ಮಂಗಳೂರು ಮೀನುಗಾರಿಕಾ ಬಂದರಿಗೆ ಡಿಕೆಶಿ ದಿಢೀರ್ ಭೇಟಿ: ಅಧಿಕಾರಿಗಳ ವಿರುದ್ಧ ಗರಂ
x

ಮಂಗಳೂರು ಮೀನುಗಾರಿಕಾ ಬಂದರಿಗೆ ಡಿಕೆಶಿ ದಿಢೀರ್ ಭೇಟಿ: ಅಧಿಕಾರಿಗಳ ವಿರುದ್ಧ ಗರಂ

ಮಂಗಳೂರಿನ ಮೀನುಗಾರಿಕಾ ಬಂದರಿಗೆ ಸಿಎಂ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ ನೀಡಿ ಮೀನುಗಾರರ ಸಮಸ್ಯೆ ಆಲಿಸಿದರು. ಭದ್ರತಾ ಕಾರಣಕ್ಕೆ ಬಂದರು ಬಂದ್ ಮಾಡಿಸಿದ್ದಕ್ಕೆ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.


Click the Play button to hear this message in audio format

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲ ಬಾರಿಗೆ ಸಂಪುಟ ಸಭೆ ನಡೆಸಿ ಕರಾವಳಿ ಭಾಗಕ್ಕೆ ಹಲವು ಯೋಜನೆಗಳನ್ನು ಘೋಷಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶನಿವಾರ ಬೆಳಗ್ಗೆ ಮಂಗಳೂರಿನ ಮೀನುಗಾರಿಕಾ ಬಂದರಿಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಇದೇ ವೇಳೆ ಮೀನುಗಾರರ ಸಮಸ್ಯೆಗಳನ್ನು ಆಲಿಸಿದ ಅವರು, ಬಂದರಿನ ಚಟುವಟಿಕೆಗಳನ್ನು ಬಂದ್ ಮಾಡಿಸಿದ್ದ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಮೀನುಗಾರಿಕಾ ಬಂದರಿಗೆ ಆಗಮಿಸಿದ ಮುಖ್ಯಮಂತ್ರಿ, ಮೀನುಗಾರರೊಂದಿಗೆ ನೇರವಾಗಿ ಮಾತುಕತೆ ನಡೆಸಿ ಅವರ ಸಮಸ್ಯೆ ಹಾಗೂ ತುರ್ತು ಬೇಡಿಕೆಗಳನ್ನು ಆಲಿಸಿದರು. ಬಳಿಕ ಮೀನುಗಾರಿಕಾ ಬೋಟ್‌ನಲ್ಲಿ ಪ್ರಯಾಣಿಸಿದ ಅವರು, ಸಮುದ್ರದಿಂದ ದಡ ಸೇರುವ ಅಳಿವೆ ಬಾಗಿಲು ಪ್ರದೇಶದ ವಾಸ್ತವ ಸ್ಥಿತಿಯನ್ನು ಪರಿಶೀಲಿಸಿದರು.

ಮುಖ್ಯಮಂತ್ರಿಗಳ ಭೇಟಿ ಹಿನ್ನೆಲೆಯಲ್ಲಿ ಭದ್ರತಾ ಕಾರಣಗಳನ್ನು ಮುಂದಿಟ್ಟುಕೊಂಡು ಮೀನುಗಾರಿಕಾ ಚಟುವಟಿಕೆಗಳನ್ನು ಸ್ಥಗಿತಗೊಳಿಸಿದ್ದಕ್ಕೆ ಡಿ.ಕೆ. ಶಿವಕುಮಾರ್ ಅಧಿಕಾರಿಗಳ ವಿರುದ್ಧ ಗರಂ ಆದರು. ಮೀನುಗಾರರ ವ್ಯಾಪಾರವನ್ನು ಸ್ಥಗಿತಗೊಳಿಸಲು ಯಾರು ಸೂಚನೆ ನೀಡಿದರು ಎಂದು ಪ್ರಶ್ನಿಸಿದ ಅವರು, ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಆಯುಕ್ತರಿಗೆ ಸೂಚಿಸಿದರು.

ಭದ್ರತೆಯ ನೆಪದಲ್ಲಿ ಬಂದರಿನ ವ್ಯಾಪಾರ ಚಟುವಟಿಕೆಗಳನ್ನು ಬಂದ್ ಮಾಡಿಸಿರುವುದಕ್ಕೂ ಮುಖ್ಯಮಂತ್ರಿ ಅಸಮಾಧಾನ ವ್ಯಕ್ತಪಡಿಸಿದರು. ಮೀನುಗಾರರ ಸಮಸ್ಯೆಗಳನ್ನು ಆಲಿಸಲು ತಾವು ಬಂದಿದ್ದು, ಅವರ ವ್ಯಾಪಾರಕ್ಕೆ ತೊಂದರೆ ನೀಡಬಾರದು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಮುಖ್ಯಮಂತ್ರಿಗಳ ಸೂಚನೆಯ ಬಳಿಕ ಬಂದರಿನ ಚಟುವಟಿಕೆಗಳನ್ನು ಪುನರಾರಂಭಿಸಲಾಯಿತು. ಬಳಿಕ ಡಿ.ಕೆ. ಶಿವಕುಮಾರ್ ಅವರು ಮೀನುಗಾರರ ಬಳಿಗೆ ತೆರಳಿ ಅವರ ಸಮಸ್ಯೆಗಳನ್ನು ಮತ್ತಷ್ಟು ಆಲಿಸಿದರು.

Read More
Next Story