
ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕದ ಹಿತಾಸಕ್ತಿ ಕಾಪಾಡಬೇಕು ಎಂಬುದು ಹೋರಾಟಗಾರರ ಪ್ರಮುಖ ಒತ್ತಾಯವಾಗಿದೆ.
ಕಾವೇರಿ ಜಲ ವಿವಾದ: ಕರ್ನಾಟಕ ಬಂದ್‌ಗೆ ಸಿಗದ ಬೆಂಬಲ- ಬಸ್ ಸಂಚಾರ ಯಥಾಸ್ಥಿತಿ
ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕದ ಹಿತಾಸಕ್ತಿ ಕಾಪಾಡಬೇಕು ಎಂಬುದು ಹೋರಾಟಗಾರರ ಪ್ರಮುಖ ಒತ್ತಾಯವಾಗಿದೆ. ರಾಜ್ಯದ ನೀರಾವರಿ ಯೋಜನೆಗಳನ್ನು ಮುಂದುವರಿಸಬೇಕು ಎಂಬ ಬೇಡಿಕೆಗಳನ್ನೂ ಪ್ರತಿಭಟನಾಕಾರರು ಮುಂದಿಟ್ಟಿದ್ದಾರೆ.
ಕಾವೇರಿ ನೀರು ಹಂಚಿಕೆ ವಿವಾದವನ್ನು ಮುಂದಿಟ್ಟುಕೊಂಡು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಗುರುವಾರ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಆದರೆ ಪ್ರಮುಖ ಕನ್ನಡಪರ ಸಂಘಟನೆಗಳ ವ್ಯಾಪಕ ಬೆಂಬಲ ಇಲ್ಲದ ಹಿನ್ನೆಲೆಯಲ್ಲಿ ಬಂದ್ ರಾಜ್ಯಾದ್ಯಂತ ಸಂಪೂರ್ಣವಾಗಿ ಪರಿಣಾಮ ಬೀರುವ ಸಾಧ್ಯತೆ ಕಡಿಮೆ ಎನ್ನಲಾಗುತ್ತಿದೆ. ಹಲವು ಕಡೆ ಪ್ರತಿಭಟನೆಗಳು ನಡೆಯುವ ನಿರೀಕ್ಷೆಯಿದ್ದು, ಸಾರ್ವಜನಿಕ ಸಾರಿಗೆ ಸೇರಿದಂತೆ ಬಹುತೇಕ ಸೇವೆಗಳು ಎಂದಿನಂತೆ ಮುಂದುವರಿಯುವ ಸಾಧ್ಯತೆ ಇದೆ.
ವಾಟಾಳ್ ನಾಗರಾಜ್ ನೇತೃತ್ವದ ಕನ್ನಡ ಸಂಘಟನೆಗಳ ಒಕ್ಕೂಟದ ಜೊತೆಗೆ ಕನ್ನಡ ಸೇನೆ, ಕನ್ನಡ ಜಾಗೃತಿ ವೇದಿಕೆ ಸೇರಿದಂತೆ ಕೆಲವು ಸಂಘಟನೆಗಳು ಬಂದ್‌ಗೆ ಬೆಂಬಲ ಘೋಷಿಸಿವೆ. ಹೀಗಾಗಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ವ್ಯಾಪಕ ಬಂದ್ ನಡೆಯುವ ಪರಿಸ್ಥಿತಿ ಸದ್ಯಕ್ಕೆ ಕಾಣಿಸುತ್ತಿಲ್ಲ.
ಬೆಂಗಳೂರಿನಲ್ಲಿ ಬೆಳಗ್ಗಿನಿಂದಲೇ ಮಡಿವಾಳ, ಶಾಂತಿನಗರ ಸೇರಿದಂತೆ ಹಲವು ಭಾಗಗಳಲ್ಲಿ ಬಿಎಂಟಿಸಿ ಹಾಗೂ ಖಾಸಗಿ ಬಸ್‌ಗಳ ಸಂಚಾರ ಆರಂಭವಾಗಿದೆ. ಅಂಗಡಿ-ಮುಂಗಟ್ಟುಗಳು ಹಾಗೂ ಇತರ ವಾಣಿಜ್ಯ ಚಟುವಟಿಕೆಗಳ ಮೇಲೂ ಬಂದ್‌ನ ಪರಿಣಾಮ ಸೀಮಿತವಾಗಿರುವ ಸಾಧ್ಯತೆ ಇದೆ.
ಸಾರ್ವಜನಿಕರಿಗೆ ತೊಂದರೆ ನೀಡದಂತೆ ಪೊಲೀಸರ ಸೂಚನೆ
ಬಂದ್ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ. ನಗರದ ಕೇಂದ್ರ, ಪಶ್ಚಿಮ, ವಾಯವ್ಯ ವಿಭಾಗಗಳು ಹಾಗೂ ಎಲೆಕ್ಟ್ರಾನಿಕ್ ಸಿಟಿ ಸೇರಿದಂತೆ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ನಿಗಾ ವಹಿಸಲಾಗಿದೆ. ವಿಶೇಷವಾಗಿ ತಮಿಳು ಭಾಷಿಕರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ ಪ್ರದೇಶಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಟ್ಟೆಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಸರ್ಕಾರಿ ಬಸ್‌ಗಳು, ಖಾಸಗಿ ವಾಹನಗಳು ಅಥವಾ ಇತರ ವಾಹನಗಳ ಸಂಚಾರಕ್ಕೆ ಅಡ್ಡಿಪಡಿಸಬಾರದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಬಂದ್ ಹೆಸರಿನಲ್ಲಿ ಅಂಗಡಿ-ಮುಂಗಟ್ಟುಗಳನ್ನು ಬಲವಂತವಾಗಿ ಮುಚ್ಚಿಸುವುದು, ಸಾರ್ವಜನಿಕರಿಗೆ ತೊಂದರೆ ನೀಡುವುದು ಅಥವಾ ಸಂಚಾರಕ್ಕೆ ಅಡ್ಡಿಪಡಿಸುವುದನ್ನು ಸಹಿಸುವುದಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ನಿಯಮ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಲಾಗಿದೆ.
ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆಗೆ ಅವಕಾಶ
ಬಂದ್ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸಲು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅವಕಾಶ ನೀಡಲಾಗಿದೆ. ಆದರೆ ಅನುಮತಿ ಇಲ್ಲದೆ ನಗರದ ಇತರ ಭಾಗಗಳಲ್ಲಿ ಧರಣಿ ಅಥವಾ ರ‍್ಯಾಲಿ ನಡೆಸಿದರೆ ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ.
ಮೆಜೆಸ್ಟಿಕ್‌ನಿಂದ ಪ್ರತಿಭಟನಾ ಮೆರವಣಿಗೆ
ವಾಟಾಳ್ ನಾಗರಾಜ್ ಅವರು ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಮೆಜೆಸ್ಟಿಕ್‌ಗೆ ಆಗಮಿಸುವ ನಿರೀಕ್ಷೆಯಿದೆ. ಅಲ್ಲಿನ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್ ನಿಲ್ದಾಣಗಳಿಗೆ ತೆರಳಿ, ಬಂದ್‌ಗೆ ಬೆಂಬಲ ನೀಡುವಂತೆ ಸಾರಿಗೆ ಸಿಬ್ಬಂದಿಗೆ ಮನವಿ ಮಾಡುವ ಕಾರ್ಯಕ್ರಮ ನಿಗದಿಯಾಗಿದೆ.
ನಂತರ ಟೌನ್‌ಹಾಲ್‌ನಿಂದ ಫ್ರೀಡಂ ಪಾರ್ಕ್‌ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ತೀರ್ಮಾನಿಸಲಾಗಿದೆ. ತೆರೆದ ವಾಹನದಲ್ಲಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನಡೆಯಲಿರುವ ಮೆರವಣಿಗೆ ಟೌನ್‌ಹಾಲ್‌ನಿಂದ ಹಲಸೂರು ಗೇಟ್ ಪೊಲೀಸ್ ಠಾಣೆ, ಮೈಸೂರು ಬ್ಯಾಂಕ್ ಸರ್ಕಲ್ ಹಾಗೂ ಓಣಿ ಆಂಜನೇಯ ಸ್ವಾಮಿ ದೇವಸ್ಥಾನದ ಮಾರ್ಗವಾಗಿ ಫ್ರೀಡಂ ಪಾರ್ಕ್ ತಲುಪಲಿದೆ.
ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕದ ಹಿತಾಸಕ್ತಿಯನ್ನು ಕಾಪಾಡಬೇಕು ಎಂಬ ಒತ್ತಾಯದೊಂದಿಗೆ ಈ ಪ್ರತಿಭಟನೆ ನಡೆಯುತ್ತಿದ್ದು, ಇಂದಿನ ಬೆಳವಣಿಗೆಗಳ ಆಧಾರದ ಮೇಲೆ ಬಂದ್‌ನ ವಾಸ್ತವಿಕ ಪರಿಣಾಮ ಸ್ಪಷ್ಟವಾಗಲಿದೆ.

