ನಿಖಿಲ್ ಕುಮಾರಸ್ವಾಮಿ ದೇಗುಲ ಪ್ರವೇಶಕ್ಕೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಅಡ್ಡಿ
x

ರಾಮನಗರದ ದೊಡ್ಡಕುರುಬರಹಳ್ಳಿಯಲ್ಲಿ ನಿಖಿಲ್ ಕುಮಾರಸ್ವಾಮಿ ಭೇಟಿ ವೇಳೆ ಮಾರಮ್ಮ ದೇವಾಲಯಕ್ಕೆ ಬೀಗ ಹಾಕಿದ ಆರೋಪ ಕೇಳಿಬಂದಿದ್ದು, ಜೆಡಿಎಸ್-ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದೆ.

ನಿಖಿಲ್ ಕುಮಾರಸ್ವಾಮಿ ದೇಗುಲ ಪ್ರವೇಶಕ್ಕೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಅಡ್ಡಿ

ದೊಡ್ಡಕುರುಬರಹಳ್ಳಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಮಾರಮ್ಮ ದೇವಾಲಯದ ಉದ್ಘಾಟನೆ ಹಾಗೂ ಕುಂಭಾಭಿಷೇಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ನಿಖಿಲ್ ಕುಮಾರಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದ್ದರು.


Click the Play button to hear this message in audio format

ರಾಮನಗರ ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ದೊಡ್ಡಕುರುಬರಹಳ್ಳಿ ಗ್ರಾಮದಲ್ಲಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರಿಗೆ ದೇವಾಲಯ ಪ್ರವೇಶ ನಿರಾಕರಿಸಿದ ಘಟನೆ ರಾಜಕೀಯ ವಾಗ್ವಾದಕ್ಕೆ ಕಾರಣವಾಗಿದೆ. ನಿಖಿಲ್ ಕುಮಾರಸ್ವಾಮಿ ಅವರು ಗ್ರಾಮಕ್ಕೆ ಭೇಟಿ ನೀಡುವ ವಿಷಯ ತಿಳಿದು ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಮಾರಮ್ಮ ದೇವಾಲಯಕ್ಕೆ ಬೀಗ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ದೊಡ್ಡಕುರುಬರಹಳ್ಳಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಮಾರಮ್ಮ ದೇವಾಲಯದ ಉದ್ಘಾಟನೆ ಹಾಗೂ ಕುಂಭಾಭಿಷೇಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ನಿಖಿಲ್ ಕುಮಾರಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದ್ದರು. ಆದರೆ, ಅವರು ಆಗಮಿಸುವ ವೇಳೆಗೆ ದೇವಾಲಯಕ್ಕೆ ಬೀಗ ಹಾಕಲಾಗಿತ್ತು ಎನ್ನಲಾಗಿದೆ. ಕಾಂಗ್ರೆಸ್ ಕಾರ್ಯಕರ್ತ ರವಿ ಎಂಬಾತ ದೇವಾಲಯಕ್ಕೆ ಬೀಗ ಹಾಕಿದ್ದಾರೆ ಎಂದು ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ರಾಮು ಆರೋಪಿಸಿದ್ದಾರೆ. ಇದರಿಂದ ನಿಖಿಲ್ ದೇವರ ದರ್ಶನ ಪಡೆಯದೆ ವಾಪಸಾಗಿದ್ದಾರೆ.

ಜೆಡಿಎಸ್-ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದ

ಘಟನೆಯಿಂದ ಆಕ್ರೋಶಗೊಂಡ ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಬಳಿಕ ಎರಡೂ ಪಕ್ಷಗಳ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ಕಾಂಗ್ರೆಸ್‌ನವರು ಹೆಚ್ಚಿನ ಅನುದಾನ ನೀಡಿದ್ದಾರೆ ಎಂಬ ವಿಚಾರವೂ ಎರಡು ಪಕ್ಷಗಳ ನಡುವಿನ ಗಲಾಟೆಗೆ ಕಾರಣವಾಗಿದೆ ಎನ್ನಲಾಗಿದೆ.

ಘಟನೆ ಖಂಡಿಸಿದ ಶಾಸಕ ಇಕ್ಬಾಲ್ ಹುಸೇನ್

ಈ ಘಟನೆಗೆ ಸಂಬಂಧಿಸಿದಂತೆ ರಾಮನಗರ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಪ್ರತಿಕ್ರಿಯಿಸಿದ್ದು, ದೇವಾಲಯಕ್ಕೆ ಬೀಗ ಹಾಕಿರುವುದನ್ನು ಖಂಡಿಸಿದ್ದಾರೆ. ನಮ್ಮ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಈ ರೀತಿ ನಡೆದುಕೊಳ್ಳಬಾರದು. ಇಂತಹ ಘಟನೆಗಳಿಗೆ ನಾನು ಎಂದಿಗೂ ಪ್ರಚೋದನೆ ನೀಡುವುದಿಲ್ಲ. ಇಂತಹ ವರ್ತನೆ ನನಗೂ ಇಷ್ಟವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Read More
Next Story