ಕಾವೇರಿ ಜಲ ವಿವಾದ: ಸಿಡಬ್ಲ್ಯುಎಂಎ ಆದೇಶದ ಹೊರತಾಗಿಯೂ ತಮಿಳನಾಡಿಗೆ ಸದ್ಯಕ್ಕಿಲ್ಲ ನೀರು
x

ಕಾವೇರಿ ಜಲ ವಿವಾದ: ಸಿಡಬ್ಲ್ಯುಎಂಎ ಆದೇಶದ ಹೊರತಾಗಿಯೂ ತಮಿಳನಾಡಿಗೆ ಸದ್ಯಕ್ಕಿಲ್ಲ ನೀರು


Click the Play button to hear this message in audio format

ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡಿಗೆ ಪ್ರತಿದಿನ 3,500 ಕ್ಯುಸೆಕ್ ನೀರು ಹರಿಸುವಂತೆ ಕಾವೇರಿ ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯುಎಂಎ) ನೀಡಿರುವ ಆದೇಶವನ್ನು ಸದ್ಯಕ್ಕೆ ಪಾಲಿಸದಿರಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ರಾಜ್ಯದಲ್ಲಿ ತಲೆದೋರಿರುವ ಮಳೆ ಕೊರತೆ ಹಾಗೂ ಜಲಾಶಯಗಳಲ್ಲಿನ ನೀರಿನ ಅಭಾವದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಮುಂದಿನ ಕಾನೂನು ಮತ್ತು ಆಡಳಿತಾತ್ಮಕ ಹೆಜ್ಜೆಗಳ ಕುರಿತು ಚರ್ಚಿಸಲು ಭಾನುವಾರ ಮಹತ್ವದ ಸರ್ವಪಕ್ಷ ಸಭೆಯನ್ನು ಕರೆಯಲಾಗಿದೆ.

ಗುರುವಾರ ನಡೆದ ಸಭೆಯಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ (ಸಿಡಬ್ಲ್ಯುಆರ್‌ಸಿ) ಶಿಫಾರಸನ್ನು ಎತ್ತಿಹಿಡಿದಿರುವ ಪ್ರಾಧಿಕಾರವು, ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ನಿತ್ಯ 3,500 ಕ್ಯುಸೆಕ್‌ನಂತೆ ಒಟ್ಟು 4.5 ಟಿಎಂಸಿ ನೀರನ್ನು ಬಿಡುಗಡೆ ಮಾಡಬೇಕು ಎಂದು ಕರ್ನಾಟಕಕ್ಕೆ ನಿರ್ದೇಶನ ನೀಡಿದೆ.

ಸುಪ್ರೀಂ ಕೋರ್ಟ್ ಮೇಲ್ಮನವಿ?

ಈ ಬಾರಿ ಕಾವೇರಿ ಕೊಳ್ಳದಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿರುವುದರಿಂದ ತೀವ್ರ ಬರದ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜ್ಯದ ಜಲಾಶಯಗಳಲ್ಲಿ ಪ್ರಸ್ತುತ ಇರುವ ನೀರು ಕೇವಲ ಕುಡಿಯುವ ಉದ್ದೇಶಕ್ಕೆ ಹಾಗೂ ರಾಜ್ಯದ ರೈತರ ಬೆಳೆಗಳಿಗೆ ಮಾತ್ರವೇ ಸಾಕಾಗುವಷ್ಟಿದೆ. ಈ ವಾಸ್ತವಿಕ ಪರಿಸ್ಥಿತಿಯನ್ನು ಪರಿಗಣಿಸಿರುವ ಸರ್ಕಾರವು, ತಕ್ಷಣವೇ ಪ್ರಾಧಿಕಾರದ ಆದೇಶ ಪಾಲನೆ ಮಾಡದಿರಲು ನಿರ್ಧರಿಸಿದೆ.

ಭಾನುವಾರ ನಡೆಯಲಿರುವ ಸರ್ವಪಕ್ಷ ಸಭೆಯಲ್ಲಿ ವಿರೋಧ ಪಕ್ಷದ ನಾಯಕರು, ಕಾನೂನು ತಜ್ಞರು ಹಾಗೂ ನೀರಾವರಿ ತಜ್ಞರ ಜೊತೆ ಸಮಾಲೋಚನೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತದೆ. ಪ್ರಾಧಿಕಾರದ ಆದೇಶದ ವಿರುದ್ಧ ರಾಜ್ಯದ ಜಲಾಶಯಗಳ ಪ್ರಸ್ತುತ ನೀರಿನ ಮಟ್ಟ ಮತ್ತು ಬರಗಾಲದ ಸ್ಥಿತಿಗತಿಗಳ ಅಂಕಿ-ಅಂಶಗಳ ಸಮೇತ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿ, ತಡೆಯಾಜ್ಞೆ ತರುವ ನಿಟ್ಟಿನಲ್ಲಿ ಸರ್ಕಾರ ಗಂಭೀರ ಚಿಂತನೆ ನಡೆಸಿದೆ.

ವಿಪಕ್ಷ ನಾಯಕ ಆರ್. ಅಶೋಕ್ ವಾಗ್ದಾಳಿ

ಕಾವೇರಿ ನಿರ್ವಹಣಾ ಪ್ರಾಧಿಕಾರದ ಆದೇಶ ಯಥಾಸ್ಥಿತಿಯಲ್ಲಿ ಮುಂದುವರಿದಿರುವುದು ರಾಜ್ಯಕ್ಕೆ ಆಗಿರುವ ದೊಡ್ಡ ಹಿನ್ನಡೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಬಣ್ಣಿಸಿದ್ದಾರೆ. ಈ ವಿಚಾರವಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅವರು, ಕಾವೇರಿ ವಿಚಾರದಲ್ಲಿ ದೃಢವಾದ ನಿಲುವು ತೆಗೆದುಕೊಳ್ಳುವಲ್ಲಿ ಮತ್ತು ಕರ್ನಾಟಕದ ಹಿತಾಸಕ್ತಿಯನ್ನು ಸಮರ್ಥವಾಗಿ ಪ್ರತಿಪಾದಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.

"ರಾಜ್ಯದ ಕುಡಿಯುವ ನೀರು ಮತ್ತು ರೈತರ ಹಿತಾಸಕ್ತಿ ಸಂಪೂರ್ಣ ಸುರಕ್ಷಿತವಾಗುವವರೆಗೆ ತಮಿಳುನಾಡಿಗೆ ಒಂದು ಹನಿ ನೀರನ್ನೂ ಹರಿಸಬಾರದು. ಮಳೆಯ ಕೊರತೆಯಿಂದ ಬೆಳೆಗಳು ಒಣಗಿ ನೆಲಕಚ್ಚಿವೆ. ಸರ್ಕಾರ ತಕ್ಷಣವೇ ಸಮಗ್ರ ಬೆಳೆಹಾನಿ ಸಮೀಕ್ಷೆ ನಡೆಸಿ, ಸಂಕಷ್ಟದಲ್ಲಿರುವ ರೈತರಿಗೆ ಸೂಕ್ತ ಪರಿಹಾರ ಘೋಷಿಸಬೇಕು" ಎಂದು ಅವರು ಆಗ್ರಹಿಸಿದ್ದಾರೆ. ಇದೇ ವೇಳೆ, ರೈತರ ಹಿತ ಮತ್ತು ರಾಜ್ಯದ ಸ್ವಾಭಿಮಾನಕ್ಕಾಗಿ ಸರ್ಕಾರ ಕೈಗೊಳ್ಳುವ ಯಾವುದೇ ಕಾನೂನು ಹೋರಾಟಕ್ಕೆ ಬಿಜೆಪಿ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Read More
Next Story