ಮಹದೇವಪ್ಪ ವಿರುದ್ಧ ಭ್ರಷ್ಟಾಚಾರ ಆರೋಪ; ಶಾಸಕ ಸ್ಥಾನದಿಂದ ಕೈ ಬಿಡಲು ಒತ್ತಾಯಿಸಿ ರಾಜ್ಯಪಾಲರಿಗೆ ದೂರು
x

ಮಹದೇವಪ್ಪ ವಿರುದ್ಧ ಭ್ರಷ್ಟಾಚಾರ ಆರೋಪ; ಶಾಸಕ ಸ್ಥಾನದಿಂದ ಕೈ ಬಿಡಲು ಒತ್ತಾಯಿಸಿ ರಾಜ್ಯಪಾಲರಿಗೆ ದೂರು

ಸರ್ಕಾರದ GeM ಪೋರ್ಟಲ್ ನಿಯಮಾವಳಿಗಳನ್ನು ಸರಿಯಾಗಿ ಪಾಲಿಸಲಾಗಿದೆಯೇ ಎಂಬ ಬಗ್ಗೆಯೂ ದೂರಿನಲ್ಲಿ ಶಂಕೆ ವ್ಯಕ್ತಪಡಿಸಿದ್ದು, ಇಡೀ ಪ್ರಕ್ರಿಯೆಯಲ್ಲಿ ಭಾಗಿಯಾಗಿರುವ ಸರ್ಕಾರಿ ಅಧಿಕಾರಿಗಳ ಪಾತ್ರದ ಕುರಿತು ತನಿಖೆಯಾಗಬೇಕಿದೆ ಎಂದು ಒತ್ತಾಯಿಸಲಾಗಿದೆ.


ಕಾಂಗ್ರೆಸ್ ಶಾಸಕ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಮಾಜಿ ಸಚಿವ ಎಚ್.ಸಿ. ಮಹದೇವಪ್ಪ ವಿರುದ್ಧ ಬೆಂಗಳೂರಿನ ನಿವಾಸಿಯೊಬ್ಬರು ರಾಜ್ಯಪಾಲರಿಗೆ ಗಂಭೀರ ಭ್ರಷ್ಟಾಚಾರದ ದೂರು ಸಲ್ಲಿಸಿದ್ದು, ಕಾಂಗ್ರೆಸ್‌ ಸರ್ಕಾರದ ಹೊಸ ವಿವಾದವೊಂದು ಮುನ್ನೆಲೆಗೆ ಬಂದಿದೆ. ಮಹದೇವಪ್ಪ ಅವರು ಸಮಾಜ ಕಲ್ಯಾಣ ಸಚಿವರಾಗಿದ್ದ ಅವಧಿಯಲ್ಲಿ ನಡೆದ ಟೆಂಡರ್ ಪ್ರಕ್ರಿಯೆಗಳಲ್ಲಿ ವ್ಯಾಪಕ ಅಕ್ರಮಗಳು ನಡೆದಿವೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ (KREIS) ಮತ್ತು ಅಂಬೇಡ್ಕರ್ ಅಭಿವೃದ್ಧಿ ನಿಗಮದ ಟೆಂಡರ್ಗಳಲ್ಲಿ ನಿಯಮ ಗಾಳಿಗೆ ತೂರಲಾಗಿದೆ ಎಂದು ದೂರುದಾರರು ಗಂಭೀರ ಆರೋಪ ಮಾಡಿದ್ದಾರೆ. ಗುತ್ತಿಗೆ ನೀಡುವಾಗ ಮಹದೇವಪ್ಪ ಹಾಗೂ ಇಲಾಖೆಯ ಉನ್ನತ ಅಧಿಕಾರಿಗಳು ದಾಖಲೆಗಳನ್ನು ತಿರುಚಿ, ತಮಗೆ ಬೇಕಾದವರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ಅರ್ಜಿಯಲ್ಲಿ ದೂರಲಾಗಿದೆ.

ನಕಲಿ ದಾಖಲೆ ಸೃಷ್ಟಿ ಆರೋಪ

KREIS ಸಂಸ್ಥೆಯ ಅಡಿ ಕರೆದಿದ್ದ ಹಲವು ಟೆಂಡರ್ಗಳನ್ನು ಪಾರದರ್ಶಕವಾಗಿ ನಡೆಸುವ ಬದಲಿಗೆ ನಿರ್ದಿಷ್ಟ ವ್ಯಕ್ತಿಗಳು ಮತ್ತು ಸಂಸ್ಥೆಗಳಿಗೆ ಲಾಭ ಮಾಡಿಕೊಡುವ ಉದ್ದೇಶದಿಂದ ನಿಯಮಗಳನ್ನು ಉಲ್ಲಂಘಿಸಿ ಹಂಚಿಕೆ ಮಾಡಲಾಗಿದೆ. ಅರ್ಹತೆ ಇಲ್ಲದ ಕೆಲವು ಸಂಸ್ಥೆಗಳು ನಕಲಿ ಅನುಭವ ಪ್ರಮಾಣಪತ್ರ, ಯೋಜನಾ ಪೂರ್ಣಗೊಳಿಸುವಿಕೆಯ ನಕಲಿ ದಾಖಲೆಗಳು ಮತ್ತು ನಕಲಿ ಅರ್ಹತೆಗಳನ್ನು ಸಲ್ಲಿಸಿ ಟೆಂಡರ್ ಗಿಟ್ಟಿಸಿಕೊಂಡಿವೆ ಎಂದು ದೂರಲಾಗಿದೆ.

ಸರ್ಕಾರದ GeM ಪೋರ್ಟಲ್ ನಿಯಮಾವಳಿಗಳನ್ನು ಸರಿಯಾಗಿ ಪಾಲಿಸಲಾಗಿದೆಯೇ ಎಂಬ ಬಗ್ಗೆಯೂ ದೂರಿನಲ್ಲಿ ಶಂಕೆ ವ್ಯಕ್ತಪಡಿಸಿದ್ದು, ಇಡೀ ಪ್ರಕ್ರಿಯೆಯಲ್ಲಿ ಭಾಗಿಯಾಗಿರುವ ಸರ್ಕಾರಿ ಅಧಿಕಾರಿಗಳ ಪಾತ್ರದ ಕುರಿತು ತನಿಖೆಯಾಗಬೇಕಿದೆ ಎಂದು ಒತ್ತಾಯಿಸಲಾಗಿದೆ.

ಶಾಸಕ ಸ್ಥಾನದಿಂದ ವಜಾಗೊಳಿಸಲು ಆಗ್ರಹ

ರಾಜ್ಯಪಾಲರು ತಕ್ಷಣವೇ ಮಧ್ಯಪ್ರವೇಶಿಸಿ ಹಗರಣದ ಕುರಿತು ಸಮಗ್ರ, ಸ್ವತಂತ್ರ ಮತ್ತು ಕಾಲಮಿತಿಯ ತನಿಖೆಗೆ ಆದೇಶಿಸಬೇಕು. ಟೆಂಡರ್ ಪ್ರಕ್ರಿಯೆಯ ಸಂಪೂರ್ಣ ಪರಿಶೀಲನೆ, ಕಂಪನಿಗಳು ಸಲ್ಲಿಸಿರುವ ದಾಖಲೆಗಳ ನೈಜತೆಯ ತಪಾಸಣೆ ಹಾಗೂ ಅಧಿಕಾರಿಗಳ ಪಾತ್ರದ ತನಿಖೆಗೆ ಆಗ್ರಹಿಸಲಾಗಿದೆ.

ಈ ಅಕ್ರಮಗಳಿಂದ ಸರ್ಕಾರಿ ಬೊಕ್ಕಸಕ್ಕೆ ಉಂಟಾಗಿರುವ ಆರ್ಥಿಕ ನಷ್ಟವನ್ನು ಮರುಪಡೆಯಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಅಷ್ಟೇ ಅಲ್ಲದೆ, ಒಂದು ವೇಳೆ ತನಿಖೆಯಲ್ಲಿ ಆರೋಪಗಳು ಸಾಬೀತಾದರೆ ಎಚ್.ಸಿ. ಮಹದೇವಪ್ಪ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದೂ ಅರ್ಜಿಯಲ್ಲಿ ಒತ್ತಾಯಿಸಲಾಗಿದೆ. ಆದರೆ, ಈ ಗಂಭೀರ ಆರೋಪಗಳ ಕುರಿತಂತೆ ಶಾಸಕ ಎಚ್.ಸಿ. ಮಹದೇವಪ್ಪ ಅವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಸಮಾಜ ಕಲ್ಯಾಣ ಇಲಾಖೆಯ ಈ ಟೆಂಡರ್ ಪ್ರಕ್ರಿಯೆಗಳ ಕುರಿತು ಸಮಗ್ರ ತನಿಖೆಗೆ ಒತ್ತಾಯ ಕೇಳಿಬರುತ್ತಿರುವುದರಿಂದ ಮುಂಬರುವ ದಿನಗಳಲ್ಲಿ ತೀವ್ರ ರಾಜಕೀಯ ಸಂಚಲನ ಮೂಡಿಸುವ ಸಾಧ್ಯತೆಯಿದೆ.

Read More
Next Story