Monsoon is raging across the state: Jr. Orange Alert for coast from 29
x

ಸಾಂದರ್ಭಿಕ ಚಿತ್ರ

ರಾಜ್ಯಾದ್ಯಂತ ಮುಂಗಾರು ಅಬ್ಬರ: ಜೂ. 29 ರಿಂದ ಕರಾವಳಿಗೆ 'ಆರೆಂಜ್ ಅಲರ್ಟ್'

ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಬಿರುಗಾಳಿಯೊಂದಿಗೆ ಭಾರೀ ಮಳೆಯಾಗುವ ಮುನ್ಸೂಚನೆ ಇದೆ.


Click the Play button to hear this message in audio format

ನೈಋತ್ಯ ಮುಂಗಾರು ಮಾರುತಗಳು ಮತ್ತಷ್ಟು ಚುರುಕುಗೊಂಡಿದ್ದು, ಮುಂದಿನ ಕೆಲವು ದಿನಗಳ ಕಾಲ ರಾಜ್ಯಾದ್ಯಂತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂ. 29 ರಿಂದ ಜು. 1 ರವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಗಣನೀಯವಾಗಿ ಹೆಚ್ಚಾಗಲಿದ್ದು, ಸಾರ್ವಜನಿಕರು ಹಾಗೂ ಮೀನುಗಾರರು ಜಾಗರೂಕರಾಗಿರುವಂತೆ ಎಚ್ಚರಿಕೆ ನೀಡಲಾಗಿದೆ.

ಜೂ. 29 ರಿಂದ ಆರೆಂಜ್ ಅಲರ್ಟ್

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಜೂ. 29 ರವರೆಗೆ 'ಯೆಲ್ಲೋ ಅಲರ್ಟ್' ಇರಲಿದ್ದು, ಶುಕ್ರವಾರ ಗಂಟೆಗೆ 30-40 ಕಿ.ಮೀ ವೇಗದ ಬಿರುಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಜೂ. 29 ರಿಂದ ಜುಲೈ 1 ರವರೆಗೆ ಮಳೆಯ ಆರ್ಭಟ ತಾರಕಕ್ಕೇರಲಿದ್ದು, ಕರಾವಳಿ ಭಾಗಕ್ಕೆ 'ಆರೆಂಜ್ ಅಲರ್ಟ್' ಮುನ್ನೆಚ್ಚರಿಕೆ ಘೋಷಿಸಲಾಗಿದೆ.

ಎಐ ಆಧಾರಿತ ಚಿತ್ರ

ದಕ್ಷಿಣ ಒಳನಾಡಿಗೆ 'ಯೆಲ್ಲೋ ಅಲರ್ಟ್'

ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಬಿರುಗಾಳಿಯೊಂದಿಗೆ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಇತ್ತ ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲೂ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದ್ದು, ಜೂ. 29 ರಿಂದ ಜುಲೈ 1 ರವರೆಗೆ ಈ ಜಿಲ್ಲೆಗಳಿಗೂ 'ಯೆಲ್ಲೋ ಅಲರ್ಟ್' ಅನ್ವಯವಾಗಲಿದೆ.

ಉತ್ತರ ಒಳನಾಡಿನಲ್ಲೂ ವರುಣನ ಆರ್ಭಟ

ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ ಮತ್ತು ಕಲಬುರಗಿ ಜಿಲ್ಲೆಗಳ ಹಲವೆಡೆ ಬಿರುಗಾಳಿ ಸಹಿತ ಮಳೆಯಾಗಲಿದೆ. ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಯಾಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಜೂ. 29 ರ ನಂತರ ಈ ಇಡೀ ಭಾಗಕ್ಕೆ ಹವಾಮಾನ ಇಲಾಖೆ 'ಯೆಲ್ಲೋ ಅಲರ್ಟ್' ಜಾರಿಗೊಳಿಸಿದೆ.

ಜೂ. 29 ರ ನಂತರ ಮಳೆಯು ಹೆಚ್ಚಾಗಲಿರುವ ಹಿನ್ನೆಲೆಯಲ್ಲಿ, ನದಿ ಮತ್ತು ಸಮುದ್ರ ತೀರದ ನಿವಾಸಿಗಳು ಹಾಗೂ ಮೀನುಗಾರರು ಯಾವುದೇ ಕಾರಣಕ್ಕೂ ಸಮುದ್ರಕ್ಕೆ ಇಳಿಯದಂತೆ ಮತ್ತು ಜಾಗರೂಕರಾಗಿರುವಂತೆ ಸೂಚಿಸಿದೆ.

Read More
Next Story