Kharge upset over DKSH supporters Delhi yatra; CMs close aides decide to meet AICC president
x

ಡಿಸಿಎಂ ಡಿ.ಕೆ. ಶಿವಕುಮಾರ್‌, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಹಾಗೂ ಸಿಎಂ ಸಿದ್ದರಾಮಯ್ಯ

ಗದ್ದುಗೆ ಗುದ್ದಾಟ: ಸದ್ಯಕ್ಕೆ ಸಿದ್ದರಾಮಯ್ಯ ಪಟ್ಟ ಭದ್ರ?

ಸಿಎಂ ಹಾಗೂ ಡಿಸಿಎಂ ನಡುವಿನ ನಾಯಕತ್ವ ಬಿಕ್ಕಟ್ಟು ತೀವ್ರಗೊಂಡಿರುವ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಗೊಂದಲಗಳಿಗೆ ತೆರೆ ಎಳೆಯುವಂತೆ ಅಚ್ಚರಿಯ ಹೇಳಿಕೆ ನೀಡಿದ್ದಾರೆ.


Click the Play button to hear this message in audio format

ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ನಾಯಕತ್ವ ಬದಲಾವಣೆಯ ಗೊಂದಲಗಲು ಬಗೆಹರಿಯುವ ಲಕ್ಷಣ ಕಾಣುತ್ತಿಲ್ಲ. ನಾಯಕತ್ವ ಬದಲಾವಣೆಗೆ ಪಟ್ಟು ಹಿಡಿದಿರುವ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ದೆಹಲಿಯಲ್ಲಿ ಹೈಕಮಾಂಡ್‌ ನಾಯಕರ ಭೇಟಿಗೆ ಕಸರತ್ತು ನಡೆಸಿದರೆ, ಇತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಲ ಪ್ರದರ್ಶನದ ತಂತ್ರ ಹೆಣೆದಿದ್ದಾರೆ.

ಸಿಎಂ ಹಾಗೂ ಡಿಸಿಎಂ ನಡುವಿನ ನಾಯಕತ್ವ ಬಿಕ್ಕಟ್ಟು ತೀವ್ರಗೊಂಡಿರುವ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಗೊಂದಲಗಳಿಗೆ ತೆರೆ ಎಳೆಯುವಂತೆ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಮುಖ್ಯಮಂತ್ರಿ ಇದ್ದಾರೆ. ಹೀಗಾಗಿ ನಾಯಕತ್ವ ಬದಲಾವಣೆ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಕಲಬುರಗಿಯಲ್ಲಿ ಗುರುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, "ನಾಯಕತ್ವ ಬದಲಾವಣೆಯ ವಿಚಾರ ಸದ್ಯಕ್ಕೆ ಅಪ್ರಸ್ತುತ. ಒಂದು ವೇಳೆ ಅಂತಹ ಸಂದರ್ಭ ಎದುರಾದರೆ ಹೈಕಮಾಂಡ್ ಸೂಕ್ತ ನಿರ್ಧಾರ ಕೈಗೊಳ್ಳಲಿದೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿ ನಾವೆಲ್ಲರೂ ಚರ್ಚಿಸಿ ತೀರ್ಮಾನ ಮಾಡುತ್ತೇವೆ," ಎಂದು ಹೇಳಿದ್ದಾರೆ.

ಸಿಎಂ ಆಯ್ಕೆ ಹೈಕಮಾಂಡ್‌ಗೆ ಬಿಟ್ಟದ್ದು

ಮಲ್ಲಿಕಾರ್ಜುನ ಖರ್ಗೆ ಅವರೇ ಮುಂದಿನ ಮುಖ್ಯಮಂತ್ರಿಯಾಗಲಿ ಎಂಬ ಅಭಿಮಾನಿಗಳ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, "ಪಕ್ಷದ ಸಿದ್ಧಾಂತಕ್ಕಾಗಿ ನಾವು ದಶಕಗಳಿಂದ ದುಡಿದಿದ್ದೇವೆ. ಹಣೆಬರಹ ಎನ್ನುವುದಕ್ಕಿಂತ ಹೈಕಮಾಂಡ್ ನಿರ್ಧಾರವೇ ಅಂತಿಮ. ಈ ಬಗ್ಗೆ ಸೋನಿಯಾ ಗಾಂಧಿ ಅವರೇ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಸಿಎಂ ಬದಲಾವಣೆಗೆ ಇನ್ನೂ ಸಮಯವಿದೆ, ಆ ಕಾಲ ಬಂದಾಗ ನೋಡೋಣ," ಎಂದು ಹೇಳುವ ಮೂಲಕ ಕುತೂಹಲ ಉಳಿಸಿಕೊಂಡೇ ಗೊಂದಲಗಳಿಗೆ ವಿರಾಮ ಹಾಕಿದರು.

ಮೈತ್ರಿಕೂಟದ ಗೆಲುವಿನ ವಿಶ್ವಾಸ

ಪಂಚರಾಜ್ಯಗಳ ಚುನಾವಣೋತ್ತರ ಸಮೀಕ್ಷೆಗಳ ಕುರಿತು ಮಾತನಾಡಿದ ಖರ್ಗೆ, "ತಮಿಳುನಾಡು ಮತ್ತು ಕೇರಳದಲ್ಲಿ ನಮ್ಮ ಮೈತ್ರಿಕೂಟಕ್ಕೆ ಸ್ಪಷ್ಟ ಬಹುಮತ ಸಿಗುವ ವಿಶ್ವಾಸವಿದೆ. ಅಸ್ಸಾಂನಲ್ಲಿ ಎಕ್ಸಿಟ್ ಪೋಲ್‌ಗಳು ಕಡಿಮೆ ಸ್ಥಾನ ನೀಡಿವೆಯಾದರೂ, ಆಂತರಿಕ ಸಮೀಕ್ಷೆಯ ಪ್ರಕಾರ ನಾವು ಹೆಚ್ಚಿನ ಸ್ಥಾನಗಳನ್ನು ಗೆಲ್ಲಲಿದ್ದೇವೆ," ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಂಗಾಳದಲ್ಲಿ ಮಮತಾಗೆ ಬೆಂಬಲ?

ಪಶ್ಚಿಮ ಬಂಗಾಳದ ಫಲಿತಾಂಶದ ಬಗ್ಗೆ ಕುತೂಹಲ ವ್ಯಕ್ತಪಡಿಸಿದ ಅವರು, "ಅಲ್ಲಿ ಬಿಜೆಪಿ ಮತ್ತು ಟಿಎಂಸಿ ನಡುವೆ ತೀವ್ರ ಪೈಪೋಟಿ ಇದೆ. ಕಾಂಗ್ರೆಸ್ ಈ ಬಾರಿ ಸ್ವತಂತ್ರವಾಗಿ ಸ್ಪರ್ಧಿಸಿದೆ. ಫಲಿತಾಂಶ ಹೊರಬಂದ ನಂತರ ಅಲ್ಲಿನ ರಾಜಕೀಯ ಪರಿಸ್ಥಿತಿ ಅವಲೋಕಿಸಿ, ತೃಣಮೂಲ ಕಾಂಗ್ರೆಸ್‌ಗೆ ಬೆಂಬಲ ನೀಡುವ ಕುರಿತು ಯೋಚಿಸಲಾಗುವುದು," ಎಂದು ಖರ್ಗೆ ಹೇಳಿದರು.

Read More
Next Story