
Bangalore Rain Tragedy| ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ; ಲೋಕಾಯುಕ್ತರಿಂದ ಸುಮೋಟೋ ತನಿಖೆಗೆ ಆದೇಶ
ಬೌರಿಂಗ್ ಆಸ್ಪತ್ರೆ ಶವಾಗಾರಕ್ಕೆ ಹೊಂದಿಕೊಂಡಿರುವ ಕುಸಿದ ಗೋಡೆಯ ಭಾಗವನ್ನು ವೀಕ್ಷಿಸಿದ ಲೋಕಾಯುಕ್ತರು, ಅಲ್ಲಿನ ಅವ್ಯವಸ್ಥೆ ಕಂಡು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ ಸುರಿದ ಭಾರೀ ಮಳೆಗೆ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಗೋಡೆ ಕುಸಿದು 7 ಮಂದಿ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಅವರು ಸ್ವಯಂ ಪ್ರೇರಿತ (ಸುಮೋಟೊ) ತನಿಖೆಗೆ ಆದೇಶಿಸಿದ್ದಾರೆ.
ಗುರುವಾರ ಬೌರಿಂಗ್ ಆಸ್ಪತ್ರೆಯ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಅಧಿಕಾರಿಗಳ ಬೇಜವಾಬ್ದಾರಿಯೇ ದುರಂತಕ್ಕೆ ಕಾರಣ. ಪ್ರಕರಣದ ಕುರಿತು ಸುಮೋಟೋ ತನಿಖೆ ನಡೆಸಲಾಗುವುದು. ತಪ್ಪಿತಸ್ಥರ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಬೌರಿಂಗ್ ಆಸ್ಪತ್ರೆ ಶವಾಗಾರಕ್ಕೆ ಹೊಂದಿಕೊಂಡಿರುವ ಕುಸಿದ ಗೋಡೆಯ ಭಾಗವನ್ನು ವೀಕ್ಷಿಸಿದ ಲೋಕಾಯುಕ್ತರು, ಅಲ್ಲಿನ ಅವ್ಯವಸ್ಥೆ ಕಂಡು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ನಿರ್ಮಾಣ ಕಾಮಗಾರಿಯ ಮಣ್ಣನ್ನು ಗೋಡೆಗೆ ಅಂಟಿಕೊಂಡಂತೆ ಸುರಿದಿದ್ದರಿಂದಲೇ ಒತ್ತಡ ಹೆಚ್ಚಾಗಿ ಈ ದುರಂತ ಸಂಭವಿಸಿದೆ ಎಂಬ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಎಂಜಿನಿಯರ್ಗಳ ವೈಫಲ್ಯ ಎದ್ದು ಕಾಣುತ್ತಿದೆ. ಇದು ಕೇವಲ ನೈಸರ್ಗಿಕ ವಿಕೋಪವಲ್ಲ, ಸ್ಪಷ್ಟವಾಗಿ ಅಧಿಕಾರಿಗಳ ನಿರ್ಲಕ್ಷ್ಯ. ಮುಂಜಾಗ್ರತಾ ಕ್ರಮ ವಹಿಸಿದ್ದರೆ ಅಮಾಯಕ ಏಳು ಜನರ ಜೀವಗಳನ್ನು ಉಳಿಸಬಹುದಿತ್ತು ಎಂದು ನ್ಯಾ. ಬಿ.ಎಸ್. ಪಾಟೀಲ್ ಕಿಡಿಕಾರಿದ್ದಾರೆ.
ಅಧಿಕಾರಿಗಳ ವಿರುದ್ಧ ತನಿಖೆ
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಲೋಕಾಯುಕ್ತರು, ಕೇವಲ ಕೆಳಹಂತದ ನೌಕರರಲ್ಲದೆ ಉನ್ನತ ಮಟ್ಟದ ಅಧಿಕಾರಿಗಳನ್ನೂ ತನಿಖೆಯ ವ್ಯಾಪ್ತಿಗೆ ತರಲು ನಿರ್ಧರಿಸಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿ, ಬೃಹತ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರು, ಲೋಕೋಪಯೋಗಿ ಇಲಾಖೆ ಮತ್ತು ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಸೇರಿದಂತೆ ಘಟನೆಗೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಕಾರಣರಾದ ಎಲ್ಲರ ವಿರುದ್ಧ ಸಮಗ್ರ ತನಿಖೆ ನಡೆಸಿ, ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಸುಮೋಟೋ ಕೇಸ್ ದಾಖಲು
ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ನ್ಯಾಯ ಒದಗಿಸಲು ಲೋಕಾಯುಕ್ತ ಸಂಸ್ಥೆಯು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಳ್ಳಲಿದೆ. ನಗರದ ಸಾರ್ವಜನಿಕ ಕಟ್ಟಡಗಳ ಸುರಕ್ಷತೆ ಬಗ್ಗೆ ವರದಿ ನೀಡುವಂತೆ ಸಂಬಂಧಪಟ್ಟ ಇಲಾಖೆಗಳಿಗೆ ನೋಟಿಸ್ ಜಾರಿ ಮಾಡುವುದಾಗಿ ಲೋಕಾಯುಕ್ತರು ತಿಳಿಸಿದ್ದಾರೆ.
ಘಟನೆಯ ಹಿನ್ನೆಲೆ
ಬುಧವಾರ ಸಂಜೆ ಸುರಿದ ಭಾರೀ ಮಳೆ ಮತ್ತು ಆಲಿಕಲ್ಲು ಮಳೆಗೆ ಸಿಲುಕಿ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಬಳಿ ಆಶ್ರಯ ಪಡೆದಿದ್ದ ಪಾದಚಾರಿಗಳು ಹಾಗೂ ಬೀದಿ ಬದಿ ವ್ಯಾಪಾರಿಗಳ ಮೇಲೆ ಗೋಡೆ ಕುಸಿದಿತ್ತು.
ದುರಂತದಲ್ಲಿ ಇಬ್ಬರು ಮಕ್ಕಳು ಸೇರಿ ಒಟ್ಟು ಏಳು ಮಂದಿ ಮೃತಪಟ್ಟಿದ್ದು, ಏಳು ಮಂದಿ ಗಾಯಗೊಂಡಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಗಾಯಾಳುಗಳು ಹಾಗೂ ಸಂತ್ರಸ್ತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದರು. ಇದೇ ವೇಳೆ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದರು.

