ಅ.11 ಕ್ಕೆ ಮೈಸೂರು ದಸರಾ ಉದ್ಘಾಟನೆ, ಅ. 21 ರಂದು ಜಂಬೂಸವಾರಿ
x

ಅ.11 ಕ್ಕೆ ಮೈಸೂರು ದಸರಾ ಉದ್ಘಾಟನೆ, ಅ. 21 ರಂದು ಜಂಬೂಸವಾರಿ

ದಸರಾದ ಪ್ರಮುಖ ಆಕರ್ಷಣೆಯಾದ ಗಜಪಯಣ ಜುಲೈ 26 ರಂದು ಆರಂಭವಾಗಲಿದೆ. ಆಗಸ್ಟ್ 26 ಕ್ಕೆ ಅರಮನೆ ಪ್ರವೇಶಿಸುವ ದಸರಾ ಗಜಪಡೆಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿ, ಬರಮಾಡಿಕೊಳ್ಳಲಾಗುತ್ತದೆ.


ಪ್ರಸಕ್ತ ಸಾಲಿನ ವಿಶ್ವವಿಖ್ಯಾತ ಮೈಸೂರು ದಸರಾ ಆಚರಣೆಗೆ ರಾಜ್ಯ ಸರ್ಕಾರ ಭರ್ಜರಿ ಸಿದ್ಧತೆ ಆರಂಭಿಸಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಮಹತ್ವದ ದಸರಾ ಪೂರ್ವಸಿದ್ಧತಾ ಸಭೆಯಲ್ಲಿ ದಸರಾ ಮಹೋತ್ಸವದ ದಿನಾಂಕ ಹಾಗೂ ಮುಹೂರ್ತವನ್ನು ಅಂತಿಮಗೊಳಿಸಲಾಯಿತು. ಅ.11ರಂದು ದಸರಾ ಮಹೋತ್ಸವಕ್ಕೆ ಚಾಲನೆ ಸಿಗಲಿದೆ. ಅ.21ರಂದು ಜಂಬೂಸವಾರಿ ಮೆರವಣಿಗೆ ನಡೆಯಲಿದೆ.

ದಸರಾದ ಪ್ರಮುಖ ಆಕರ್ಷಣೆಯಾದ ಗಜಪಯಣ ಜುಲೈ 26 ರಂದು ಆರಂಭವಾಗಲಿದೆ. ಆಗಸ್ಟ್ 26 ಕ್ಕೆ ಅರಮನೆ ಪ್ರವೇಶಿಸುವ ದಸರಾ ಗಜಪಡೆಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿ, ಬರಮಾಡಿಕೊಳ್ಳಲಾಗುತ್ತದೆ. ಅ.11 ರಂದು ದಸರಾ ಮಹೋತ್ಸವದ ಉದ್ಘಾಟನೆ ನೆರವೇರಲಿದೆ. ಚಾಮುಂಡಿಬೆಟ್ಟದಲ್ಲಿ ಶುಭ ಧನುರ್ ಲಗ್ನದಲ್ಲಿ ದಸರಾ ಮಹೋತ್ಸವಕ್ಕೆ ಅಧಿಕೃತವಾಗಿ ಚಾಲನೆ ಸಿಗಲಿದೆ. ಅ.21 ರಂದು ವಿಜಯದಶಮಿ ಹಬ್ಬದಂದು ಗಜಪಡೆಯ ಸಾರಥ್ಯದಲ್ಲಿ ಜಂಬೂಸವಾರಿ ಮೆರವಣಿಗೆ ಜರುಗಲಿದೆ.

ವಿಜಯದಶಮಿಯ ದಿನವಾದ ಅ.21ರಂದು ಎರಡು ಶುಭ ಮುಹೂರ್ತಗಳಲ್ಲಿ ಧಾರ್ಮಿಕ ವಿಧಿವಿಧಾನಗಳು ನೆರವೇರಲಿವೆ. ಮಧ್ಯಾಹ್ನ 1.36ರಿಂದ 1.56ರ ನಡುವೆ ಶುಭ ಮಕರ ಲಗ್ನದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಂದಿ ಧ್ವಜಕ್ಕೆ ಪೂಜೆ ನೆರವೇರಿಸಲಿದ್ದಾರೆ. ಅದೇ ದಿನ ಸಂಜೆ 4.10ರಿಂದ 4.35ರ ಶುಭ ಮೀನ ಲಗ್ನದಲ್ಲಿ ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾಗಿರುವ ತಾಯಿ ಚಾಮುಂಡೇಶ್ವರಿಗೆ ಮುಖ್ಯಮಂತ್ರಿಗಳು ಹಾಗೂ ಗಣ್ಯರು ಪುಷ್ಪಾರ್ಚನೆ ಮಾಡಲಿದ್ದಾರೆ.

ದಸರಾದಲ್ಲಿ ಕರಾವಳಿಯ ಕಂಬಳ ವೈಭವ

ಈ ಬಾರಿಯ ಮೈಸೂರು ದಸರಾದಲ್ಲಿ ಹೊಸ ಆಕರ್ಷಣೆಯಾಗಿ ಕರಾವಳಿಯ ಸಾಂಪ್ರದಾಯಿಕ ಕ್ರೀಡೆಯಾದ ಕಂಬಳ ಆಯೋಜಿಸುವ ಕುರಿತು ಸಭೆಯಲ್ಲಿ ಮಹತ್ವದ ಚರ್ಚೆ ನಡೆಯಿತು. ಅ.18 ಮತ್ತು 19ರಂದು ಎರಡು ದಿನಗಳ ಕಾಲ ಮೈಸೂರಿನಲ್ಲಿ ಕಂಬಳ ಆಯೋಜಿಸಲು ಮತ್ತು ಇದಕ್ಕೆ ಪ್ರತ್ಯೇಕ ಅನುದಾನ ನೀಡುವಂತೆ ಕಂಬಳ ಸಮಿತಿ ಸರ್ಕಾರಕ್ಕೆ ಮನವಿ ಮಾಡಿದೆ.

ಪ್ರವಾಸೋದ್ಯಮ ಮತ್ತು ಭದ್ರತೆಗೆ ಆದ್ಯತೆ

ದಸರಾ ಮಹೋತ್ಸವದ ವೇಳೆ ಕಾನೂನು ಸುವ್ಯವಸ್ಥೆ ಮತ್ತು ಭದ್ರತೆ ಕಾಪಾಡುವುದು, ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವುದು. ಅಗತ್ಯ ಮೂಲಸೌಕರ್ಯ ಕಲ್ಪಿಸುವ ಬಗ್ಗೆ ಸುದೀರ್ಘ ಸಮಾಲೋಚನೆ ನಡೆಸಲಾಯಿತು.

ದೇಶ-ವಿದೇಶಿ ಪ್ರವಾಸಿಗರನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಕರ್ಷಿಸಲು ಪ್ರವಾಸೋದ್ಯಮ ಇಲಾಖೆಯಿಂದ ವಿಶೇಷ ಉತ್ತೇಜನ ನೀಡಲು ನಿರ್ಧರಿಸಲಾಗಿದೆ. ಇನ್ನು ಈ ಬಾರಿಯ ದಸರಾ ಮಹೋತ್ಸವವನ್ನು ಯಾರು ಉದ್ಘಾಟಿಸಬೇಕು ಎಂಬುದನ್ನು ನಿರ್ಣಯಿಸುವ ಸರ್ವಾಧಿಕಾರವನ್ನು ಮುಖ್ಯಮಂತ್ರಿಗಳಿಗೆ ವಹಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

Read More
Next Story