
ವಂದೇ ಮಾತರಂ ಗೀತೆ: ಕೇಂದ್ರದ ಮಾರ್ಗಸೂಚಿಗೆ ಕರ್ನಾಟಕ ತಿರುಗೇಟು, ಎರಡೇ ಚರಣ ಹಾಡಲು ಆದೇಶ
ಕೇಂದ್ರ ಸರ್ಕಾರವು ಎಲ್ಲಾ ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ ಆರು ಚರಣ ಹಾಡುವುದು ಕಡ್ಡಾಯ ಎಂದು ಮಾರ್ಗಸೂಚಿ ಹೊರಡಿಸಿತ್ತು. ಆದರೆ, ಇದಕ್ಕೆ ತದ್ವಿರುದ್ಧವಾದ ನಿಲುವನ್ನು ಕರ್ನಾಟಕ ಸರ್ಕಾರ ಕೈಗೊಂಡಿದೆ.
ವಂದೇ ಮಾತರಂ ಗೀತೆಯ ಆರೂ ಚರಣಗಳನ್ನು ಕಡ್ಡಾಯವಾಗಿ ಹಾಡಬೇಕೆಂಬ ಕೇಂದ್ರದ ಮಾರ್ಗಸೂಚಿಗೆ ರಾಜ್ಯ ಸರ್ಕಾರ ಸೆಡ್ಡು ಹೊಡೆದಿದೆ. ರಾಜ್ಯದಲ್ಲಿ ಇನ್ನು ಮುಂದೆ ನಡೆಯುವ ಅಧಿಕೃತ ಸರ್ಕಾರಿ ಕಾರ್ಯಕ್ರಮಗಳು ಮತ್ತು ಸಮಾರಂಭಗಳಲ್ಲಿ ವಂದೇ ಮಾತರಂ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲು ಅಥವಾ ನುಡಿಸಬೇಕು ಎಂದು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಕೇಂದ್ರ ಸರ್ಕಾರವು ಎಲ್ಲಾ ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ ಆರು ಚರಣ ಹಾಡುವುದು ಕಡ್ಡಾಯ ಎಂದು ಇತ್ತೀಚೆಗೆ ಮಾರ್ಗಸೂಚಿ ಹೊರಡಿಸಿತ್ತು. ಆದರೆ, ಇದಕ್ಕೆ ತದ್ವಿರುದ್ಧವಾದ ನಿಲುವು ಕೈಗೊಂಡ ರಾಜ್ಯ ಸರ್ಕಾರದ ಕ್ರಮವು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಹೊರಡಿಸಿದ ಆದೇಶದ ಪ್ರಕಾರ, ನಿಯಮಿತ ರಾಜ್ಯ ಸರ್ಕಾರಿ ಸಮಾರಂಭಗಳಲ್ಲಿ ಕೇವಲ ಮೊದಲ ಎರಡು ಚರಣ ಮಾತ್ರ ಹಾಡಬೇಕು. ಆದರೆ, ಸಾಂವಿಧಾನಿಕ ಹುದ್ದೆಗಳಲ್ಲಿರುವ ರಾಷ್ಟ್ರಪತಿಗಳು, ಉಪ ರಾಷ್ಟ್ರಪತಿ, ಪ್ರಧಾನಿ ಹಾಗೂ ರಾಜ್ಯಪಾಲರು ಭಾಗವಹಿಸುವ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆ ಆರೂ ಚರಣಗಳನ್ನು ಹಾಡಲು ಶಿಷ್ಟಾಚಾರ ಕಾಯ್ದುಕೊಳ್ಳಬೇಕು ಎಂದು ಆದೇಶದಲ್ಲಿ ತಿಳಿಸಿದೆ.
ಸ್ವಾತಂತ್ರ್ಯ ಸಂಗ್ರಾಮದ ಸಮಯದಲ್ಲಿ ದೇಶದ ಜನರಲ್ಲಿ ರಾಷ್ಟ್ರೀಯತೆ, ಏಕತೆ ಮತ್ತು ದೇಶಭಕ್ತಿಯ ಭಾವನೆ ಮೂಡಿಸುವಲ್ಲಿ ವಂದೇ ಮಾತರಂ ವಹಿಸಿದ ಐತಿಹಾಸಿಕ ಪಾತ್ರವನ್ನು ಸರ್ಕಾರ ಪ್ರಸ್ತಾಪಿಸಿದೆ. ಕೇಂದ್ರ ಗೃಹ ಸಚಿವಾಲಯವು ರಾಷ್ಟ್ರಗೀತೆ, ರಾಷ್ಟ್ರೀಯ ಗೀತೆಯ ವಾದನ ಹಾಗೂ ಸಾಮೂಹಿಕ ಗಾಯನಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ಮಾರ್ಗಸೂಚಿ ನಿಗದಿಪಡಿಸಿದೆ.
ರಾಜ್ಯ ಸರ್ಕಾರದ ಕಾರ್ಯಕ್ರಮಗಳ ಸ್ವರೂಪ, ಸಮಯದ ಚೌಕಟ್ಟು ಹಾಗೂ ಸೂಕ್ತ ಗೌರವ ಶಿಷ್ಟಾಚಾರವನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಸಚಿವ ಸಂಪುಟದ ತೀರ್ಮಾನದಂತೆ ಈ ಏಕರೂಪದ ನಿರ್ಧಾರಕ್ಕೆ ಬರಲಾಗಿದೆ ಎಂದು ಆದೇಶದಲ್ಲಿ ವಿವರಿಸಲಾಗಿದೆ.

