
ಉರ್ದು ಭಾಷೆಗೂ ಸ್ಥಾನಮಾನ ನೀಡಲು ಎಸ್‌ಡಿಪಿಐ ಒತ್ತಾಯ
ಸಾರ್ವಜನಿಕರು ಸರ್ಕಾರಿ ಕಚೇರಿಗಳಲ್ಲಿ ಉರ್ದುವಿನಲ್ಲೂ ಅರ್ಜಿ ಸಲ್ಲಿಸಲು ಹಾಗೂ ಮಾಹಿತಿ ಪಡೆಯಲು ಅವಕಾಶ ಕಲ್ಪಿಸಬೇಕು. ಉರ್ದು ಶಾಲೆಗಳಲ್ಲಿ ಬಾಕಿ ಉಳಿದಿರುವ ಶಿಕ್ಷಕರ ಹುದ್ದೆ ಭರ್ತಿ ಮಾಡಬೇಕು ಎಂದು ಎಸ್‌ಡಿಪಿಐ ಒತ್ತಾಯಿಸಿದೆ.
ತುಳು ಭಾಷೆಗೆ 2ನೇ ಹೆಚ್ಚುವರಿ ಆಡಳಿತ ಭಾಷೆಯ ಸ್ಥಾನಮಾನ ಘೋಷಿಸಿದ ಬೆನ್ನಲ್ಲೇ ರಾಜ್ಯದಲ್ಲಿ ಬೇರೆ ಬೇರೆ ಭಾಷೆಗಳಿಗೂ ಸ್ಥಾನಮಾನ ನೀಡುವಂತೆ ಒತ್ತಾಯಗಳು ಕೇಳಿ ಬರುತ್ತಿವೆ.
ಕೊಡವ ಭಾಷೆಗೆ ಆಡಳಿತ ಭಾಷೆಯ ಸ್ಥಾನಮಾನ ನೀಡುವಂತೆ ಮೈಸೂರು ಸಂಸದ ಯದುವೀರ್ ಒಡೆಯರ್ ಆಗ್ರಹಿಸಿದ ಮರುದಿನವೇ ಉರ್ದು ಭಾಷೆಗೂ ಅಧಿಕೃತ ಭಾಷಾ ಸ್ಥಾನಮಾನ ನೀಡಬೇಕೆಂದು ಒತ್ತಾಯಿಸಿ ಎಸ್‌ಡಿಪಿಐ ರಾಜ್ಯಧ್ಯಕ್ಷ ಅಬ್ದುಲ್ ಮಜೀದ್ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಅಧಿಕೃತವಾಗಿ ಪತ್ರ ಬರೆದು ಆಗ್ರಹಿಸಿದ್ದಾರೆ.
ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರಾವಳಿಯ ತುಳು ಭಾಷೆಗೆ 2ನೇ ಹೆಚ್ಚುವರಿ ಅಧಿಕೃತ ಭಾಷಾ ಸ್ಥಾನಮಾನ ಹಾಗೂ ಕರಾವಳಿ ಅಭಿವೃದ್ಧಿಗೆ ವಿಶೇಷ ಅನುದಾನ ಘೋಷಿಸಿರುವುದನ್ನು ಸ್ವಾಗತಿಸಿರುವ ಎಸ್ಡಿಪಿಇ, ಇದೇ ಮಾದರಿಯಲ್ಲಿ ರಾಜ್ಯದಲ್ಲೂ ಉರ್ದು ಭಾಷೆಗೆ ಅಧಿಕೃತ ಸ್ಥಾನಮಾನ ನೀಡಬೇಕೆಂದು ಕೋರಿದೆ. ತೆಲಂಗಾಣ ಮಾದರಿಯನ್ನು ಅನುಸರಿಸುವ ಮೂಲಕ ಉರ್ದು ಭಾಷಿಕರ ಬಹುಕಾಲದ ಬೇಡಿಕೆಗೆ ಸರ್ಕಾರ ಸ್ಪಂದಿಸಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಕರ್ನಾಟಕದಲ್ಲಿ ಒಟ್ಟು 4,236 ಉರ್ದು ಮಾಧ್ಯಮ ಶಾಲೆಗಳು ಕಾರ್ಯನಿರ್ವಹಿಸುತ್ತಿದ್ದು, ಸಾವಿರಾರು ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ಉರ್ದು ಭಾಷೆಗೆ ಅಧಿಕೃತ ಸ್ಥಾನಮಾನ ಕಲ್ಪಿಸುವುದರಿಂದ ಆಡಳಿತ ಭಾಷೆಯಾದ ಕನ್ನಡಕ್ಕೆ ಯಾವುದೇ ಧಕ್ಕೆಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಸಾರ್ವಜನಿಕರು ಸರ್ಕಾರಿ ಕಚೇರಿಗಳಲ್ಲಿ ಉರ್ದುವಿನಲ್ಲೂ ಅರ್ಜಿ ಸಲ್ಲಿಸಲು ಹಾಗೂ ಮಾಹಿತಿ ಪಡೆಯಲು ಅವಕಾಶ ಕಲ್ಪಿಸಬೇಕು. ಉರ್ದು ಶಾಲೆಗಳಲ್ಲಿ ಬಾಕಿ ಉಳಿದಿರುವ ಶಿಕ್ಷಕರ ಹುದ್ದೆ ಭರ್ತಿ ಮಾಡಬೇಕು. ಸರ್ಕಾರದ ನೇಮಕಾತಿ ಪ್ರಕ್ರಿಯೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಉರ್ದು ಭಾಷೆಯಲ್ಲೂ ಲಭ್ಯವಾಗುವಂತೆ ವ್ಯವಸ್ಥೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

