
ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: 7 ದಿನ ಗುಡುಗು-ಮಿಂಚು ಸಹಿತ ಭಾರಿ ಮಳೆ, 'ಯೆಲ್ಲೋ ಅಲರ್ಟ್'
ವಿಶೇಷವಾಗಿ ಜೂನ್ 28 ರಿಂದ ಜೂನ್ 30ರವರೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಮುಂಗಾರು ಆರಂಭದಲ್ಲಿ ಕೊಂಚ ವಿಳಂಬ ಮತ್ತು ಮಳೆಯ ಕೊರತೆ ಆತಂಕ ಮೂಡಿಸಿತ್ತು. ಆದರೆ, ಇದೀಗ ವರುಣನ ಅಬ್ಬರ ಮತ್ತೆ ಶುರುವಾಗುವ ಭರವಸೆ ಮೂಡಿದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಇತ್ತೀಚಿನ ವರದಿಗಳ ಪ್ರಕಾರ, ಮುಂಗಾರು ಚುರುಕುಗೊಂಡಿದ್ದು ರಾಜ್ಯದಾದ್ಯಂತ ಮುಂದಿನ ಏಳು ದಿನಗಳ ಕಾಲ ಭಾರಿ ಮಳೆಯಾಗುವ ನಿರೀಕ್ಷೆಯಿದೆ.
ವಿಶೇಷವಾಗಿ ಜೂನ್ 28 ರಿಂದ ಜೂನ್ 30ರವರೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಮತ್ತು ಉತ್ತರ ಒಳನಾಡಿಗೆ 'ಯೆಲ್ಲೋ ಅಲರ್ಟ್'
ಮಳೆಯ ತೀವ್ರತೆ ಹೆಚ್ಚಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಹವಾಮಾನ ಇಲಾಖೆಯು ಕರಾವಳಿ ಹಾಗೂ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್' ಘೋಷಿಸಿದೆ. ಕರಾವಳಿ ಭಾಗದಲ್ಲಿ ಗಂಟೆಗೆ 30 ರಿಂದ 40 ಕಿ.ಮೀ. ವೇಗದಲ್ಲಿ ರಭಸವಾದ ಗಾಳಿ ಬೀಸಲಿದ್ದು, ಈ ಭಾಗದ ಒಂದೆರಡು ಕಡೆಗಳಲ್ಲಿ ಮಳೆಯ ಅಬ್ಬರ ತೀವ್ರವಾಗಿರಲಿದೆ.
ಕರಾವಳಿಯ ಉತ್ತರ ಕನ್ನಡ ಜಿಲ್ಲೆಯ ಬಹುಪಾಲು ಪ್ರದೇಶಗಳಲ್ಲಿ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಇದರ ಜೊತೆಗೆ ಉತ್ತರ ಒಳನಾಡಿನ ಜಿಲ್ಲೆಗಳಾದ ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ರಾಯಚೂರು, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ ಹಾಗೂ ಹಾವೇರಿ ಜಿಲ್ಲೆಗಳಲ್ಲಿಯೂ ಮಳೆಯ ಅಬ್ಬರ ಜೋರಿರಲಿರುವ ಕಾರಣ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಸ್ಥಿತಿಗತಿ
ಕಾಫಿನಾಡು ಚಿಕ್ಕಮಗಳೂರು, ಹಾಸನ, ಕೊಡಗು ಸೇರಿದಂತೆ ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಹಾಗೂ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರವಾದ ಮಳೆಯಾಗುವ ನಿರೀಕ್ಷೆ ಇದೆ ಎಂದು ಇಲಾಖೆ ತಿಳಿಸಿದೆ.
ಬೆಂಗಳೂರು ಹವಾಮಾನ ವರದಿ
ಸಿಲಿಕಾನ್ ಸಿಟಿ ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಹವಾಮಾನದಲ್ಲಿ ತುಸು ಬದಲಾವಣೆಯಾಗಲಿದೆ. ಬೆಳಗಿನ ಜಾವ ಭಾಗಶಃ ಮೋಡ ಕವಿದ ವಾತಾವರಣವಿದ್ದರೆ, ಮಧ್ಯಾಹ್ನ ಅಥವಾ ಸಂಜೆಯ ವೇಳೆಗೆ ದಟ್ಟವಾದ ಮೋಡಗಳು ಆವರಿಸಿಕೊಳ್ಳಲಿವೆ. ಸಂಜೆ ಅಥವಾ ರಾತ್ರಿಯ ಹೊತ್ತಿಗೆ ನಗರದ ವಿವಿಧ ಭಾಗಗಳಲ್ಲಿ ಜಿಟಿಜಿಟಿ ಅಥವಾ ಹಗುರ ಮಳೆಯಾಗುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ನಗರದ ಗರಿಷ್ಠ ಉಷ್ಣಾಂಶ 31°C ಮತ್ತು ಕನಿಷ್ಠ ಉಷ್ಣಾಂಶ 21°C ಆಸುಪಾಸಿನಲ್ಲಿರಲಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

