KPSC ಅಕ್ರಮಗಳ ಬಳಿಕ ಇಂದು KAS ಪರೀಕ್ಷೆ; 345 ಕೇಂದ್ರಗಳಲ್ಲಿ ಬಿಗಿ ಭದ್ರತೆ
x

319 KAS ಹುದ್ದೆಗಳ ಭರ್ತಿಗೆ ಇಂದು ಪರೀಕ್ಷೆ ನಡೆಯುತ್ತಿದ್ದು, 1.47 ಲಕ್ಷ ಅಭ್ಯರ್ಥಿಗಳು ಭಾಗಿಯಾಗಲಿದ್ದಾರೆ. ಅಕ್ರಮ ತಡೆಯಲು KPSCನಿಂದ ಹೊಸ ನಿಯಮ, ಬಿಗಿ ಭದ್ರತೆ ಜಾರಿ.

KPSC ಅಕ್ರಮಗಳ ಬಳಿಕ ಇಂದು KAS ಪರೀಕ್ಷೆ; 345 ಕೇಂದ್ರಗಳಲ್ಲಿ ಬಿಗಿ ಭದ್ರತೆ

ಒಟ್ಟು 319 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಪೈಕಿ 202 ಗ್ರೂಪ್ ಬಿ ಹಾಗೂ 117 ಗ್ರೂಪ್ ಎ ಹುದ್ದೆಗಳಿವೆ. ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ಅಭ್ಯರ್ಥಿಗಳಲ್ಲಿ 91,238 ಪುರುಷರು ಹಾಗೂ 53,074 ಮಹಿಳೆಯರಿದ್ದಾರೆ.


Click the Play button to hear this message in audio format

ರಾಜ್ಯದಲ್ಲಿ ಸಾಲು ಸಾಲು ಪರೀಕ್ಷಾ ಅಕ್ರಮಗಳ ಆರೋಪಗಳ ನಡುವೆಯೇ ಇಂದು ಕರ್ನಾಟಕ ಆಡಳಿತ ಸೇವೆ (KAS) ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಪೂರ್ವಭಾವಿ ಪರೀಕ್ಷೆ ನಡೆಯುತ್ತಿದೆ. ಒಟ್ಟು 319 ಹುದ್ದೆಗಳ ಭರ್ತಿಗಾಗಿ ಪರೀಕ್ಷೆ ಆಯೋಜಿಸಲಾಗಿದ್ದು, ಯಾವುದೇ ಅಕ್ರಮಗಳಿಗೆ ಅವಕಾಶವಾಗದಂತೆ ಕರ್ನಾಟಕ ಲೋಕಸೇವಾ ಆಯೋಗ (KPSC) ಬಿಗಿ ಭದ್ರತೆ ಹಾಗೂ ಹಲವು ಹೊಸ ಸುಧಾರಣಾ ಕ್ರಮಗಳನ್ನು ಜಾರಿಗೆ ತಂದಿದೆ.

ಈ ಪರೀಕ್ಷೆಗೆ ರಾಜ್ಯಾದ್ಯಂತ ಒಟ್ಟು 1.47 ಲಕ್ಷ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಪರೀಕ್ಷೆ ಸುಸೂತ್ರವಾಗಿ ನಡೆಯಲು 15 ಜಿಲ್ಲೆಗಳ 345 ಪರೀಕ್ಷಾ ಕೇಂದ್ರಗಳಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆ ಹಾಗೂ ಭದ್ರತೆಯ ಮೇಲೆ ನಿಗಾ ಇರಿಸಲಾಗಿದೆ.

319 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳಿಗೆ ಪರೀಕ್ಷೆ

ಒಟ್ಟು 319 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಪೈಕಿ 202 ಗ್ರೂಪ್ ಬಿ ಹಾಗೂ 117 ಗ್ರೂಪ್ ಎ ಹುದ್ದೆಗಳಿವೆ. ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ಅಭ್ಯರ್ಥಿಗಳಲ್ಲಿ 91,238 ಪುರುಷರು ಹಾಗೂ 53,074 ಮಹಿಳೆಯರಿದ್ದಾರೆ.

ಬೆಂಗಳೂರು ನಗರ, ಮೈಸೂರು, ತುಮಕೂರು, ದಾವಣಗೆರೆ, ಹಾಸನ, ದಕ್ಷಿಣ ಕನ್ನಡ, ಶಿವಮೊಗ್ಗ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ವಿಜಯಪುರ, ಬಾಗಲಕೋಟೆ, ಬಳ್ಳಾರಿ, ರಾಯಚೂರು ಮತ್ತು ಕಲಬುರಗಿ ಸೇರಿದಂತೆ ಒಟ್ಟು 15 ಜಿಲ್ಲೆಗಳಲ್ಲಿ ಪರೀಕ್ಷೆ ನಡೆಯಲಿದೆ.

ಬೆಳಗ್ಗೆ ಮತ್ತು ಮಧ್ಯಾಹ್ನ ಎರಡು ಪತ್ರಿಕೆಗಳ ಪರೀಕ್ಷೆ

ಪೂರ್ವಭಾವಿ ಪರೀಕ್ಷೆಯ ಮೊದಲ ಪತ್ರಿಕೆ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ನಡೆಯಲಿದೆ. ಎರಡನೇ ಪತ್ರಿಕೆ ಮಧ್ಯಾಹ್ನ 2 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದೆ. ಪ್ರತಿ ಪತ್ರಿಕೆಯಲ್ಲಿ 100 ಪ್ರಶ್ನೆಗಳಿದ್ದು, ತಲಾ 200 ಅಂಕಗಳನ್ನು ನಿಗದಿಪಡಿಸಲಾಗಿದೆ. ಎರಡೂ ಪತ್ರಿಕೆಗಳಿಗೆ ಸಂಬಂಧಿಸಿದಂತೆ ಒಟ್ಟು 2,94,134 OMR ಹಾಳೆಗಳನ್ನು ಸ್ಕ್ಯಾನ್ ಮಾಡಲಾಗುತ್ತದೆ.

ಪರೀಕ್ಷಾ ಅಕ್ರಮ ತಡೆಯಲು ಕೆಪಿಎಸ್‌ಸಿಹೊಸ ನಿಯಮಗಳು

ಪರೀಕ್ಷಾ ಅಕ್ರಮಗಳಿಗೆ ಕಡಿವಾಣ ಹಾಕಲು ಕೆಪಿಎಸ್‌ಸಿ ಹಲವು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತಂದಿದೆ. ಪರೀಕ್ಷಾ ಕೇಂದ್ರದ ಆವರಣಕ್ಕೆ ಅನಧಿಕೃತ ವ್ಯಕ್ತಿಗಳ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಅನುಮತಿ ಪಡೆದವರಿಗೂ ಭದ್ರತಾ ತಪಾಸಣೆ ಕಡ್ಡಾಯವಾಗಿದ್ದು, ಮಾರ್ಗಸೂಚಿಯಲ್ಲಿ ಅನುಮತಿಸಿದ ವಸ್ತುಗಳನ್ನು ಮಾತ್ರ ಒಳಗೆ ತರಲು ಅವಕಾಶವಿದೆ. ಅಭ್ಯರ್ಥಿಗಳು ಯಾವುದೇ ಕಾರಣಕ್ಕೂ ಮೊಬೈಲ್ ಫೋನ್‌ಗಳೊಂದಿಗೆ ಪರೀಕ್ಷಾ ಕೇಂದ್ರ ಪ್ರವೇಶಿಸುವಂತಿಲ್ಲ. ನಿಯಮ ಉಲ್ಲಂಘನೆಯಾದರೆ ಸಂಬಂಧಪಟ್ಟ ಹಿರಿಯ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುತ್ತದೆ.

ಇದೇ ಮೊದಲ ಬಾರಿಗೆ ಪ್ರತಿ ಪರೀಕ್ಷಾ ಕೊಠಡಿಗೆ ಇಬ್ಬರು ಮೇಲ್ವಿಚಾರಕರನ್ನು ನೇಮಿಸಲಾಗಿದೆ. ಇವರಲ್ಲಿ ಒಬ್ಬರು ಕಡ್ಡಾಯವಾಗಿ ಸರ್ಕಾರಿ ಕಾಲೇಜಿನ ಸಿಬ್ಬಂದಿಯಾಗಿರಬೇಕು. ಅಭ್ಯರ್ಥಿಗಳ ಗುರುತಿನ ಚೀಟಿ ಪರಿಶೀಲನೆ, ತಪಾಸಣೆ ಹಾಗೂ ಪರೀಕ್ಷಾ ಕೊಠಡಿಯ ಹಿಂಭಾಗದಿಂದ ನಿಗಾ ವಹಿಸುವ ಜವಾಬ್ದಾರಿಯನ್ನು ಮೇಲ್ವಿಚಾರಕರು ನಿರ್ವಹಿಸಲಿದ್ದಾರೆ.

ನಕಲಿ ಅಭ್ಯರ್ಥಿಗಳಿಗೆ ಕಡಿವಾಣ ಹಾಕಲು ಕಠಿಣ ಕ್ರಮ

ಪರೀಕ್ಷೆಯಲ್ಲಿ ನಕಲಿ ಅಭ್ಯರ್ಥಿಗಳು ಭಾಗವಹಿಸುವುದನ್ನು ತಡೆಯಲು ವಿಶೇಷ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಅವ್ಯವಹಾರಕ್ಕೆ ಅವಕಾಶ ನೀಡಿರುವುದು ಕಂಡುಬಂದರೆ ಅಂತಹ ಖಾಸಗಿ ಕಾಲೇಜುಗಳ ಪರವಾನಗಿಯನ್ನು ರದ್ದುಪಡಿಸುವ ಎಚ್ಚರಿಕೆ ನೀಡಲಾಗಿದೆ. ಪರೀಕ್ಷಾ ಅಕ್ರಮಗಳಲ್ಲಿ ತೊಡಗುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲು ನಿರ್ಧರಿಸಲಾಗಿದೆ.

ಈ ಬಾರಿ ಮೊದಲ ಬಾರಿಗೆ OMR ಹಾಳೆಯಲ್ಲಿ ಐದು ಆಯ್ಕೆಗಳ ಪದ್ಧತಿಯನ್ನು ಜಾರಿಗೆ ತರಲಾಗಿದೆ. ಅಭ್ಯರ್ಥಿಗಳಿಗೆ ಯಾವುದೇ ಪ್ರಶ್ನೆಯ ಉತ್ತರ ತಿಳಿದಿಲ್ಲದಿದ್ದರೂ ಐದನೇ ಆಯ್ಕೆಯನ್ನು ಕಡ್ಡಾಯವಾಗಿ ಗುರುತಿಸಬೇಕು. ಯಾವುದೇ ಪ್ರಶ್ನೆಯನ್ನು ಖಾಲಿ ಬಿಡುವಂತಿಲ್ಲ ಎಂಬ ನಿಯಮವನ್ನು ರೂಪಿಸಲಾಗಿದೆ.

ತ್ರಿಪ್ರತಿ OMR ವ್ಯವಸ್ಥೆ, CCTV ಮತ್ತು ಮೊಬೈಲ್ ಜಾಮರ್

ಪರೀಕ್ಷೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ತ್ರಿಪ್ರತಿ OMR ಹಾಳೆ ವ್ಯವಸ್ಥೆ ಜಾರಿಗೆ ತರಲಾಗಿದೆ. ಒಂದು ಪ್ರತಿಯನ್ನು ಅಭ್ಯರ್ಥಿಗೆ ನೀಡಲಾಗುತ್ತದೆ. ಎರಡನೇ ಪ್ರತಿಯನ್ನು ಕೆಪಿಎಸ್‌ಸಿ ಮೌಲ್ಯಮಾಪನಕ್ಕೆ ಬಳಸುತ್ತದೆ. ಮೂರನೇ ಪ್ರತಿಯನ್ನು ಜಿಲ್ಲಾಧಿಕಾರಿ ಅಥವಾ ಕೆಪಿಎಸ್‌ಸಿ ಸ್ಟ್ರಾಂಗ್ ರೂಮ್‌ನಲ್ಲಿ ಸುರಕ್ಷಿತವಾಗಿ ಇರಿಸಲಾಗುತ್ತದೆ.

ಎಲ್ಲ ಪರೀಕ್ಷಾ ಕೊಠಡಿಗಳಲ್ಲೂ ಸಿಸಿಟಿವಿ ಕ್ಯಾಮೆರಾ ಹಾಗೂ ಮೊಬೈಲ್ ಜಾಮರ್‌ಗಳನ್ನು ಅಳವಡಿಸಲಾಗಿದೆ. ಮೊಬೈಲ್ ಜಾಮರ್‌ಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿರುವುದನ್ನು ಆಯಾ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಗಳು ಖಚಿತಪಡಿಸಿಕೊಳ್ಳಬೇಕು ಎಂದು ಸೂಚಿಸಲಾಗಿದೆ.

ಪರೀಕ್ಷೆ ನಡೆದ ದಿನವೇ OMR ಪ್ರತಿಗಳ ಅಪ್‌ಲೋಡ್

ಪಾರದರ್ಶಕತೆ ಹೆಚ್ಚಿಸುವ ನಿಟ್ಟಿನಲ್ಲಿ ಪರೀಕ್ಷೆ ನಡೆದ ದಿನವೇ ಸ್ಕ್ಯಾನ್ ಮಾಡಿದ ಎಲ್ಲಾ OMR ಪ್ರತಿಗಳನ್ನು KPSC ಅಧಿಕೃತ ವೆಬ್‌ಸೈಟ್‌ನಲ್ಲಿ ಸಾರ್ವಜನಿಕರ ವೀಕ್ಷಣೆಗೆ ಅಪ್‌ಲೋಡ್ ಮಾಡಲು ನಿರ್ಧರಿಸಲಾಗಿದೆ. ಇದರಿಂದ ಅಭ್ಯರ್ಥಿಗಳು ತಮ್ಮ ಉತ್ತರಗಳನ್ನು ಪರಿಶೀಲಿಸಿಕೊಳ್ಳಲು ಅನುಕೂಲವಾಗಲಿದೆ.

ಇನ್ನು 12 ಜಿಲ್ಲೆಗಳಲ್ಲಿ OMR ಹಾಳೆಗಳನ್ನು ಸ್ಕ್ಯಾನ್ ಮಾಡುವ ವ್ಯವಸ್ಥೆ ಮಾಡಲಾಗಿದೆ. ಮುಂದಿನ ಪರೀಕ್ಷೆಗಳಲ್ಲಿ ನಕಲಿ ಅಭ್ಯರ್ಥಿಗಳ ಹಾವಳಿ ತಡೆಯಲು ಇ-ಆಡಳಿತ ಇಲಾಖೆಯ ಸಹಯೋಗದಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಆಧಾರ್ ಆಧಾರಿತ ಗುರುತು ಪರಿಶೀಲನಾ ವ್ಯವಸ್ಥೆ ಜಾರಿಗೆ ತರಲು ಉದ್ದೇಶಿಸಲಾಗಿದೆ.

Read More
Next Story