
ಸಚಿವರ ಸಭೆಯುಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.
Siddaramaiah Resignation | ಸಚಿವರ ಸಭೆಯಲ್ಲಿ ರಾಜೀನಾಮೆ ಘೋಷಿಸಿದ ಸಿಎಂ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವರ ಸಭೆಯಲ್ಲಿ ರಾಜೀನಾಮೆ ಘೋಷಣೆ ಮಾಡಿದ್ದಾರೆ ಎನ್ನಲಾಗಿದೆ. ಹೈಕಮಾಂಡ್ ಸೂಚನೆಯಂತೆ ಸಿಎಂ ಸ್ಥಾನ ತ್ಯಜಿಸುವುದಾಗಿ ತಿಳಿಸಿದ್ದು, ರಾಜ್ಯಪಾಲರಿಗೆ ಸಂಜೆ ರಾಜೀನಾಮೆ ಸಲ್ಲಿಸುವ ಸಾಧ್ಯತೆ ಇದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವರ ಸಭೆಯಲ್ಲಿ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ತೀರ್ಮಾನ ಕೈಗೊಂಡಿರುವುದಾಗಿ ಅವರು ಸಚಿವರಿಗೆ ತಿಳಿಸಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆಗೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸಲಿದ್ದಾರೆ.
ಕಾವೇರಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, “ಹೈಕಮಾಂಡ್ ತೀರ್ಮಾನದಂತೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಈವರೆಗೆ ನನಗೆ ಸಹಕಾರ ನೀಡಿದ ಸಚಿವರು, ಶಾಸಕರು ಹಾಗೂ ಪಕ್ಷದ ನಾಯಕರಿಗೆ ಧನ್ಯವಾದಗಳು,” ಎಂದು ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸಚಿವ ಸಂಪುಟ ಸಭೆಗೂ ಮುನ್ನ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಉಪಹಾರ ಸೇವಿಸಿದರು.
ರಾಜ್ಯಪಾಲರು ಸಂಜೆ ಭೇಟಿಗೆ ಸಮಯ ನೀಡಿದರೆ ತಕ್ಷಣವೇ ರಾಜೀನಾಮೆ ಸಲ್ಲಿಸುವುದಾಗಿ ಅವರು ಹೇಳಿದ್ದಾರೆ ಎನ್ನಲಾಗಿದೆ. ಜೊತೆಗೆ, ಮುಂದಿನ ರಾಜಕೀಯ ಹಾಗೂ ನಾಯಕತ್ವದ ತೀರ್ಮಾನಗಳನ್ನು ಕಾಂಗ್ರೆಸ್ ಹೈಕಮಾಂಡ್ ಕೈಗೊಳ್ಳಲಿದೆ ಎಂದು ಸಹ ಸ್ಪಷ್ಟಪಡಿಸಿದ್ದಾರೆ.
ಸಿದ್ದರಾಮಯ್ಯ ಅವರ ಈ ಘೋಷಣೆಯೊಂದಿಗೆ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಮುಂದಿನ ಮುಖ್ಯಮಂತ್ರಿ ಆಯ್ಕೆ ಕುರಿತ ಚರ್ಚೆಗಳು ಇದೀಗ ತೀವ್ರಗೊಂಡಿವೆ. ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಹೆಸರು ಪ್ರಮುಖವಾಗಿ ಕೇಳಿಬರುತ್ತಿದೆ.

