Heavy rains in Malnad: Yellow alert for 8 districts including coastal areas, lifeline for KRS
x
ಸಾಂದರ್ಭಿಕ ಚಿತ್ರ

ಮಲೆನಾಡಿನಲ್ಲಿ ಮಳೆಯ ಅಬ್ಬರ: ಕರಾವಳಿ ಸೇರಿ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಮಲೆನಾಡು ಮತ್ತು ಕೊಡಗು ಜಿಲ್ಲೆಯ ಕಾವೇರಿ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಮಂಡ್ಯ ಜಿಲ್ಲೆಯ ಕೃಷ್ಣರಾಜಸಾಗರ (ಕೆಆರ್‌ಎಸ್‌) ಜಲಾಶಯಕ್ಕೆ ಒಳಹರಿವು ಗಣನೀಯವಾಗಿ ಹೆಚ್ಚಾಗಿದೆ.


Click the Play button to hear this message in audio format

ರಾಜ್ಯದ ಪಶ್ಚಿಮ ಘಟ್ಟ ಸಾಲುಗಳು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ವರುಣನ ಆರ್ಭಟ ತೀವ್ರಗೊಂಡಿದೆ. ನೈಋತ್ಯ ಮುಂಗಾರು ಮಾರುತಗಳು ಬಲವಾಗಿ ಬೀಸುತ್ತಿರುವುದರಿಂದ ಮುಂದಿನ 24 ಗಂಟೆಗಳ ಕಾಲ ಭಾರೀ ಮಳೆಯಾಗಲಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹಾಗೂ ಭಾರತೀಯ ಹವಾಮಾನ ಇಲಾಖೆ ಜಂಟಿ ಮುನ್ಸೂಚನೆ ನೀಡಿವೆ. ಜು.10 ರಂದು ರಾಜ್ಯದ ಪ್ರಮುಖ ಎಂಟು ಜಿಲ್ಲೆಗಳಲ್ಲಿ ಗರಿಷ್ಠ 115.4 ಮಿ. ಮೀಟರ್‌ವರೆಗೆ ಮಳೆಯಾಗುವ ಸಾಧ್ಯತೆ ಇದ್ದು, ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ.

ಎಂಟು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಹವಾಮಾನ ಇಲಾಖೆಯ ದತ್ತಾಂಶಗಳ ಪ್ರಕಾರ, ಪ್ರಸ್ತುತ ಸಕ್ರಿಯವಾಗಿರುವ ಮುಂಗಾರು ಮಾರುತಗಳು ಮಲೆನಾಡು ಮತ್ತು ಕರಾವಳಿಯ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆ ಸುರಿಸಲಿವೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಉತ್ತರ ಒಳನಾಡಿನ ಬೆಳಗಾವಿಯ ಕೆಲವು ನಿರ್ದಿಷ್ಟ ಸ್ಥಳಗಳಲ್ಲಿ 64.5 ಮಿ.ಮೀಟರ್‌ನಿಂದ 115.4 ಮಿ.ಮೀಟರ್‌ವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದ್ದು, ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ. ನದಿ ತೀರದ ನಿವಾಸಿಗಳು ಹಾಗೂ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಸಾರ್ವಜನಿಕರಿಗೆ ಈಗಾಗಲೇ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮುನ್ನೆಚ್ಚರಿಕೆ ಸಂದೇಶಗಳನ್ನು ರವಾನಿಸಲಾಗಿದೆ.

ಮೀನುಗಾರರಿಗೆ ಕಟ್ಟುನಿಟ್ಟಿನ ಆದೇಶ

ಮಳೆಯ ಜೊತೆಗೆ ಕರಾವಳಿ ತೀರದಲ್ಲಿ ಗಂಟೆಗೆ 40 ರಿಂದ 50 ಕಿ.ಮೀ. ವೇಗದಲ್ಲಿ ಬಲವಾದ ಗಾಳಿ ಬೀಸುತ್ತಿದೆ. ಕಡಲು ಪ್ರಕ್ಷುಬ್ಧಗೊಳ್ಳಲಿದ್ದು, ಅಲೆಗಳ ಅಬ್ಬರ ಹೆಚ್ಚಾಗಲಿದೆ. ಹೀಗಾಗಿ ಯಾವುದೇ ಕಾರಣಕ್ಕೂ ಜು.10 ರಂದು ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಐಎಂಡಿ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ಕೊಡಗಿನಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ ಹೆಚ್ಚಳಗೊಂಡಿದೆ.

ಕೆಆರ್‌ಎಸ್‌ ಜಲಾಶಯಕ್ಕೆ ಜೀವಕಳೆ!

ಮಲೆನಾಡು ಮತ್ತು ಕೊಡಗು ಜಿಲ್ಲೆಯ ಕಾವೇರಿ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಮಂಡ್ಯ ಜಿಲ್ಲೆಯ ಕೃಷ್ಣರಾಜಸಾಗರ (ಕೆಆರ್‌ಎಸ್‌) ಜಲಾಶಯಕ್ಕೆ ಒಳಹರಿವು ಗಣನೀಯವಾಗಿ ಹೆಚ್ಚಾಗಿದೆ. ಪ್ರಸ್ತುತ ಕೆಆರ್‌ಎಸ್ ನೀರಿನ ಮಟ್ಟ 85.66 ಅಡಿಗೆ ತಲುಪಿದ್ದು, ನದಿ ಪಾತ್ರದ ಜನರಲ್ಲಿ ಸಂತಸ ಮೂಡಿಸಿದೆ. ಆದರೆ, ಇದೇ ವೇಗದಲ್ಲಿ ಮಳೆ ಮುಂದುವರಿದರೆ ನದಿಗೆ ಯಾವುದೇ ಕ್ಷಣದಲ್ಲಾದರೂ ನೀರು ಬಿಡುವ ಸಾಧ್ಯತೆ ಇರುವುದರಿಂದ ಕಾವೇರಿ ನದಿ ತೀರದ ಜನರಿಗೆ ಜಾಗರೂಕರಾಗಿರಲು ತಿಳಿಸಲಾಗಿದೆ.

Read More
Next Story