
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪದಗ್ರಹಣ
ಡಿ.ಕೆ. ಶಿವಕುಮಾರ್ ಅವರು ತಮ್ಮ ತಮ್ಮ ಆರಾಧ್ಯ ದೈವ ಗಂಗಾಧರ ಅಜ್ಜಯ್ಯನವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಇವರೊಂದಿಗೆ 13 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕರಿಸಿದರು. ಇದರೊಂದಿಗೆ ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ನೂತನ ಸರ್ಕಾರ ಅಧಿಕೃತವಾಗಿ ಅಸ್ತಿತ್ವಕ್ಕೆ ಬಂದಿದೆ. ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಅವರು ಡಿ.ಕೆ. ಶಿವಕುಮಾರ್ ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.
ಡಿ.ಕೆ. ಶಿವಕುಮಾರ್ ಅವರು ತಮ್ಮ ದೈವಭಕ್ತಿಯನ್ನು ತೋರುತ್ತಾ, ತಮ್ಮ ಆರಾಧ್ಯ ದೈವ ಗಂಗಾಧರ ಅಜ್ಜಯ್ಯನವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಅವರ ಕುಟುಂಬ ಸದಸ್ಯರು ಮತ್ತು ಬೆಂಬಲಿಗರಲ್ಲಿ ಅಪಾರ ಸಂತಸ ಮನೆಮಾಡಿತ್ತು. ಡಿ.ಕೆ.ಶಿವಕುಮಾರ್ ಅವರು ಸಂವಿಧಾನ ಪುಸ್ತಕ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ್ದು, ವಿಶೇಷವಾಗಿತ್ತು.
ಡಿ.ಕೆ. ಶಿವಕುಮಾರ್ ಅವರ ಸಂಪುಟದಲ್ಲಿ ಮೊದಲ ಹಂತವಾಗಿ 13 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಡಾ. ಜಿ. ಪರಮೇಶ್ವರ್ ಅವರು ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಹೆಸರಲ್ಲಿ ಅವರು ಗೌಪ್ಯತೆ ಸ್ವೀಕರಿಸಿದ್ದು ವಿಶೇಷವಾಗಿತ್ತು.
ಎಂ.ಬಿ. ಪಾಟೀಲ್ ಅವರು ದೇವರ ಜತೆಗೆ ಸಿದ್ದೇಶ್ವರ ಮಹಾಸ್ವಾಮಿ ಹೆಸರಿನಲ್ಲಿ, ಈಶ್ವರ ಖಂಡ್ರೆ ಅವರು ಚನ್ನಕೇಶವ ಪಟ್ಟದೇವ ಹೆಸರಿನಲ್ಲಿ ಗೌಪ್ಯತೆ ಪಡೆದರು. ಪ್ರಿಯಾಂಕ್ ಖರ್ಗೆ, ಯು.ಟಿ. ಖಾದರ್, ಯತೀಂದ್ರ ಸಿದ್ದರಾಮಯ್ಯ, ಕೆ.ಎಚ್. ಮುನಿಯಪ್ಪ, ಕೆ.ಜೆ. ಜಾರ್ಜ್, ಸತೀಶ್ ಜಾರಕಿಹೊಳಿ, ಕೃಷ್ಣಬೈರೇಗೌಡ, ಬೈರತಿ ಸುರೇಶ್ ಮತ್ತು ಶರಣಪ್ರಕಾಶ್ ಪಾಟೀಲ್ ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಈ ಅದ್ಧೂರಿ ಕಾರ್ಯಕ್ರಮವು ಕೇವಲ ರಾಜ್ಯಮಟ್ಟದ ಕಾರ್ಯಕ್ರಮವಾಗಿ ಉಳಿಯದೆ, ರಾಷ್ಟ್ರೀಯ ಮಟ್ಟದ ನಾಯಕರ ಸಮಾಗಮಕ್ಕೆ ವೇದಿಕೆಯಾಯಿತು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌ನ ಹಿರಿಯ ನಾಯಕ ರಾಹುಲ್ ಗಾಂಧಿ, ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಉಪಸ್ಥಿತರಿದ್ದು ನೂತನ ತಂಡಕ್ಕೆ ಶುಭ ಹಾರೈಸಿದರು. ಅಲ್ಲದೆ, ಒಕ್ಕೂಟ ವ್ಯವಸ್ಥೆಯ ಒಗ್ಗಟ್ಟನ್ನು ಪ್ರದರ್ಶಿಸುವಂತೆ ಕೇರಳ ಮುಖ್ಯಮಂತ್ರಿ ವಿ.ಡಿ. ಸತೀಶನ್, ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ, ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಸೇರಿದಂತೆ ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ವಿವಿಧ ಪಕ್ಷಗಳ ಪ್ರಮುಖ ನಾಯಕರು ಪಾಲ್ಗೊಂಡಿದ್ದರು.
ಡಿ.ಕೆ. ಶಿವಕುಮಾರ್ ಅವರು ದಶಕಗಳ ಕಾಲ ಕಾಂಗ್ರೆಸ್ ಸಂಘಟನೆಗಾಗಿ ದುಡಿದವರು. ರಾಜ್ಯ ರಾಜಕಾರಣದಲ್ಲಿ ಅತ್ಯಂತ ಪ್ರಭಾವಶಾಲಿ ನಾಯಕರಾಗಿ ಗುರುತಿಸಿಕೊಂಡಿರುವ ಅವರು, ಈಗ ಮುಖ್ಯಮಂತ್ರಿಯಾಗಿ ರಾಜ್ಯದ ಅಭಿವೃದ್ಧಿಯ ಜವಾಬ್ದಾರಿಯನ್ನು ಹೊತ್ತಿದ್ದಾರೆ. ಈ ಸಂಪುಟದಲ್ಲಿ ಹಿರಿಯ ನಾಯಕರಿಗೆ ಮತ್ತು ಯುವ ನಾಯಕರಿಗೆ ಸಮಾನ ಅವಕಾಶ ನೀಡುವ ಮೂಲಕ ಸಾಮಾಜಿಕ ನ್ಯಾಯದ ಹಾದಿಯಲ್ಲಿ ಸರ್ಕಾರವನ್ನು ಮುನ್ನಡೆಸುವ ಪ್ರಯತ್ನವನ್ನು ಹೈಕಮಾಂಡ್ ಮಾಡಿದೆ.
ಮುಂದಿರುವ ಸವಾಲುಗಳು
ನೂತನ ಸರ್ಕಾರಕ್ಕೆ ಮುಂದಿನ ದಿನಗಳಲ್ಲಿ ಹಲವು ಸವಾಲುಗಳು ಎದುರಾಗಲಿವೆ. ಪ್ರಮುಖವಾಗಿ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವುದು, ಆಡಳಿತದಲ್ಲಿ ಪಾರದರ್ಶಕತೆ ತರುವುದು ಮತ್ತು ರಾಜ್ಯದ ಅಭಿವೃದ್ಧಿಯನ್ನು ವೇಗಗೊಳಿಸುವುದು ಮುಖ್ಯಮಂತ್ರಿಯವರ ಮುಂದಿರುವ ಆದ್ಯತೆಯ ಕೆಲಸಗಳಾಗಿವೆ. ಡಾ. ಜಿ. ಪರಮೇಶ್ವರ್ ಅವರ ಉಪಮುಖ್ಯಮಂತ್ರಿ ಹುದ್ದೆಯು ಆಡಳಿತದಲ್ಲಿ ಸಮತೋಲನ ಕಾಯ್ದುಕೊಳ್ಳಲು ಸಹಕಾರಿಯಾಗಲಿದೆ ಎಂದು ಹೇಳಲಾಗಿದೆ. ಈ ಪ್ರಮಾಣ ವಚನ ಸ್ವೀಕಾರ ಸಮಾರಂಭದೊಂದಿಗೆ ರಾಜ್ಯದಲ್ಲಿ ಹೊಸ ರಾಜಕೀಯ ಪರ್ವ ಆರಂಭವಾಗಿದೆ.

