
ಹುಬ್ಬಳ್ಳಿಯ ಹೊಸ ಕೆಎಸ್ಆರ್ಟಿಸಿ ಚಾಲಕ ಕಮ್ ಕಂಡಕ್ಟರ್ ಷಡಕ್ಷರಯ್ಯ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಳ್ಳಂಬೆಳಗ್ಗೆ ಭ್ರ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ
ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಜಮಖಂಡಿ ತಾಲೂಕು ಪಂಚಾಯತ್ನ ಪಂಚಾಯತ್ ರಾಜ್ ವಿಭಾಗದ ಸಹಾಯಕ ನಿರ್ದೇಶಕ ಸಂಜು ಹಿಪ್ಪರಗಿ ಅವರಿಗೆ ಸೇರಿದ ಎರಡು ಮನೆಗಳ ಮೇಲೆ ದಾಳಿ ನಡೆದಿದೆ.
ರಾಜ್ಯದಲ್ಲಿ ಭ್ರಷ್ಟಾಚಾರ ಹಾಗೂ ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪ ಎದುರಿಸುತ್ತಿರುವ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಬುಧವಾರ ಬೆಳ್ಳಂಬೆಳಗ್ಗೆ ಬಿಸಿ ಮುಟ್ಟಿಸಿದ್ದಾರೆ. ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿರುವ ಅಧಿಕಾರಿಗಳು ಮನೆ, ಕಚೇರಿ ಸೇರಿದಂತೆ ಹಲವು ಸ್ಥಳಗಳಲ್ಲಿ ಮಹತ್ವದ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಕೆಎಸ್ಆರ್ಟಿಸಿ ಚಾಲಕ ಕಮ್ ಕಂಡಕ್ಟರ್ ಮನೆ ಮೇಲೂ ದಾಳಿ ನಡೆದಿರುವುದು ವಿಶೇಷ ಗಮನ ಸೆಳೆದಿದೆ.
ಕೆಎಸ್ಆರ್ಟಿಸಿ ಚಾಲಕನ ಮನೆ ಮೇಲೂ ಲೋಕಾ ದಾಳಿ
ಹುಬ್ಬಳ್ಳಿಯ ಹೊಸ ಕೆಎಸ್ಆರ್ಟಿಸಿ ಚಾಲಕ ಕಮ್ ಕಂಡಕ್ಟರ್ ಷಡಕ್ಷರಯ್ಯ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಹಾಗೂ ಅಕ್ರಮ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆದಿದೆ. ಸರ್ಕಾರಿ ಬಸ್ ಚಾಲಕನ ಮನೆ ಮೇಲೂ ಲೋಕಾಯುಕ್ತ ದಾಳಿ ನಡೆದಿರುವುದು ಅಚ್ಚರಿಗೆ ಕಾರಣವಾಗಿದೆ.
ಚಿತ್ರದುರ್ಗದಲ್ಲಿ ಇಬ್ಬರು ಅಧಿಕಾರಿಗಳ ಮನೆ ಪರಿಶೀಲನೆ
ಚಿತ್ರದುರ್ಗ ಜಿಲ್ಲೆಯಲ್ಲೂ ಲೋಕಾಯುಕ್ತ ಅಧಿಕಾರಿಗಳು ಇಬ್ಬರು ಸರ್ಕಾರಿ ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ಚಿತ್ರದುರ್ಗ ಜಿಲ್ಲಾಸ್ಪತ್ರೆಯ ಜಿಲ್ಲಾ ಸರ್ಜನ್ ಡಾ. ರವೀಂದ್ರ ಹಾಗೂ ತೂಕ ಮತ್ತು ಅಳತೆ ಇಲಾಖೆಯ ಇನ್ಸ್ಪೆಕ್ಟರ್ ವೆಂಕಟೇಶ್ ದಾಳಿಗೆ ಒಳಗಾದ ಅಧಿಕಾರಿಗಳು.
ವಿದ್ಯಾನಗರದಲ್ಲಿರುವ ವೆಂಕಟೇಶ್ ಅವರ ನಿವಾಸ ಹಾಗೂ ಚಳ್ಳಕೆರೆ ರಸ್ತೆಯಲ್ಲಿರುವ ಡಾ. ರವೀಂದ್ರ ಅವರ ಮನೆ ಮೇಲೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಲೋಕಾಯುಕ್ತ ಡಿವೈಎಸ್ಪಿ ಕಲಾವತಿ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ.
ಜಮಖಂಡಿಯಲ್ಲಿ ಪಂಚಾಯತ್ ಅಧಿಕಾರಿಗೆ ಶಾಕ್
ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಜಮಖಂಡಿ ತಾಲೂಕು ಪಂಚಾಯತ್ನ ಪಂಚಾಯತ್ ರಾಜ್ ವಿಭಾಗದ ಸಹಾಯಕ ನಿರ್ದೇಶಕ ಸಂಜು ಹಿಪ್ಪರಗಿ ಅವರಿಗೆ ಸೇರಿದ ಎರಡು ಮನೆಗಳ ಮೇಲೆ ದಾಳಿ ನಡೆದಿದೆ.
ಜಮಖಂಡಿ ನಗರದ ಮೈಗೂರು ರಸ್ತೆ ಹಾಗೂ ವಿಜಯನಗರ ಬಡಾವಣೆಯಲ್ಲಿರುವ ಅವರ ನಿವಾಸಗಳಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಮೂಲತಃ ಜಮಖಂಡಿ ತಾಲೂಕಿನ ಮೈಗೂರು ಗ್ರಾಮದವರಾದ ಸಂಜು ಹಿಪ್ಪರಗಿ ವಿರುದ್ಧ ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪ ಕೇಳಿಬಂದಿದೆ.
ಬಾಗಲಕೋಟೆ ಲೋಕಾಯುಕ್ತ ಎಸ್ಪಿ ಮಹಾಲಿಂಗ್ ನಂದಗಾವಿ ಅವರ ಮಾರ್ಗದರ್ಶನದಲ್ಲಿ, ಡಿವೈಎಸ್ಪಿ ಸುರೇಶ್ ರೆಡ್ಡಿ ನೇತೃತ್ವದ ಸುಮಾರು ಏಳು ಮಂದಿ ಅಧಿಕಾರಿಗಳ ತಂಡ ಈ ಕಾರ್ಯಾಚರಣೆ ನಡೆಸಿದೆ.
ಹಾಸನದಲ್ಲಿ ಅರಣ್ಯಾಧಿಕಾರಿ ಮನೆ, ಕಚೇರಿ ಮೇಲೆ ದಾಳಿ
ಹಾಸನ ಜಿಲ್ಲೆಯಲ್ಲೂ ಲೋಕಾಯುಕ್ತ ಅಧಿಕಾರಿಗಳು ಬೃಹತ್ ಕಾರ್ಯಾಚರಣೆ ನಡೆಸಿದ್ದಾರೆ. ಸಕಲೇಶಪುರ ವಲಯದ ಅರಣ್ಯಾಧಿಕಾರಿ (RFO) ಹೇಮಂತ್ಕುಮಾರ್ ಅವರಿಗೆ ಸೇರಿದ ಐದು ಸ್ಥಳಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಲಾಗಿದೆ.
ಹಾಸನ ನಗರದ ಚಿಕ್ಕಹೊನ್ನೇನಹಳ್ಳಿಯಲ್ಲಿರುವ ಅವರ ನಿವಾಸ, ಸಕಲೇಶಪುರದ ಬಾಡಿಗೆ ಮನೆ ಹಾಗೂ ಕಚೇರಿಯಲ್ಲಿ ಪರಿಶೀಲನೆ ನಡೆದಿದೆ. ಅಲ್ಲದೆ, ಆಲೂರು ತಾಲೂಕಿನ ದೊಡ್ಡಮಗ್ಗೆ ಗ್ರಾಮದಲ್ಲಿರುವ ಅವರ ಮಾವನ ಮನೆ ಹಾಗೂ ಕುವೆಂಪು ನಗರದಲ್ಲಿರುವ ಆಪ್ತ ಗುತ್ತಿಗೆದಾರ ಹರೀಶ್ ಅವರ ನಿವಾಸದ ಮೇಲೂ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಲೋಕಾಯುಕ್ತ ಎಸ್ಪಿ ನಂದಿನಿ, ಡಿವೈಎಸ್ಪಿ ಸುರೇಶ್ ಹಾಗೂ ಇನ್ಸ್ಪೆಕ್ಟರ್ಗಳಾದ ಶಿಲ್ಪಾ, ಗವಿರಾಜು ಮತ್ತು ಚಂದ್ರಶೇಖರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ವಿವಿಧ ಸ್ಥಳಗಳಲ್ಲಿ ಅಧಿಕಾರಿಗಳು ಆಸ್ತಿ ದಾಖಲೆಗಳು ಹಾಗೂ ಇತರ ಮಹತ್ವದ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಏಕಕಾಲಕ್ಕೆ ನಡೆದಿರುವ ಈ ಲೋಕಾಯುಕ್ತ ದಾಳಿಯಿಂದ ಸರ್ಕಾರಿ ಅಧಿಕಾರಿಗಳ ವಲಯದಲ್ಲಿ ಆತಂಕ ಸೃಷ್ಟಿಯಾಗಿದೆ.

