
ಪ್ರತಾಪ್ ಸಿಂಹಗೆ ಹೈಕೋರ್ಟ್ ಶಾಕ್; ಕ್ರಿಮಿನಲ್ ಪ್ರಕರಣ ರದ್ದುಗೊಳಿಸಲು ನಕಾರ, ತನಿಖೆಗೆ ಹಸಿರು ನಿಶಾನೆ
ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. ಶಹಾಪುರದಲ್ಲಿ ನೀಡಿದ್ದ ವಿವಾದಾತ್ಮಕ ಭಾಷಣದ ಕುರಿತು ತನಿಖೆ ಮುಂದುವರಿಸಲು ಸೂಚನೆ ನೀಡಿದ್ದಾರೆ.
ಮಾಜಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರಿಗೆ ಕರ್ನಾಟಕ ಹೈಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ. ತಮ್ಮ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣಗಳನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ. 2024ರ ಸೆಪ್ಟೆಂಬರ್‌ನಲ್ಲಿ ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ನೀಡಿದ್ದ ವಿವಾದಾತ್ಮಕ ಭಾಷಣಕ್ಕೆ ಸಂಬಂಧಿಸಿದಂತೆ ಪ್ರತಾಪ್ ಸಿಂಹ ವಿರುದ್ಧದ ತನಿಖೆ ಮುಂದುವರಿಸಲು ನ್ಯಾಯಾಲಯ ಅನುಮತಿ ನೀಡಿದೆ. ಇದೇ ವೇಳೆ ಕಾರ್ಯಕ್ರಮ ಆಯೋಜಿಸಿದ್ದ ಮೂವರ ವಿರುದ್ಧ ದಾಖಲಾಗಿದ್ದ ಪ್ರಕರಣಗಳನ್ನು ರದ್ದುಗೊಳಿಸಿ ಅವರಿಗೆ ಕಾನೂನು ಪರಿಹಾರ ಒದಗಿಸಿದೆ.
ಏನಿದು ಪ್ರಕರಣದ ಹಿನ್ನೆಲೆ?
2024ರ ಸೆಪ್ಟೆಂಬರ್ 21ರಂದು ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸಾರ್ವಜನಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಮಾಜಿ ಸಂಸದ ಪ್ರತಾಪ್ ಸಿಂಹ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಕಾರ್ಯಕ್ರಮಕ್ಕೆ ಆಯೋಜಕರು ಅಗತ್ಯ ಪೂರ್ವಾನುಮತಿಯನ್ನೂ ಪಡೆದಿದ್ದರು.
ಈ ಕಾರ್ಯಕ್ರಮದಲ್ಲಿ ಪ್ರತಾಪ್ ಸಿಂಹ ನೀಡಿದ ಭಾಷಣ ವಿವಾದಕ್ಕೆ ಕಾರಣವಾಗಿತ್ತು. ಭಾಷಣದ ವಿರುದ್ಧ ಸೆಪ್ಟೆಂಬರ್ 23ರಂದು ದೂರು ದಾಖಲಾಗಿತ್ತು. ದೂರಿನ ಆಧಾರದ ಮೇಲೆ ಶಹಾಪುರ ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 192 (ಗಲಭೆಗೆ ಪ್ರಚೋದನೆ) ಮತ್ತು ಸೆಕ್ಷನ್ 299ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.
ಪ್ರತಾಪ್ ಸಿಂಹ ಭಾಷಣದಲ್ಲಿ ಹೇಳಿದ್ದೇನು?
ದೂರಿನಲ್ಲಿ ಉಲ್ಲೇಖಿಸಿರುವಂತೆ, ಹಿಂದೂ ಧಾರ್ಮಿಕ ಮೆರವಣಿಗೆಗಳ ಮೇಲೆ ಕಲ್ಲು ತೂರಾಟ ನಡೆಯುತ್ತಿರುವುದನ್ನು ಪ್ರತಾಪ್ ಸಿಂಹ ಪ್ರಶ್ನಿಸಿದ್ದರು. ಈದ್ ಮಿಲಾದ್ ಮೆರವಣಿಗೆಯ ಸಂದರ್ಭದಲ್ಲಿ ಹಿಂದೂಗಳು ಕಲ್ಲು ತೂರಿರುವ ಉದಾಹರಣೆ ತೋರಿಸುವಂತೆ ಸವಾಲು ಹಾಕಿದ್ದರು ಎನ್ನಲಾಗಿದೆ.
ದೇಶದಲ್ಲಿ ಶೇ.80ರಷ್ಟು ಹಿಂದೂಗಳಿದ್ದು, ಅವರೂ ಕಲ್ಲುಗಳನ್ನು ಕೈಗೆತ್ತಿಕೊಂಡರೆ ಪರಿಸ್ಥಿತಿ ಏನಾಗಬಹುದು ಎಂಬ ಅರ್ಥದಲ್ಲಿ ಪ್ರತಾಪ್ ಸಿಂಹ ಮಾತನಾಡಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿತ್ತು. ಈ ಹೇಳಿಕೆಗಳು ಪ್ರಚೋದನಕಾರಿ ಎಂದು ಆಕ್ಷೇಪಿಸಿ ಅವರ ವಿರುದ್ಧ ದೂರು ದಾಖಲಿಸಲಾಗಿತ್ತು.
ಹೈಕೋರ್ಟ್ ಹೇಳಿದ್ದೇನು?
ಪ್ರಕರಣದ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್, ಪ್ರತಾಪ್ ಸಿಂಹ ಅವರ ಭಾಷಣದ ವಿಷಯ ಮತ್ತು ದೂರಿನಲ್ಲಿ ಮಾಡಲಾಗಿರುವ ಆರೋಪಗಳನ್ನು ಪರಿಗಣಿಸಿ ತನಿಖೆ ಮುಂದುವರಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದೆ. ಭಾಷಣದ ಮೂಲಕ ಗಲಭೆ ಉಂಟುಮಾಡುವ ಉದ್ದೇಶ ಪ್ರತಾಪ್ ಸಿಂಹ ಅವರಿಗೆ ಇತ್ತೇ ಎಂಬುದನ್ನು ತನಿಖೆಯ ವೇಳೆ ಪರಿಶೀಲಿಸಬೇಕಿದೆ ಎಂದು ನ್ಯಾಯಾಲಯ ತಿಳಿಸಿದೆ.
ಭಾಷಣದ ಬಳಿಕ ಯಾವುದೇ ಗಲಭೆ ಸಂಭವಿಸಿಲ್ಲ ಎಂಬ ಕಾರಣಕ್ಕೆ BNS ಸೆಕ್ಷನ್ 192ರ ಸಂಪೂರ್ಣ ಅನ್ವಯವನ್ನು ತಳ್ಳಿಹಾಕಲು ಸಾಧ್ಯವಿಲ್ಲ ಎಂಬ ನಿಲುವನ್ನು ನ್ಯಾಯಾಲಯ ಸ್ಪಷ್ಟಪಡಿಸಿದೆ. ಗಲಭೆ ಸಂಭವಿಸದಿದ್ದರೂ ದುರುದ್ದೇಶಪೂರ್ವಕವಾಗಿ ಪ್ರಚೋದನೆ ನೀಡಿರುವ ಆರೋಪದಡಿ ಈ ಸೆಕ್ಷನ್‌ನ ಎರಡನೇ ಭಾಗ ಅನ್ವಯವಾಗುತ್ತದೆಯೇ ಎಂಬುದನ್ನು ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಿದೆ. ಇದೇ ವೇಳೆ ಕಾರ್ಯಕ್ರಮ ಆಯೋಜಿಸಿದ್ದ ಮೂವರ ವಿರುದ್ಧದ ಪ್ರಕರಣಗಳನ್ನು ರದ್ದುಗೊಳಿಸಿದೆ. ಹೀಗಾಗಿ ಒಂದೇ ಪ್ರಕರಣದಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರಿಗೆ ತನಿಖೆ ಎದುರಿಸುವ ಅನಿವಾರ್ಯತೆ ಎದುರಾಗಿದ್ದರೆ, ಕಾರ್ಯಕ್ರಮದ ಆಯೋಜಕರಿಗೆ ಹೈಕೋರ್ಟ್‌ನಿಂದ ರಿಲೀಫ್ ಸಿಕ್ಕಿದೆ.

