
ಆರ್‌ಎಸ್‌ಎಸ್ ಪಥ ಸಂಚಲನದಲ್ಲಿ ಭಾಗಿ; ಇಬ್ಬರು ಶಿಕ್ಷಕರ ಅಮಾನತು
ಸರ್ಕಾರಿ ನೌಕರರಾಗಿ ನಿಯಮ ಉಲ್ಲಂಘಿಸಿ ರಾಜಕೀಯ, ಸಂಘಟನಾತ್ಮಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ಮುಖಂಡರು ಶಿಕ್ಷಣ ಇಲಾಖೆ ಹಾಗೂ ಜನಪ್ರತಿನಿಧಿಗಳಿಗೆ ದೂರು ನೀಡಿದ್ದರು.
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪಥಸಂಚಲನ ಕಾರ್ಯಕ್ರಮದಲ್ಲಿ ಭಾಗವಹಿಸಿದ ಆರೋಪದ ಮೇಲೆ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಸೇವೆಯಿಂದ ಅಮಾನತು ಮಾಡಿ ಆದೇಶಿಸಿದೆ. ಘಟನೆ ನಡೆದ 9 ತಿಂಗಳ ಬಳಿಕ ಇಲಾಖೆಯು ಈ ಕಠಿಣ ಶಿಸ್ತು ಕ್ರಮ ಕೈಗೊಂಡಿದ್ದು, ಯಾದಗಿರಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಚನ್ನಬಸಪ್ಪ ಮುದೋಳ್ ಅವರು ಈ ಅಮಾನತು ಆದೇಶ ಹೊರಡಿಸಿದ್ದಾರೆ.
ಹುಣಸಗಿ ಪಟ್ಟಣದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ಶಿಕ್ಷಕ ಗುರುರಾಜ್ ಜೋಶಿ, ಕುಪ್ಪಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಅಣ್ಣಾಸಾಹೇಬ್ ದೇಶಮುಖ ಅಮಾನತಾದ ಶಿಕ್ಷಕರು.
ಪ್ರಕರಣದ ಹಿನ್ನೆಲೆ ಏನು?
ಆರ್‌ಎಸ್‌ಎಸ್ ಸ್ಥಾಪನೆಯಾಗಿ 100 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಕಳೆದ ವರ್ಷ ನವೆಂಬರ್ ತಿಂಗಳಲ್ಲಿ ವಿಜಯಪುರ ಜಿಲ್ಲೆಯ ತಾಳಿಕೋಟಿ ಪಟ್ಟಣದಲ್ಲಿ ಬೃಹತ್ ಪಥಸಂಚಲನ ಆಯೋಜಿಸಲಾಗಿತ್ತು. ಈ ಪಥಸಂಚಲನದಲ್ಲಿ ಸರ್ಕಾರಿ ಸೇವೆಯಲ್ಲಿದ್ದ ಹುಣಸಗಿ ತಾಲೂಕಿನ ಈ ಇಬ್ಬರು ಶಿಕ್ಷಕರು ಭಾಗವಹಿಸಿದ್ದರು. ಸರ್ಕಾರಿ ನೌಕರರಾಗಿ ನಿಯಮ ಉಲ್ಲಂಘಿಸಿ ರಾಜಕೀಯ, ಸಂಘಟನಾತ್ಮಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ಮುಖಂಡರು ಶಿಕ್ಷಣ ಇಲಾಖೆ ಹಾಗೂ ಜನಪ್ರತಿನಿಧಿಗಳಿಗೆ ದೂರು ನೀಡಿದ್ದರು.
ಸಚಿವರಿಂದ ತನಿಖೆಗೆ ಸೂಚನೆ
ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ಮುಖಂಡರ ದೂರಿಗೆ ಸಂಬಂಧಿಸಿದಂತೆ ಅಂದಿನ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವರಾಗಿದ್ದ ಪ್ರಿಯಾಂಕ್ ಖರ್ಗೆ ಅವರು ದೂರು ಸಲ್ಲಿಸಿದ್ದರು. ದೂರು ಸ್ವೀಕರಿಸಿದ್ದ ಸಚಿವ ಪ್ರಿಯಾಂಕ್ ಖರ್ಗೆ ಅವರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಪತ್ರ ಬರೆದಿದ್ದರು. ಸಚಿವರ ಪತ್ರದ ಆಧಾರದ ಮೇಲೆ ಶಿಕ್ಷಣ ಇಲಾಖೆಯು ಆಂತರಿಕ ತನಿಖೆ ನಡೆಸಿದ್ದು, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಇಬ್ಬರೂ ಶಿಕ್ಷಕರನ್ನು ಸೇವೆಯಿಂದ ಅಮಾನತುಗೊಳಿಸಿದೆ.

