ರಾಜ್ಯದಲ್ಲಿ ಶೇ.39 ಮಳೆ ಕೊರತೆ: ಒಂದು ವಾರದೊಳಗೆ ಸಮಗ್ರ ಬರ ವರದಿಗೆ ಸಿಎಂ ಡಿ.ಕೆ. ಶಿವಕುಮಾರ್ ಕಟ್ಟುನಿಟ್ಟಿನ ಸೂಚನೆ
x

ರಾಜ್ಯದಲ್ಲಿ ಮುಂಗಾರು ಮಳೆ ತೀವ್ರವಾಗಿ ಕೊರತೆಯಾಗಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ನಿರ್ವಹಣೆಗೆ ಜಿಲ್ಲಾಡಳಿತ ಸಂಪೂರ್ಣ ಸಜ್ಜಾಗಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚನೆ ನೀಡಿದರು. 

ರಾಜ್ಯದಲ್ಲಿ ಶೇ.39 ಮಳೆ ಕೊರತೆ: ಒಂದು ವಾರದೊಳಗೆ ಸಮಗ್ರ ಬರ ವರದಿಗೆ ಸಿಎಂ ಡಿ.ಕೆ. ಶಿವಕುಮಾರ್ ಕಟ್ಟುನಿಟ್ಟಿನ ಸೂಚನೆ

ಜಲವಿದ್ಯುತ್ ಉತ್ಪಾದನೆಗೆ ಪ್ರಮುಖವಾದ ಲಿಂಗನಮಕ್ಕಿ, ಸೂಪ ಹಾಗೂ ವರಾಹಿ ಜಲಾಶಯಗಳಲ್ಲಿ ಸರಾಸರಿ ಶೇಕಡಾ 23ರಷ್ಟು ಮಾತ್ರ ನೀರು ಉಳಿದಿದೆ.


Click the Play button to hear this message in audio format

ರಾಜ್ಯದಲ್ಲಿ ಮುಂಗಾರು ಮಳೆ ತೀವ್ರವಾಗಿ ಕೊರತೆಯಾಗಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ನಿರ್ವಹಣೆಗೆ ಜಿಲ್ಲಾಡಳಿತ ಸಂಪೂರ್ಣ ಸಜ್ಜಾಗಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚನೆ ನೀಡಿದರು. ಕುಡಿಯುವ ನೀರಿಗೆ ಯಾವುದೇ ಕಾರಣಕ್ಕೂ ಕೊರತೆಯಾಗದಂತೆ ನೋಡಿಕೊಳ್ಳಬೇಕು, ಕ್ಷೇತ್ರಮಟ್ಟದಲ್ಲಿ ಅಧಿಕಾರಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು ಹಾಗೂ ಒಂದು ವಾರದೊಳಗೆ ಸಮಗ್ರ ಬರ ವರದಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ನಿರ್ದೇಶನ ನೀಡಿದರು.

ವಿಧಾನಸೌಧದ ಸಭಾಂಗಣದಲ್ಲಿ ಭಾನುವಾರ ವಿಡಿಯೊ ಕಾನ್ಫರೆನ್ಸ್ ಮೂಲಕ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಸಿಇಒಗಳೊಂದಿಗೆ ನಡೆದ ಬರ ಪರಿಶೀಲನಾ ಸಭೆಯಲ್ಲಿ ಅವರು ಹಲವು ಮಹತ್ವದ ಸೂಚನೆಗಳನ್ನು ನೀಡಿದರು. ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್, ಸಚಿವರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜ್ಯದಲ್ಲಿ ಶೇ.39 ಮಳೆ ಕೊರತೆ

ರಾಜ್ಯದಲ್ಲಿ ಜುಲೈ 18ರವರೆಗೆ ವಾಡಿಕೆಗಿಂತ ಒಟ್ಟಾರೆ ಶೇಕಡಾ 39ರಷ್ಟು ಮಳೆ ಕೊರತೆಯಾಗಿದೆ. ಮಲೆನಾಡು ಪ್ರದೇಶದಲ್ಲಿ ಶೇಕಡಾ 43, ಕರಾವಳಿಯಲ್ಲಿ ಶೇಕಡಾ 35, ಉತ್ತರ ಒಳನಾಡಿನಲ್ಲಿ ಶೇಕಡಾ 33 ಹಾಗೂ ದಕ್ಷಿಣ ಒಳನಾಡಿನಲ್ಲಿ ಶೇಕಡಾ 31ರಷ್ಟು ಮಳೆ ಕಡಿಮೆಯಾಗಿದೆ.

26 ಜಿಲ್ಲೆಗಳ 158 ತಾಲೂಕುಗಳಲ್ಲಿ ಮಳೆ ಕೊರತೆ ಕಂಡುಬಂದಿದ್ದು, 20 ತಾಲೂಕುಗಳಲ್ಲಿ ತೀವ್ರ ಮಳೆ ಕೊರತೆ ದಾಖಲಾಗಿದೆ. ಕೇವಲ 51 ತಾಲೂಕುಗಳಲ್ಲಿ ಮಾತ್ರ ವಾಡಿಕೆ ಪ್ರಮಾಣದ ಮಳೆಯಾಗಿದೆ. ವಿಜಯನಗರ ಜಿಲ್ಲೆಯಲ್ಲಿ ಅತಿ ಹೆಚ್ಚು ಶೇಕಡಾ 67ರಷ್ಟು ಮಳೆ ಕೊರತೆ ದಾಖಲಾಗಿದೆ.

ಹೋಬಳಿ ಮಟ್ಟದಲ್ಲಿಯೂ ಪರಿಸ್ಥಿತಿ ಆತಂಕಕಾರಿಯಾಗಿದ್ದು, 509 ಹೋಬಳಿಗಳಲ್ಲಿ ಮಳೆ ಕೊರತೆ ಹಾಗೂ 118 ಹೋಬಳಿಗಳಲ್ಲಿ ತೀವ್ರ ಕೊರತೆ ದಾಖಲಾಗಿದೆ.

ಜಲಾಶಯಗಳಲ್ಲಿ ನೀರಿನ ಸಂಗ್ರಹ ಅರ್ಧಕ್ಕಿಂತ ಕಡಿಮೆ

ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಗಣನೀಯವಾಗಿ ಕುಸಿದಿದೆ. ಪ್ರಸ್ತುತ ಒಟ್ಟು ಸಾಮರ್ಥ್ಯದ ಶೇಕಡಾ 40ರಷ್ಟು ಮಾತ್ರ ನೀರು ಸಂಗ್ರಹವಿದ್ದು, 359.98 ಟಿಎಂಸಿ ನೀರು ಲಭ್ಯವಿದೆ. ಕಳೆದ ವರ್ಷ ಇದೇ ವೇಳೆಗೆ 681.83 ಟಿಎಂಸಿ ನೀರು ಸಂಗ್ರಹವಾಗಿತ್ತು.

ಜಲವಿದ್ಯುತ್ ಉತ್ಪಾದನೆಗೆ ಪ್ರಮುಖವಾದ ಲಿಂಗನಮಕ್ಕಿ, ಸೂಪ ಹಾಗೂ ವರಾಹಿ ಜಲಾಶಯಗಳಲ್ಲಿ ಸರಾಸರಿ ಶೇಕಡಾ 23ರಷ್ಟು ಮಾತ್ರ ನೀರು ಉಳಿದಿದೆ. ಕಾವೇರಿ ಕಣಿವೆಯ ಜಲಾಶಯಗಳಲ್ಲಿ ಶೇಕಡಾ 51 ಹಾಗೂ ಕೃಷ್ಣಾ ಕಣಿವೆಯಲ್ಲಿ ಶೇಕಡಾ 48ರಷ್ಟು ನೀರು ಸಂಗ್ರಹವಿದೆ.

122 ತಾಲೂಕುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ

ರಾಜ್ಯದ 122 ತಾಲೂಕುಗಳ 539 ಗ್ರಾಮ ಪಂಚಾಯಿತಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. 112 ಗ್ರಾಮಗಳಿಗೆ 118 ಟ್ಯಾಂಕರ್‌ಗಳ ಮೂಲಕ ನೀರು ಪೂರೈಸಲಾಗುತ್ತಿದೆ. ಅಲ್ಲದೆ 725 ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆಗೆ ಪಡೆದು 622 ಗ್ರಾಮಗಳಿಗೆ ನೀರು ಸರಬರಾಜು ಮಾಡಲಾಗುತ್ತಿದೆ.

ನಗರ ಪ್ರದೇಶದಲ್ಲೂ 17 ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಿದ್ದು, 87 ವಾರ್ಡ್‌ಗಳಿಗೆ ಟ್ಯಾಂಕರ್ ಮೂಲಕ ಹಾಗೂ 20 ಬಾಡಿಗೆ ಬೋರ್‌ವೆಲ್‌ಗಳ ನೆರವಿನಿಂದ 24 ವಾರ್ಡ್‌ಗಳಿಗೆ ನೀರು ಪೂರೈಸಲಾಗುತ್ತಿದೆ.

ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಒಂದು ಕೋಟಿ ರೂಪಾಯಿ

ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಹೆಚ್ಚುವರಿಯಾಗಿ ತಲಾ ಒಂದು ಕೋಟಿ ರೂಪಾಯಿ ಅನುದಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಘೋಷಿಸಿದರು.

ಯಾವುದೇ ಜಿಲ್ಲೆಯಲ್ಲಿ ಕುಡಿಯುವ ನೀರಿನ ಕಾಮಗಾರಿಗಳಿಗೆ ಅನುದಾನದ ಕೊರತೆ ಉಂಟಾಗುವುದಿಲ್ಲ. ಜಿಲ್ಲಾಧಿಕಾರಿಗಳು ಮುಂಚಿತವಾಗಿ ಕ್ರಮ ಕೈಗೊಂಡು ನೀರಿನ ಲಭ್ಯತೆಯನ್ನು ಖಚಿತಪಡಿಸಬೇಕು ಎಂದು ಸೂಚಿಸಿದರು.

ರೈತರಿಗೆ ಬೆಳೆ ಆಯ್ಕೆ ಕುರಿತು ಮಾರ್ಗದರ್ಶನ

ಜಲಾಶಯಗಳಲ್ಲಿರುವ ನೀರಿನ ಲಭ್ಯತೆ ಹಾಗೂ ಸ್ಥಳೀಯ ಪರಿಸ್ಥಿತಿಯನ್ನು ಆಧರಿಸಿ ಯಾವ ಬೆಳೆ ಬೆಳೆಯುವುದು ಸೂಕ್ತ ಎಂಬ ಬಗ್ಗೆ ರೈತರಿಗೆ ಸಕಾಲದಲ್ಲಿ ಮಾರ್ಗದರ್ಶನ ನೀಡಬೇಕು ಎಂದು ಮುಖ್ಯಮಂತ್ರಿ ಹೇಳಿದರು.

ಸಣ್ಣ ಹಾಗೂ ಅತಿ ಸಣ್ಣ ರೈತರ ಹಿತಕ್ಕೆ ಆದ್ಯತೆ ನೀಡಬೇಕು. ಬೆಳೆ ವಿಮೆ ಯೋಜನೆ ಕುರಿತು ರೈತರಿಗೆ ಸರಿಯಾದ ಮಾಹಿತಿ ನೀಡುವ ಜೊತೆಗೆ ಯಾವುದೇ ಅಕ್ರಮಗಳಿಗೆ ಅವಕಾಶ ನೀಡಬಾರದು ಎಂದು ಸೂಚಿಸಿದರು.

ಬಿತ್ತನೆ ಗುರಿಯಲ್ಲಿ ಹಿನ್ನಡೆ

ರಾಜ್ಯದಲ್ಲಿ ಈ ವರ್ಷ 84.10 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿದ್ದು, ಇದುವರೆಗೆ 43.98 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ಬಿತ್ತನೆ ನಡೆದಿದೆ. ಕಳೆದ ಐದು ವರ್ಷಗಳ ಸರಾಸರಿಯಂತೆ ಇದೇ ಅವಧಿಯಲ್ಲಿ 51.33 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಪೂರ್ಣಗೊಂಡಿತ್ತು.

ವಾರದೊಳಗೆ ಬರ ವರದಿ ಸಲ್ಲಿಸಲು ಸೂಚನೆ

ಮುಂದಿನ 15 ದಿನಗಳೊಳಗೆ ಕೇಂದ್ರ ಸರ್ಕಾರಕ್ಕೆ ರಾಜ್ಯದ ಬರ ಪರಿಸ್ಥಿತಿ ಕುರಿತ ಸಮಗ್ರ ವರದಿ ಸಲ್ಲಿಸಬೇಕಿರುವುದರಿಂದ ಎಲ್ಲಾ ಜಿಲ್ಲಾಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡಿ ನೈಜ ಸ್ಥಿತಿಗತಿಯನ್ನು ಪರಿಶೀಲಿಸಿ ಒಂದು ವಾರದೊಳಗೆ ವರದಿ ಸಲ್ಲಿಸಬೇಕು ಎಂದು ಮುಖ್ಯಮಂತ್ರಿ ಸೂಚಿಸಿದರು.

ಬರ ನಿರ್ವಹಣೆಗೆ ತಾಲೂಕು ಹಾಗೂ ಹೋಬಳಿ ಮಟ್ಟದಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಬೇಕು. ಕ್ಷೇತ್ರಮಟ್ಟದ ಮಾಹಿತಿ ಆಧರಿಸಿ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಬೋಗಸ್ ಬೋರ್‌ವೆಲ್‌ಗಳಿಗೆ ಎಚ್ಚರಿಕೆ

ಹೊಸ ಬೋರ್‌ವೆಲ್ ಕೊರೆಯುವ ಮುನ್ನ ಸಂಪೂರ್ಣ ಪರಿಶೀಲನೆ ನಡೆಸಬೇಕು. ನಕಲಿ ಅಥವಾ ಬೋಗಸ್ ದಾಖಲೆ ಸೃಷ್ಟಿಸಿದರೆ ಜಿಲ್ಲಾಧಿಕಾರಿಗಳೇ ನೇರ ಹೊಣೆಗಾರರಾಗುತ್ತಾರೆ ಎಂದು ಮುಖ್ಯಮಂತ್ರಿ ಎಚ್ಚರಿಸಿದರು.

ಕೊರೆದಿರುವ ಬೋರ್‌ವೆಲ್‌ಗಳಿಗೆ ತ್ವರಿತವಾಗಿ ಪಂಪ್‌ಸೆಟ್ ಹಾಗೂ ವಿದ್ಯುತ್ ಸಂಪರ್ಕ ಕಲ್ಪಿಸಲು ಸ್ಥಳೀಯ ಮಟ್ಟದಲ್ಲೇ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ವಿದ್ಯುತ್, ಮೇವು ಮತ್ತು ಜಾನುವಾರುಗಳ ರಕ್ಷಣೆಗೆ ಒತ್ತು

ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗದಂತೆ ಟ್ರಾನ್ಸ್‌ಫಾರ್ಮರ್ ದುರಸ್ತಿಗೆ ಆದ್ಯತೆ ನೀಡಬೇಕು. ಜಾನುವಾರುಗಳಿಗೆ ಕುಡಿಯುವ ನೀರು ಹಾಗೂ ಮೇವು ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕು. ಅಗತ್ಯವಿರುವ ಕಡೆ ಮೇವಿನ ಬೀಜ ಬಿತ್ತನೆಗೆ ಲಭ್ಯವಿರುವ ನೀರಾವರಿ ಸೌಲಭ್ಯಗಳನ್ನು ಬಳಸಿಕೊಳ್ಳಬೇಕು ಎಂದು ಹೇಳಿದರು.

ಟಾಸ್ಕ್‌ಫೋರ್ಸ್ ಸಭೆ ಕಡ್ಡಾಯ

ಜಿಲ್ಲೆ, ತಾಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಟಾಸ್ಕ್‌ಫೋರ್ಸ್ ಸಭೆಗಳನ್ನು ನಿಗದಿತ ಅವಧಿಯಲ್ಲಿ ನಡೆಸಿ ಕ್ರಿಯಾ ಯೋಜನೆ ರೂಪಿಸಬೇಕು. ತಹಶೀಲ್ದಾರರು ಈ ಸಭೆಗಳ ಕುರಿತು ವರದಿ ಸಲ್ಲಿಸಬೇಕು ಎಂದು ಸೂಚಿಸಿದರು.

ಪ್ರಜಾಸೇವೆ ಇಲಾಖೆಗೆ ದೈನಂದಿನ ಮಾಹಿತಿ

ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಸಿಇಒ, ಕೃಷಿ ಇಲಾಖೆ ಹಾಗೂ ಸಂಬಂಧಿತ ಇಲಾಖೆಗಳ ಅಧಿಕಾರಿಗಳು ಪ್ರತಿದಿನದ ಕಾರ್ಯಚಟುವಟಿಕೆಗಳ ಮಾಹಿತಿಯನ್ನು ಪ್ರಜಾಸೇವೆ ಇಲಾಖೆಗೆ ಸಲ್ಲಿಸಬೇಕು. ಜಿಲ್ಲೆಗಳಲ್ಲಿ ನಡೆಯುವ ಎಲ್ಲಾ ಚಟುವಟಿಕೆಗಳ ಮೇಲೆ ಸರ್ಕಾರ ನಿಗಾ ಇಡಲಿದೆ ಎಂದು ಮುಖ್ಯಮಂತ್ರಿ ಹೇಳಿದರು.

ವಿಬಿ ರಾಮ್ ಜಿ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಸೂಚನೆ

ಬರದ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶದ ಜನರು ಉದ್ಯೋಗಕ್ಕಾಗಿ ಗುಳೆ ಹೋಗದಂತೆ ವಿಬಿ ರಾಮ್ ಜಿ ಯೋಜನೆಯ ಬಗ್ಗೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವ್ಯಾಪಕ ಜಾಗೃತಿ ಮೂಡಿಸಬೇಕು ಎಂದು ಮುಖ್ಯಮಂತ್ರಿ ಸೂಚಿಸಿದರು.

ಯೋಜನೆಯಡಿ ಜೀವನೋಪಾಯ ಚಟುವಟಿಕೆಗಳು ಹಾಗೂ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳಿಗೆ ಆದ್ಯತೆ ನೀಡಬೇಕು. ಗುತ್ತಿಗೆದಾರರಿಗೆ ಅನುಕೂಲವಾಗುವ ರೀತಿಯ ಕಾಮಗಾರಿಗಳನ್ನು ಕೈಗೊಳ್ಳಬಾರದು. ಪ್ರತಿಯೊಂದು ಕಾಮಗಾರಿ ಸ್ಥಳದಲ್ಲೂ ಮಾಹಿತಿ ಫಲಕ ಅಳವಡಿಸಿ ಪಾರದರ್ಶಕತೆ ಕಾಪಾಡಬೇಕು ಎಂದು ಹೇಳಿದರು.

ಗ್ಯಾರಂಟಿ ಯೋಜನೆಗಳ ಪರಿಶೀಲನೆ

ಗೃಹಲಕ್ಷ್ಮಿ ಹಾಗೂ ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳ ಪಟ್ಟಿಯನ್ನು ಜಿಲ್ಲಾಮಟ್ಟದಲ್ಲಿ ಪರಿಶೀಲಿಸುವ ಕಾರ್ಯವನ್ನು ಪರಿಣಾಮಕಾರಿಯಾಗಿ ನಡೆಸಬೇಕು. ಆರನೇ ಗ್ಯಾರಂಟಿ ಯೋಜನೆಯಾದ ಭೂ ಗ್ಯಾರಂಟಿಯನ್ನು ರಾಜ್ಯಾದ್ಯಂತ ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಮುಖ್ಯಮಂತ್ರಿ ಸೂಚಿಸಿದರು.

ಆರ್‌ಒ ಘಟಕಗಳ ಕಾರ್ಯಕ್ಷಮತೆ ಪರಿಶೀಲನೆ

ರಾಜ್ಯದಲ್ಲಿ ಎಷ್ಟು ಶುದ್ಧ ಕುಡಿಯುವ ನೀರಿನ ಘಟಕಗಳು ಕಾರ್ಯನಿರ್ವಹಿಸುತ್ತಿವೆ ಹಾಗೂ ಎಷ್ಟು ದುರಸ್ತಿಯಲ್ಲಿವೆ ಎಂಬ ಸಮಗ್ರ ಮಾಹಿತಿ ಸಂಗ್ರಹಿಸಬೇಕು. ಸಣ್ಣಪುಟ್ಟ ದುರಸ್ತಿ ಅಗತ್ಯವಿರುವ ಘಟಕಗಳನ್ನು ತಕ್ಷಣ ದುರಸ್ತಿಪಡಿಸಿ ಎಲ್ಲ ಆರ್‌ಒ ಘಟಕಗಳು ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.

ಪ್ರಜಾಸೇವೆ ಇಲಾಖೆಯ ಕಾರ್ಯವನ್ನು ಎಲ್ಲಾ ಜಿಲ್ಲೆಗಳಲ್ಲಿ ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು. ಜಿಲ್ಲಾ ಉಸ್ತುವಾರಿ ಸಚಿವರು ಪ್ರತಿ ತಿಂಗಳು ಕನಿಷ್ಠ ಎರಡು ದಿನ ಜಿಲ್ಲೆಯಲ್ಲಿ ಜನರನ್ನು ಭೇಟಿ ಮಾಡಿ ಸಮಸ್ಯೆ ಆಲಿಸಬೇಕು. ಶಾಸಕರು ಹೋಬಳಿ ಮಟ್ಟಕ್ಕೆ ಭೇಟಿ ನೀಡಿ ಸಾರ್ವಜನಿಕ ಅಹವಾಲುಗಳಿಗೆ ಸ್ಪಂದಿಸಬೇಕು ಎಂದು ಮುಖ್ಯಮಂತ್ರಿ ನಿರ್ದೇಶನ ನೀಡಿದರು.

ಸಭೆಯ ಕೊನೆಯಲ್ಲಿ, ಬರ ಪರಿಸ್ಥಿತಿ ನಿರ್ವಹಣೆಯಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ಅಥವಾ ಕರ್ತವ್ಯಲೋಪಕ್ಕೆ ಅವಕಾಶ ಇರಬಾರದು. ಸರ್ಕಾರ ಅಗತ್ಯವಿರುವ ಅನುದಾನ ಮತ್ತು ಅಧಿಕಾರವನ್ನು ನೀಡಿದ್ದು, ಜಿಲ್ಲಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ತಿಳಿಸಿದರು.

Read More
Next Story