ರಾಜ್ಯದಲ್ಲಿ 1ಸಾವಿರ ಪಬ್ಲಿಕ್‌ ಶಾಲೆಗಳ ನಿರ್ಮಾಣಕ್ಕೆ ಸರ್ಕಾರ ಚಾಲನೆ - ಮಧು ಬಂಗಾರಪ್ಪ
x

ರಾಜ್ಯದಲ್ಲಿ 1ಸಾವಿರ ಪಬ್ಲಿಕ್‌ ಶಾಲೆಗಳ ನಿರ್ಮಾಣಕ್ಕೆ ಸರ್ಕಾರ ಚಾಲನೆ - ಮಧು ಬಂಗಾರಪ್ಪ

ಮುಂದಿನ ನಾಲ್ಕು ವರ್ಷಗಳಲ್ಲಿ ರಾಜ್ಯ ಸರ್ಕಾರ 750 ಕೋಟಿ ರೂ.ಗಳನ್ನು ಒದಗಿಸಿ, 500 ಕೆಪಿಎಸ್‌ ಶಾಲೆಗಳನ್ನು ಅಭಿವೃದ್ಧಿ ಪಡಿಸಲಾಗುವುದು ಎಂದು ಶಿಕ್ಷಣ ಸಚಿವ ಮಧುಬಂಗಾರಪ್ಪ ಹೇಳಿದ್ದಾರೆ.


Click the Play button to hear this message in audio format

ಪ್ರತಿಯೊಬ್ಬರಿಗೂ ಗುಣಮಟ್ಟದ ಶಿಕ್ಷಣ ನೀಡಬೇಕೆಂಬ ಉದ್ದೇಶದಿಂದ ಸರ್ಕಾರವು ಕರ್ನಾಟಕ ಪಬ್ಲಿಕ್‌ ಶಾಲೆಗಳನ್ನು ನಿರ್ಮಿಸುತ್ತಿದ್ದು, ರಾಜ್ಯಾದ್ಯಂತ 1 ಸಾವಿರ ಪಬ್ಲಿಕ್‌ ಶಾಲೆಗಳ ನಿರ್ಮಾಣಕ್ಕೆ ಚಾಲನೆ ನೀಡಿದೆ. ಇದಕ್ಕೆ ಅಗತ್ಯ ಸಂಪನ್ಮೂಲದ ಕ್ರೋಢೀಕರಣ ನಡೆಯುತ್ತಿದ್ದು, ಈ ಶಾಲೆಗಳಲ್ಲಿ ಎಲ್‌ಕೆಜಿಯಿಂದ ದ್ವಿತೀಯ ಪಿಯುಸಿಯವರೆಗೂ ಒಂದೇ ಕಡೆ ಮಕ್ಕಳಿಗೆ ಶಿಕ್ಷಣ ದೊರೆಯಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಎಜಾಕ್ಸ್ ಇಂಜಿನಿಯರಿಂಗ್ ಲಿಮಿಟೆಡ್ ಮತ್ತು ಎಜಾಕ್ಸ್ ಇಂಜಿನಿಯರಿಂಗ್ ಚಾರಿಟೇಬಲ್ ಟ್ರಸ್ಟ್ ಸಂಯುಕ್ತವಾಗಿ ಶಿವಮೊಗ್ಗದ ಸೈನ್ಸ್ ಮೈದಾನದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಈಗಾಗಲೇ 500 ಸರ್ಕಾರಿ ಶಾಲೆಗಳನ್ನು ಕೆಪಿಎಸ್‌ಗಳಾಗಿ ಉನ್ನತೀಕರಿಸಿ, ಅಭಿವೃದ್ಧಿಪಡಿಸಲು 1,750 ಕೋಟಿ ರೂ.ಗಳ ನೆರವನ್ನು ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್ ನೀಡಿದೆ. ಈ ಸಂಬಂಧದ ಒಪ್ಪಂದಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸಮ್ಮುಖದಲ್ಲಿ ಸಹಿ ಮಾಡಲಾಗಿದೆ. ಇದರಿಂದ ಕೆಪಿಎಸ್‌ ಶಾಲೆಗಳ ಅಭಿವೃದ್ಧಿಗೆ ಇನ್ನಷ್ಟು ವೇಗ ಸಿಕ್ಕಿದೆ. ಮುಂದಿನ ನಾಲ್ಕು ವರ್ಷಗಳಲ್ಲಿ ರಾಜ್ಯ ಸರ್ಕಾರ 750 ಕೋಟಿ ರೂ.ಗಳನ್ನು ಒದಗಿಸಿ, 500 ಕೆಪಿಎಸ್‌ ಶಾಲೆಗಳನ್ನು ಅಭಿವೃದ್ಧಿ ಪಡಿಸಲಿದೆ ಎಂದು ತಿಳಿಸಿದರು.

ರಾಜ್ಯಾದ್ಯಂತ ಆರಂಭವಾಗಲಿರುವ ಕೆಪಿಎಸ್‌ ಶಾಲೆಗಳ ಕಟ್ಟಡ ನಿರ್ಮಾಣ ಕಾಮಗಾರಿಗೆ ರಾಜ್ಯಮಟ್ಟದಲ್ಲಿ ಶಂಕುಸ್ಥಾಪನೆಯನ್ನು ಶಿವಮೊಗ್ಗದಲ್ಲಿ ನೆರವೇರಿಸಲು ಈ ಹಿಂದೆ ತೀರ್ಮಾನಿಸಲಾಗಿತ್ತು. ಕಾರಣಾಂತರದಿಂದ ಈ ಕಾರ್ಯಕ್ರಮ ರದ್ದಾಗಿದ್ದು, ಆದಷ್ಟು ಬೇಗ ಈ ಕಾರ್ಯಕ್ರಮವನ್ನು ಶಿವಮೊಗ್ಗದಲ್ಲಿ ನಡೆಸಲಿದ್ದೇವೆ. ಅಲ್ಲದೆ, ಶಿವಮೊಗ್ಗದ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಹಾಕಿಕೊಂಡಿರುವ ಹಲವಾರು ಕಾರ್ಯಕ್ರಮಗಳಿಗೂ ಈ ಸಂದರ್ಭದಲ್ಲಿ ಚಾಲನೆ ನೀಡುತ್ತೇವೆ ಎಂದರು.

ಸಿಎಸ್‌ಆರ್‌ ನಿಧಿ ಬಳಕೆ

ಸಮುದಾಯ ಮತ್ತು ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ನಿಧಿಯನ್ನು ಕೆಪಿಎಸ್‌ ಶಾಲೆಗಳ ಅಭಿವೃದ್ಧಿಗೆ ಸಮರ್ಥವಾಗಿ ಬಳಸಿಕೊಳ್ಳಲು ಸರ್ಕಾರ ತೀರ್ಮಾನಿಸಿದ್ದು, ಇದಕ್ಕಾಗಿ ವಿಶೇಷವಾದ ಉಪಕ್ರಮವನ್ನು ಜಾರಿಗೆ ತರಲಾಗಿದೆ. ಈ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆ ಮಾಡಲು ಮುಂದಾಗಿದ್ದೇವೆ. ಶಾಲೆಗಳ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು. ಮಾಜಿ ಮುಖ್ಯಮಂತ್ರಿ ದಿವಂಗತ ಎಸ್‌. ಬಂಗಾರಪ್ಪ ಓದಿದ ಶಾಲೆಯ ಅಭಿವೃದ್ಧಿಗೆ ಕೊಡುಗೆ ನೀಡಿರುವುದನ್ನು ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಾವು ಓದಿದ ಶಾಲೆ ಅಭಿವೃದ್ಧಿ ಪಡಿಸುತ್ತಿರುವುದನ್ನು ಇದೇ ವೇಳೆ ಸ್ಮರಿಸಿದರು. ಶಂಕುಸ್ಥಾಪನೆ ನೆರವೇರಿದ ಕರ್ನಾಟಕ ಪಬ್ಲಿಕ್‌ ಶಾಲೆಯ ನೂತನ ಕಡ್ಡಟ ನಿರ್ಮಾಣಕ್ಕೆ ಎಜಾಕ್ಸ್ ಇಂಜಿನಿಯರಿಂಗ್ ಲಿಮಿಟೆಡ್ 13.50 ಕೋಟಿ ರೂ. ದೇಣಿಗೆ ನೀಡಿದೆ. ಒಂದು ವರ್ಷದ ಒಳಗೆ ಕಟ್ಟಡ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸುವುದಾಗಿ ತಿಳಿಸಿದರು.

15 ಸಾವಿರ ಶಿಕ್ಷಕರ ನೇಮಕ

ಕಳೆದ ಮೂರು ವರ್ಷಗಳಲ್ಲಿ ಶಿಕ್ಷಣ ಸಚಿವರಾಗಿ ತಾವು ಜಾರಿಗೆ ತಂದಿರುವ ಯೋಜನೆಗಳ ಬಗ್ಗೆ ಗಮನ ಸೆಳೆದ ಸಚಿವ ಮಧು ಬಂಗಾರಪ್ಪ, ಶಿಕ್ಷಕರ ಕೊರತೆಯನ್ನು ನೀಗಿಸುವ ಉದ್ದೇಶದಿಂದ ನಾನು ಈ ಹಿಂದೆ ಹೇಳಿದಂತೆ 15 ಸಾವಿರ ಶಿಕ್ಷಕರ ನೇಮಕ ಪ್ರಕ್ರಿಯೆ ಕೈಗೆತ್ತಿಕೊಂಡಿದ್ದೇವೆ. ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ನಾವು ತೆಗೆದುಕೊಂಡ ಕ್ರಮಗಳಿಂದಾಗಿ ಈ ಬಾರಿಯ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ದಾಖಲೆ ಫಲಿತಾಂಶ ಬಂದಿದೆ ಎಂದು ಹೇಳಿದರು.

ಎಜಾಕ್ಸ್‌ನಿಂದ ಜಿಲ್ಲೆಗೊಂದು ಕೆಪಿಎಸ್‌

ಎಜಾಕ್ಸ್ ಇಂಜಿನಿಯರಿಂಗ್ ಲಿಮಿಟೆಡ್ ಸಂಸ್ಥೆಯ ಅಧ್ಯಕ್ಷ ಕೆ. ವಿಜಯ್ ಅವರು ಮಾತನಾಡಿ, ಸಂಸ್ಥೆಯ ವತಿಯಿಂದ ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಒಂದೊಂದು ಕೆಪಿಎಸ್ ಶಾಲೆಯನ್ನು ನಿರ್ಮಿಸಿಕೊಡುವ ಉದ್ದೇಶವಿದೆ. ಮುಂದಿನ ಐದು ವರ್ಷಗಳಲ್ಲಿ ಹತ್ತು ಜಿಲ್ಲೆಗಳಲ್ಲಿ ನಮ್ಮ ಸಂಸ್ಥೆಯ ವತಿಯಿಂದ ಕೆಪಿಎಸ್‌ ಶಾಲೆಯ ಕಟ್ಟಡ ನಿರ್ಮಿಸಿಕೊಡುತ್ತೇವೆ ಎಂದು ತಿಳಿಸಿದರು. ಅಲ್ಲದೆ, ತಾವು ನಿರ್ಮಿಸಿದ ಶಾಲೆಗಳ ಕಟ್ಟಡವನ್ನು ನಾವೇ ನಿರ್ವಹಣೆ ಮಾಡುತ್ತೇವೆ ಎಂದರು.

Read More
Next Story