯೋಗವು ಸ್ವತಂತ್ರ ಸಾಂವಿಧಾನಿಕ ಸಂಸ್ಥೆಯಾಗಿ ಕಾರ್ಯನಿರ್ವಹಿಸುವ ಬದಲು, ಆಡಳಿತರೂಢ ಪಕ್ಷದ ಕೈಗೊಂಬೆಯಾಗಿ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದ ಅವರು, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಇಂಡಿಯಾ ಮೈತ್ರಿಕೂಟದ ಸ್ಪಷ್ಟ ನಿಲುವನ್ನು ಮಂಡಿಸಿದರು. "ಒಂದು ರಾಜಕೀಯ ಪಕ್ಷಕ್ಕೆ ಅನುಕೂಲ ಮಾಡಿಕೊಡಲು ಲಕ್ಷಾಂತರ ಜನರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವುದು ಫ್ಯಾಸಿಸ್ಟ್ ಧೋರಣೆಯಾಗಿದೆ" ಎಂದು ಕಿಡಿಕಾರಿದರು.

ಸಮನ್ವಯ ಸಮಿತಿ ರಚನೆ

ರಾಜ್ಯದಲ್ಲಿ ಈ ಹೋರಾಟವನ್ನು ಕೇವಲ ನಗರಗಳಿಗೆ ಸೀಮಿತಗೊಳಿಸದೆ, ಹಳ್ಳಿ ಹಳ್ಳಿಗೂ ಕೊಂಡೊಯ್ಯಲು ಇಂಡಿಯಾ ಮೈತ್ರಿಕೂಟವು ನಿರ್ಧರಿಸಿದೆ. ಇದಕ್ಕಾಗಿ ಕಾಂಗ್ರೆಸ್ ಸೇರಿದಂತೆ ಎಲ್ಲಾ ಮಿತ್ರಪಕ್ಷಗಳ ಪ್ರತಿನಿಧಿಗಳನ್ನು ಒಳಗೊಂಡ ಸಮನ್ವಯ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಯು ಮುಂದಿನ ದಿನಗಳಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಹೋರಾಟವನ್ನು ಹೇಗೆ ವಿಸ್ತರಿಸಬೇಕು ಎಂಬುದರ ಕುರಿತು ರೂಪುರೇಷೆ ಸಿದ್ಧಪಡಿಸಲಿದೆ. ಇದು ಕೇವಲ ರಾಜಕೀಯ ಪಕ್ಷಗಳ ಹೋರಾಟವಲ್ಲ, ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಉಳಿಸಿಕೊಳ್ಳಲು ನಡೆಯುತ್ತಿರುವ ನಾಗರಿಕ ಹಕ್ಕುಗಳ ರಕ್ಷಣಾ ಆಂದೋಲನ. ರೈತರು, ಕಾರ್ಮಿಕರು, ಮಹಿಳೆಯರು, ವಿದ್ಯಾರ್ಥಿಗಳು ಮತ್ತು ಪ್ರಗತಿಪರ ಸಂಘಟನೆಗಳನ್ನು ಈ ಹೋರಾಟದಲ್ಲಿ ಕೈಜೋಡಿಸುವಂತೆ ಮನವಿ ಮಾಡಲಾಗುವುದು ಎಂದು ಹೇಳಿದರು.

ಸಭೆಯಲ್ಲಿ ಅಂತಿಮಗೊಳಿಸಿದಂತೆ, ಮುಂಬರುವ ದಿನಗಳಲ್ಲಿ ಪ್ರತಿಭಟನೆಗಳು ನಡೆಯಲಿವೆ. ನ.1ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಯಲಿರುವ ಬೃಹತ್ ರಾಷ್ಟ್ರಮಟ್ಟದ ಪ್ರತಿಭಟನೆಯಲ್ಲಿ ಕರ್ನಾಟಕದಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ನ.5 ರಂದು ಬೆಂಗಳೂರಿನಲ್ಲಿ ಮತದಾರರ ಪಟ್ಟಿಯ ಲೋಪದೋಷಗಳ ವಿರುದ್ಧ ಹಾಗೂ ಚುನಾವಣಾ ಆಯೋಗದ ನಡೆಯನ್ನು ಖಂಡಿಸಿ ಬೃಹತ್ ಪ್ರತಿಭಟನಾ ಸಮಾವೇಶ ಆಯೋಜಿಸಲಾಗಿದೆ. ಬೆಂಗಳೂರಿನ ಸಮಾವೇಶದ ನಂತರ, ಈ ಹೋರಾಟವನ್ನು ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಿಗೆ ವಿಸ್ತರಿಸಲು ತೀರ್ಮಾನಿಸಲಾಗಿದೆ.

ಪ್ರಜಾಸತ್ತಾತ್ಮಕ ಹಕ್ಕುಗಳ ರಕ್ಷಣೆ

ಸಭೆಯಲ್ಲಿ ಭಾಗವಹಿಸಿದ್ದ ಇತರ ಮಿತ್ರಪಕ್ಷಗಳ ಮುಖಂಡರು, "ಸಂವಿಧಾನವನ್ನು ದುರ್ಬಲಗೊಳಿಸುವ ಪ್ರಯತ್ನಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿವೆ. ಜನರ ಧ್ವನಿಯನ್ನು ಹತ್ತಿಕ್ಕಲು ನಿರ್ಬಂಧಗಳನ್ನು ವಿಧಿಸುತ್ತಿದ್ದರೂ, ನಾವು ಸಂವಿಧಾನ ಮತ್ತು ಮತಾಧಿಕಾರದ ರಕ್ಷಣೆಗಾಗಿ ಹೋರಾಡುವುದನ್ನು ನಿಲ್ಲಿಸುವುದಿಲ್ಲ" ಎಂದು ಒಕ್ಕೊರಲಿನಿಂದ ನುಡಿದರು. ಮತದಾರರ ಪಟ್ಟಿಯ ಪರಿಷ್ಕರಣೆ ಎಂಬುದು ತಾಂತ್ರಿಕ ಪ್ರಕ್ರಿಯೆಯಲ್ಲ, ಇದು ದೇಶದ ಭವಿಷ್ಯವನ್ನು ನಿರ್ಧರಿಸುವ ಪ್ರಕ್ರಿಯೆ. ಇಂತಹ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಇಲ್ಲದಿದ್ದರೆ ಪ್ರಜಾಪ್ರಭುತ್ವದ ಅಡಿಪಾಯವೇ ಕುಸಿಯುತ್ತದೆ ಎಂಬುದು ಸಭೆಯ ಆಶಯವಾಗಿತ್ತು. ವಿದ್ಯಾರ್ಥಿ ಯುವಜನತೆ ಮತ್ತು ಸಾಮಾಜಿಕ ಕಾರ್ಯಕರ್ತರು ಈ ಆಂದೋಲನದಲ್ಲಿ ಸಕ್ರಿಯವಾಗಿ ಭಾಗವಹಿಸುವ ಅಗತ್ಯವಿದೆ ಎಂದು ಮುಖಂಡರು ಕರೆ ನೀಡಿದರು.

Read More
Next Story