ಮಂಗಳೂರಿನಲ್ಲಿ ಪ್ರತಿಭಟನೆ ಕಾವು- ಸಚಿವ ಸಂಪುಟ ಸಭೆ ನಡೆಯುತ್ತಿರುವ ಪ್ರಜಾಸೌಧಕ್ಕೆ ಮುತ್ತಿಗೆ ಯತ್ನ
x

ಮಂಗಳೂರಿನಲ್ಲಿ ಪ್ರತಿಭಟನೆ ಕಾವು- ಸಚಿವ ಸಂಪುಟ ಸಭೆ ನಡೆಯುತ್ತಿರುವ ಪ್ರಜಾಸೌಧಕ್ಕೆ ಮುತ್ತಿಗೆ ಯತ್ನ

ಕೊಳತ್ತಮಜಲು ಅಬ್ದುಲ್ ರೆಹಮಾನ್‌ ಕೊಲೆ ಪ್ರಕರಣದ ಆರೋಪಿಗೆ ಜಾಮೀನು ದೊರೆತಿರುವುದನ್ನು ಖಂಡಿಸಿ ಮಂಗಳೂರಿನಲ್ಲಿ ಎಸ್‌ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಪ್ರಜಾಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು.


ಕೊಳತ್ತಮಜಲು ಅಬ್ದುಲ್ ರೆಹಮಾನ್‌ ಕೊಲೆ ಪ್ರಕರಣದ ಆರೋಪಿಗೆ ಜಾಮೀನು ದೊರೆತಿರುವುದನ್ನು ಖಂಡಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಕಾರ್ಯಕರ್ತರು ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು. ನಗರದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿರುವ ಹಿನ್ನೆಲೆಯಲ್ಲಿ, ಪ್ರಜಾಸೌಧಕ್ಕೆ ಮುತ್ತಿಗೆ ಹಾಕಲು ಕಾರ್ಯಕರ್ತರು ಯತ್ನಿಸಿದರು. ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಕಪ್ಪು ಬಾವುಟ ಪ್ರದರ್ಶಿಸಿ, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಪ್ರಜಾಸೌಧದತ್ತ ತೆರಳಲು ಯತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ತಡೆದು ವಶಕ್ಕೆ ಪಡೆದರು. ಈ ವೇಳೆ ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಎಸ್‌ಡಿಪಿಐನ ಸ್ಥಳೀಯ ಪ್ರಮುಖರಾದ ಅನ್ವರ್ ಸಾದತ್, ರಿಯಾಜ್ ಕಡಂಬು, ಮುನೀಶ್ ಅಲಿ ಸೇರಿದಂತೆ ಹಲವು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಏನಿದು ಪ್ರಕರಣ?

ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ಇರಾಕೋಡಿಯಲ್ಲಿ ನಡೆದ ಕೊಲೆ ಪ್ರಕರಣವಾಗಿದೆ.

2025ರ ಮೇ 27ರಂದು, ಅಬ್ದುಲ್ ರಹ್ಮಾನ್ ಅವರು ಕಲಂದರ್ ಶಾಫಿ ಎಂಬವರೊಂದಿಗೆ ಮರಳು ಇಳಿಸುತ್ತಿದ್ದಾಗ ಎರಡು ಸ್ಕೂಟರ್‌ಗಳಲ್ಲಿ ಬಂದಿದ್ದ ಗುಂಪೊಂದು ಮಾರಕಾಸ್ತ್ರಗಳಿಂದ ದಾಳಿ ನಡೆಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದಾಳಿಯಲ್ಲಿ ಅಬ್ದುಲ್ ರಹ್ಮಾನ್ ಸ್ಥಳದಲ್ಲೇ ಮೃತಪಟ್ಟರೆ, ಕಲಂದರ್ ಶಾಫಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು.

ಪ್ರಕರಣದ ತನಿಖೆಯಲ್ಲಿ ಪೊಲೀಸರು ಆರಂಭದಲ್ಲಿ ಹಲವು ಮಂದಿಯನ್ನು ಆರೋಪಿಗಳಾಗಿ ಗುರುತಿಸಿ ಬಂಧಿಸಿದ್ದರು. ಈ ಕೊಲೆ ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತೀಕಾರವಾಗಿ ನಡೆದಿತ್ತೇ ಅಥವಾ ಹಳೆಯ ದ್ವೇಷದ ಹಿನ್ನೆಲೆ ಇದೆಯೇ ಎಂಬುದನ್ನೂ ತನಿಖೆ ನಡೆಸಲಾಗಿತ್ತು.

ನಂತರ ಪ್ರಕರಣದಲ್ಲಿ ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (ಕೊಕಾ) ಅಡಿಯಲ್ಲೂ ಆರೋಪಗಳನ್ನು ದಾಖಲಿಸಲಾಗಿತ್ತು. 2026ರ ಆಗಸ್ಟ್‌ನಲ್ಲಿ ಹೈಕೋರ್ಟ್ ಐವರು ಆರೋಪಿಗಳಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ನೀಡಿತ್ತು. ನ್ಯಾಯಾಲಯವು ತನಿಖಾಧಿಕಾರಿಯ ಮುಂದೆ ಹಾಜರಾಗುವುದು, ಸಾಕ್ಷಿಗಳಿಗೆ ಬೆದರಿಕೆ ಹಾಕದಿರುವುದು ಸೇರಿದಂತೆ ಹಲವು ಷರತ್ತುಗಳನ್ನು ವಿಧಿಸಿತ್ತು.

Read More
Next Story