
ಕುರುಬ ಸಮುದಾಯಕ್ಕೆ ಎಸ್‌ಟಿ ಮೀಸಲಾತಿ: ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಶಿಫಾರಸು
ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ (ST) ಸೇರಿಸಲು ರಾಜ್ಯ ಸರ್ಕಾರ ಶಿಫಾರಸು ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ (ST) ಸೇರಿಸುವ ದಶಕಗಳ ಕಾಲದ ಬೇಡಿಕೆಗೆ ಸ್ಪಂದಿಸಿದ ಅವರು, ರಾಜ್ಯ ಸರ್ಕಾರದ ವತಿಯಿಂದ ಮಾಡಬೇಕಾದ ಎಲ್ಲಾ ಅಧಿಕೃತ ಶಿಫಾರಸುಗಳನ್ನು ಈಗಾಗಲೇ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು ಸಿಎಂ ಸಿದ್ಧರಾಮಯ್ಯ ಸ್ಪಷ್ಟಪಡಿಸಿದರು. ಈ ಮೀಸಲಾತಿ ಬದಲಾವಣೆಯು ಸಂವಿಧಾನಾತ್ಮಕ ಪ್ರಕ್ರಿಯೆಯಾಗಿದ್ದು, ಅಂತಿಮವಾಗಿ ಕೇಂದ್ರ ಸರ್ಕಾರವೇ ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಬೇಕಿದೆ ಎಂದು ಅವರು ವಿವರಿಸಿದರು. ಇದೇ ಸಂದರ್ಭದಲ್ಲಿ ಬಹುನಿರೀಕ್ಷಿತ ಜಾತಿಗಣತಿ ವರದಿಯ ಬಗ್ಗೆಯೂ ಮಾಹಿತಿ ನೀಡಿದ ಅವರು, ಮುಂದಿನ ಒಂದು ತಿಂಗಳ ಅವಧಿಯಲ್ಲಿ ವರದಿ ಸಲ್ಲಿಕೆಯಾಗಲಿದ್ದು, ಅದನ್ನು ಸೂಕ್ತವಾಗಿ ಚರ್ಚಿಸಿ ಜಾರಿಗೊಳಿಸಲಾಗುವುದು ಎಂದು ಭರವಸೆ ನೀಡಿದರು.
ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ತಿಂಥಣಿ ಬ್ರಿಡ್ಜ್ ವತಿಯಿಂದ ಆಯೋಜಿಸಲಾಗಿದ್ದ ಬ್ರಹ್ಮಲೀನರಾದ ಶ್ರೀ ಸಿದ್ದರಾಮಾನಂದಪುರಿ ಸ್ವಾಮೀಜಿಯವರ ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕುರುಬ ಸಮುದಾಯಕ್ಕೆ ಎಸ್ ಟಿ ಗೆ ಸೇರಿಸುವ ನಿರ್ಧಾರವನ್ನು ಕೇಂದ್ರ ಸರ್ಕಾರ ಕೈಗೊಳ್ಳಲಿದ್ದು, ರಾಜ್ಯ ಸರ್ಕಾರ ಈಗಾಗಲೇ ತನ್ನ ಶಿಫಾರಸ್ಸನ್ನು ಕೇಂದ್ರಕ್ಕೆ ಸಲ್ಲಿಸಿದೆ. ಜಾತಿಗಣತಿ ವರದಿಯನ್ನು ಇನ್ನೊಂದು ತಿಂಗಳ ಅವಧಿಯಲ್ಲಿ ಸಲ್ಲಿಕೆಯಾಗಲಿದ್ದು, ಸೂಕ್ತ ಚರ್ಚೆಯ ನಂತರ ಅಂಗೀಕರಿಸಿ ಜಾರಿಗೊಳಿಸಲಾಗುವುದು ಎಂದರು.
ಇಡೀ ರಾಜ್ಯಕ್ಕೆ ಕನಕಗುರುಪೀಠ ಜಾತ್ಯಾತೀತ ಪೀಠವಾಗಿ ಕೆಲಸ ಮಾಡುತ್ತಿದೆ. ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ವಸತಿ ನಿಲಯ, ಯಾತ್ರಿನಿವಾಸ ಸೇರಿದಂತೆ ಹಲವು ಬೇಡಿಕೆಗಳಿಗೆ ಅನುದಾನ ನೀಡಲಾಗುವುದು ಎಂದು ಭರವಸೆ ನೀಡಿದರು. ಎಲ್ಲ ದಲಿತ ಹಾಗೂ ಹಿಂದುಳಿದ ವರ್ಗಗಳ ಮಠಗಳಿಗೆ ಬೆಂಗಳೂರಿಗೆ ಸುಮಾರು 50 ಎಕರೆ ಪ್ರದೇಶವನ್ನು ನೀಡಲು ಇತ್ತೀಚೆಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.
ರಾಜ್ಯದಲ್ಲಿ ಕನಕಗುರುಪೀಠ ಜಾತ್ಯಾತೀತ ಪೀಠವಾಗಿ ಕೆಲಸ ಮಾಡುತ್ತಿದ್ದು, ಗುರುಪೀಠದಲ್ಲಿ ಪೂಜ್ಯಶ್ರೀ ಸಿದ್ದರಾಮಾನಂದಪುರಿ ಸ್ವಾಮೀಜಿಯವರು ಶಿಕ್ಷಣ, ಆಧ್ಯಾತ್ಮ ಮತ್ತು ಜಾತ್ಯಾತೀತ ಮನೋಭಾವಕ್ಕೆ ಹೆಚ್ಚು ಒತ್ತು ನೀಡಿದ್ದರು. ಕುರುಬ ಸಮುದಾಯಕ್ಕೆ ಮೊದಲ ಬಾರಿಗೆ ಕಾಗಿನೆಲೆ ಗುರುಪೀಠ1992 ರಲ್ಲಿ ಸ್ಥಾಪಿತವಾಗಿ, ಶ್ರೀ ತಾರಕಾನಂದ ಸ್ವಾಮೀಜಿಯವರು ಅದರ ಮೊದಲ ಗುರುಗಳಾಗಿದ್ದರು. ಕಲ್ಯಾಣ ಕರ್ನಾಟಕ, ಬೆಂಗಳೂರು , ಮೈಸೂರು ಮುಂಬಯಿ ಕರ್ನಾಟಕ ವಿಭಾಗಗಳಿದ್ದು, ಈ ಎಲ್ಲಾ ವಿಭಾಗಗಳಿಗೂ ಪ್ರತ್ಯೇಕ ಗುರುಗಳಿದ್ದು, ಈ ವಿಭಾಗಕ್ಕೆ ಶ್ರೀ ಸಿದ್ದರಾಮಾನಂದಪುರಿ ಸ್ವಾಮೀಜಿಯವರು ಗುರುಗಳಾಗಿದ್ದರು. ಗುರುಪೀಠದಲ್ಲಿ ಶಿಕ್ಷಣ, ಆಧ್ಯಾತ್ಮ, ಜಾತ್ಯಾತೀತ ಮನೋಭಾವಕ್ಕೆ ಹೆಚ್ಚು ಒತ್ತು ನೀಡಿದರು. ಕಾಗಿನೆಲೆ ಗುರುಪೀಠ ಸ್ಥಾಪನೆಯ ಉದ್ದೇಶವೇ ಸಮಸಮಾಜ ನಿರ್ಮಾಣ ವಾಗಿದೆ.ಅವರ ಆತ್ಮಕ್ಕೆ ಶಾಂತಿ ಕೋರುತ್ತಾ, ಅವರ ಕುಟುಂಬ ವರ್ಗ ಹಾಗೂ ಇಡೀ ಸಮಾಜಕ್ಕೆ ಅವರ ಅಗಲಿಕೆಯನ್ನು ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದರು.

