x

ಬಿಜೆಪಿ–ಜೆಡಿಎಸ್ ಮೈತ್ರಿ: ಹಿರಿಯೂರು ಉಪಚುನಾವಣೆ ಟಿಕೆಟ್‌ ಹೈಕಮಾಂಡ್‌ಗೆ, ಸ್ಥಳೀಯ ಚುನಾವಣೆಗಳಿಗೆ ಸಮನ್ವಯ ಸಮಿತಿ

ಹಿರಿಯೂರು ಉಪಚುನಾವಣೆ ಅಭ್ಯರ್ಥಿ ಆಯ್ಕೆ, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮೈತ್ರಿ ಮತ್ತು 2028ರ ವಿಧಾನಸಭಾ ಚುನಾವಣೆಗೆ ಒಗ್ಗಟ್ಟಿನ ಹೋರಾಟ ನಡೆಸಿದ್ದಾರೆ. ಬಿಜೆಪಿ–ಜೆಡಿಎಸ್ ನಾಯಕರ ಸಭೆಯಲ್ಲಿ ಮೂರು ಪ್ರಮುಖ ನಿರ್ಧಾರಗಳ ಬಗ್ಗೆ ಚರ್ಚೆ ಮಾಡಿದ್ದಾರೆ.


ರಾಜ್ಯ ರಾಜಕಾರಣದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮತ್ತಷ್ಟು ಗಟ್ಟಿಯಾಗುವ ಮುನ್ಸೂಚನೆ ಸಿಕ್ಕಿದೆ. ಹಿರಿಯೂರು ವಿಧಾನಸಭಾ ಉಪಚುನಾವಣೆಯ ಅಭ್ಯರ್ಥಿ ಆಯ್ಕೆ, ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಮೈತ್ರಿ ಹಾಗೂ ಮುಂದಿನ ವಿಧಾನಸಭಾ ಚುನಾವಣೆಗೆ ಒಗ್ಗಟ್ಟಿನ ಹೋರಾಟ ಸೇರಿದಂತೆ ಮೂರು ಪ್ರಮುಖ ವಿಚಾರಗಳ ಕುರಿತು ಉಭಯ ಪಕ್ಷಗಳ ನಾಯಕರು ಮಹತ್ವದ ಚರ್ಚೆ ನಡೆಸಿದ್ದಾರೆ.

ಇತ್ತೀಚೆಗೆ ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಯಾರನ್ನು ಕಣಕ್ಕಿಳಿಸಬೇಕು ಎಂಬ ವಿಚಾರ ಬಿಜೆಪಿ ಮತ್ತು ಜೆಡಿಎಸ್ ನಡುವೆ ಚರ್ಚೆಗೆ ಕಾರಣವಾಗಿತ್ತು. ಎರಡೂ ಪಕ್ಷಗಳು ತಮ್ಮ ಅಭ್ಯರ್ಥಿಗೆ ಟಿಕೆಟ್ ನೀಡಬೇಕೆಂದು ಒತ್ತಾಯಿಸಿದ್ದವು. ಈ ವಿಚಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಗಮನಕ್ಕೂ ಹೋಗಿತ್ತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಪ್ರತ್ಯೇಕವಾಗಿ ಅಮಿತ್ ಶಾ ಅವರನ್ನು ಭೇಟಿಯಾದ ಬಳಿಕ, ಅವರ ಸೂಚನೆಯಂತೆ ಉಭಯ ಪಕ್ಷಗಳ ನಾಯಕರು ಸಭೆ ನಡೆಸಿದ್ದಾರೆ ಎನ್ನಲಾಗಿದೆ. ಖಾಸಗಿ ಹೋಟೆಲ್‌ನಲ್ಲಿ ನಡೆದ ಸಭೆಯಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ್. ಅಶೋಕ್, ಬಿಜೆಪಿ ನಾಯಕ ಸಿ.ಟಿ. ರವಿ, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಎರಡೂ ಪಕ್ಷಗಳ ಪ್ರಮುಖ ನಾಯಕರು ಭಾಗವಹಿಸಿದ್ದರು.

ಹಿರಿಯೂರು ಉಪಚುನಾವಣೆ ಟಿಕೆಟ್‌ ನಿರ್ಧಾರ ಹೈಕಮಾಂಡ್‌ಗೆ

ಸಭೆಯಲ್ಲಿ ಮೊದಲಿಗೆ ಹಿರಿಯೂರು ವಿಧಾನಸಭಾ ಉಪಚುನಾವಣೆಯ ಅಭ್ಯರ್ಥಿ ಆಯ್ಕೆ ಕುರಿತು ಚರ್ಚೆ ನಡೆದಿದೆ. ಕಳೆದ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಪೂರ್ಣಿಮಾ ಶ್ರೀನಿವಾಸ್ ಈಗ ಕಾಂಗ್ರೆಸ್ ಸೇರ್ಪಡೆಯಾಗಿರುವ ಹಿನ್ನೆಲೆಯಲ್ಲಿ ಕ್ಷೇತ್ರದ ರಾಜಕೀಯ ಪರಿಸ್ಥಿತಿಯ ಬಗ್ಗೆಯೂ ನಾಯಕರು ಚರ್ಚಿಸಿದ್ದಾರೆ.

ಕಳೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎರಡನೇ ಸ್ಥಾನದಲ್ಲಿದ್ದ ಕಾರಣ, ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟುಕೊಡಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಮತ್ತೊಂದೆಡೆ, ಹಿರಿಯೂರಿನಲ್ಲಿ ಜೆಡಿಎಸ್‌ನ ಸಂಘಟನಾ ಶಕ್ತಿ ಮತ್ತು ಮತಗಳ ಆಧಾರವನ್ನು ಪರಿಗಣಿಸಿ ಮೈತ್ರಿ ಟಿಕೆಟ್‌ ತಮಗೆ ನೀಡಬೇಕು ಎಂಬ ಬೇಡಿಕೆಯೂ ಇದೆ.

ಆದರೆ, ಎರಡೂ ಪಕ್ಷಗಳ ನಡುವೆ ಟಿಕೆಟ್‌ ವಿಚಾರವಾಗಿ ಭಿನ್ನಾಭಿಪ್ರಾಯ ಮುಂದುವರಿದರೆ ಅದರ ಲಾಭ ಕಾಂಗ್ರೆಸ್‌ಗೆ ಆಗಬಹುದು ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಗಿದೆ. ಹೀಗಾಗಿ ಬಿಜೆಪಿ ಅಥವಾ ಜೆಡಿಎಸ್‌ ಯಾರಿಗೆ ಟಿಕೆಟ್‌ ನೀಡಿದರೂ, ಅಭ್ಯರ್ಥಿಯನ್ನು ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಪರಿಗಣಿಸಿ ಎರಡೂ ಪಕ್ಷಗಳ ನಾಯಕರು ಒಟ್ಟಾಗಿ ಕೆಲಸ ಮಾಡಬೇಕು ಎಂಬ ತೀರ್ಮಾನಕ್ಕೆ ಬರಲಾಗಿದೆ. ಅಂತಿಮವಾಗಿ ಯಾರಿಗೆ ಟಿಕೆಟ್‌ ನೀಡಬೇಕು ಎಂಬುದನ್ನು ಅಮಿತ್ ಶಾ ನೇತೃತ್ವದ ಹೈಕಮಾಂಡ್ ನಿರ್ಧರಿಸಲಿದೆ ಎಂದು ಚರ್ಚಿಸಲಾಗಿದೆ.

ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ತಾಲೂಕು ಮಟ್ಟದಲ್ಲಿ ಸಮನ್ವಯ ಸಮಿತಿ

ಸಭೆಯ ಎರಡನೇ ಪ್ರಮುಖ ವಿಚಾರ ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಆಗಿತ್ತು. ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪ್ರತ್ಯೇಕವಾಗಿ ಸ್ಪರ್ಧಿಸುವ ಬದಲು, ಸಾಧ್ಯವಾದಷ್ಟು ಕಡೆಗಳಲ್ಲಿ ಮೈತ್ರಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಬೇಕು ಎಂಬ ಪ್ರಸ್ತಾಪ ಸಭೆಯಲ್ಲಿ ಕೇಳಿಬಂದಿದೆ. ಬಿಜೆಪಿ ನಾಯಕ ಸಿ.ಟಿ. ರವಿ ಸೇರಿದಂತೆ ಹಲವು ನಾಯಕರು ಈ ಅಭಿಪ್ರಾಯವನ್ನು ಮುಂದಿಟ್ಟಿದ್ದಾರೆ.

ಆದರೆ, ಕೆಲವು ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ಸ್ಥಳೀಯ ಮಟ್ಟದಲ್ಲಿ ರಾಜಕೀಯ ಪೈಪೋಟಿಯಿದೆ. ಹಾಸನದಂತಹ ಕ್ಷೇತ್ರಗಳಲ್ಲಿ ಎರಡೂ ಪಕ್ಷಗಳ ನಡುವೆ ಸಂಘರ್ಷದ ಪರಿಸ್ಥಿತಿಯೂ ಇದೆ. ಹೀಗಾಗಿ ಎಲ್ಲ ಕ್ಷೇತ್ರಗಳಿಗೂ ಒಂದೇ ರೀತಿಯ ಮೈತ್ರಿ ಸೂತ್ರವನ್ನು ಅನ್ವಯಿಸುವ ಬದಲು ಸ್ಥಳೀಯ ಪರಿಸ್ಥಿತಿಗೆ ಅನುಗುಣವಾಗಿ ನಿರ್ಧಾರ ಕೈಗೊಳ್ಳಲು ತೀರ್ಮಾನಿಸಲಾಗಿದೆ.

ಇದಕ್ಕಾಗಿ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಎರಡೂ ಪಕ್ಷಗಳ ಮುಖಂಡರನ್ನು ಒಳಗೊಂಡ ಸಮನ್ವಯ ಸಮಿತಿಗಳನ್ನು ರಚಿಸುವ ಬಗ್ಗೆ ಚರ್ಚೆ ನಡೆದಿದೆ. ಈ ಸಮಿತಿಗಳು ಸ್ಥಳೀಯ ರಾಜಕೀಯ ಪರಿಸ್ಥಿತಿ, ಪಕ್ಷಗಳ ಬಲಾಬಲ ಮತ್ತು ಅಭ್ಯರ್ಥಿಗಳ ಗೆಲುವಿನ ಸಾಧ್ಯತೆಗಳನ್ನು ಪರಿಶೀಲಿಸಿ ವರದಿ ನೀಡಲಿವೆ. ಆ ವರದಿಯ ಆಧಾರದ ಮೇಲೆ ಮೈತ್ರಿ ಅಭ್ಯರ್ಥಿಗಳ ಆಯ್ಕೆ ಕುರಿತು ನಿರ್ಧಾರ ಕೈಗೊಳ್ಳುವ ಉದ್ದೇಶವಿದೆ.

2028ರ ಚುನಾವಣೆಗೆ ಒಗ್ಗಟ್ಟಿನ ಹೋರಾಟ

ಸಭೆಯ ಮೂರನೇ ಪ್ರಮುಖ ನಿರ್ಧಾರ 2028ರ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದ್ದು. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಒಗ್ಗಟ್ಟಿನಿಂದ ಹೋರಾಟ ನಡೆಸಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿದೆ.ಮೈತ್ರಿ ಪಕ್ಷಗಳ ನಡುವೆ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬ ವಿಚಾರವನ್ನು ಈಗಲೇ ಚರ್ಚೆಗೆ ತರುವುದಿಲ್ಲ. ಬದಲಾಗಿ, ನಾಯಕರು ಪರಸ್ಪರ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಸಂಘಟನೆಯನ್ನು ಬಲಪಡಿಸುವ ಮೂಲಕ ಕಾಂಗ್ರೆಸ್‌ಗೆ ರಾಜಕೀಯವಾಗಿ ಸವಾಲು ಹಾಕಬೇಕು ಎಂಬ ನಿಲುವಿಗೆ ಬರಲಾಗಿದೆ.



Read More
Next Story