ಕಲಬುರಗಿಯಲ್ಲಿ ರಾತ್ರೋರಾತ್ರಿ ಸಿದ್ದರಾಮಯ್ಯ ಪ್ರತಿಮೆ ಸ್ಥಾಪನೆ
x

ಕಲಬುರಗಿಯಲ್ಲಿ ರಾತ್ರೋರಾತ್ರಿ ಸಿದ್ದರಾಮಯ್ಯ ಪ್ರತಿಮೆ ಸ್ಥಾಪನೆ

ಕಲಬುರಗಿಯ ಹೈಕೋರ್ಟ್‌ ಕ್ರಾಸ್‌ ಬಳಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಮೆ ರಾತ್ರೋರಾತ್ರಿ ಸ್ಥಾಪನೆಯಾಗಿದೆ. ಪ್ರತಿಮೆ ಸ್ಥಾಪನೆಗೆ ಜಿಲ್ಲಾಡಳಿತದ ಅನುಮತಿ ಪಡೆಯಲಾಗಿದೆಯೇ ಎಂಬುದು ಚರ್ಚೆಗೆ ಕಾರಣವಾಗಿದೆ.


ಕಲ್ಯಾಣ ಕರ್ನಾಟಕ ಉತ್ಸವದ ಸಂಭ್ರಮದ ನಡುವೆಯೇ ಕಲಬುರಗಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಮೆ ರಾತ್ರೋರಾತ್ರಿ ಸ್ಥಾಪನೆಯಾಗಿರುವುದು ಇದೀಗ ಚರ್ಚೆಗೆ ಕಾರಣವಾಗಿದೆ. ನಗರದ ಹೈಕೋರ್ಟ್‌ ಕ್ರಾಸ್‌ ಬಳಿ ಸಾರ್ವಜನಿಕ ಸ್ಥಳದಲ್ಲಿ ಪ್ರತಿಮೆ ಸ್ಥಾಪಿಸಲಾಗಿದೆ ಎಂದು ತಿಳಿದುಬಂದಿದೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಕಲಬುರಗಿ ಪ್ರವಾಸದಲ್ಲಿರುವ ಸಂದರ್ಭದಲ್ಲೇ ಸಿದ್ದರಾಮಯ್ಯ ಅವರ ಪ್ರತಿಮೆ ಸ್ಥಾಪನೆಯಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಪ್ರತಿಮೆ, ಸ್ಮಾರಕ ಅಥವಾ ಶಾಶ್ವತ ನಿರ್ಮಾಣ ಕೈಗೊಳ್ಳಬೇಕಾದರೆ ಸಂಬಂಧಪಟ್ಟ ಸ್ಥಳೀಯ ಆಡಳಿತ ಹಾಗೂ ಇಲಾಖೆಗಳ ಅನುಮತಿ ಪಡೆಯಬೇಕಾಗುತ್ತದೆ.

ಅನುಮತಿ ಪಡೆದಿರುವ ಬಗ್ಗೆ ಅನುಮಾನ ವ್ಯಕ್ತ

ಆದರೆ ಈ ಪ್ರತಿಮೆ ಸ್ಥಾಪನೆಗೆ ಜಿಲ್ಲಾಡಳಿತ ಅಥವಾ ಸಂಬಂಧಪಟ್ಟ ಪ್ರಾಧಿಕಾರದಿಂದ ಅನುಮತಿ ಪಡೆಯಲಾಗಿದೆಯೇ ಎಂಬುದು ಸದ್ಯಕ್ಕೆ ಸ್ಪಷ್ಟವಾಗಿಲ್ಲ. ಅನುಮತಿ ಇಲ್ಲದೆ ಪ್ರತಿಮೆ ಸ್ಥಾಪಿಸಲಾಗಿದೆಯೇ ಎಂಬ ಪ್ರಶ್ನೆಯೂ ಇದೀಗ ಎದುರಾಗಿದೆ. ಇತ್ತೀಚಿನ ದಿನಗಳಲ್ಲಿ ಅನುಮತಿ ಪಡೆಯದೆ ಅಳವಡಿಸಲಾಗಿದ್ದ ಬ್ಯಾನರ್‌ಗಳು, ಕಟೌಟ್‌ಗಳು ಹಾಗೂ ಇತರ ನಿರ್ಮಾಣಗಳನ್ನು ಮಹಾನಗರ ಪಾಲಿಕೆ ಅಧಿಕಾರಿಗಳು ತೆರವುಗೊಳಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರ ಪ್ರತಿಮೆ ಸ್ಥಾಪನೆ ಪ್ರಕರಣದಲ್ಲಿ ಜಿಲ್ಲಾಡಳಿತ ಯಾವ ಕ್ರಮ ಕೈಗೊಳ್ಳಲಿದೆ ಎಂಬುದು ಗಮನ ಸೆಳೆದಿದೆ.

ವಿಶೇಷವೆಂದರೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಹಿನ್ನೆಲೆಯಲ್ಲಿ ಕಲಬುರಗಿಗೆ ಆಗಮಿಸಿದ್ದ ಸಂದರ್ಭದಲ್ಲೇ ಈ ಪ್ರತಿಮೆ ಸ್ಥಾಪನೆಯಾಗಿದೆ ಎನ್ನಲಾಗಿದೆ. ಹೀಗಾಗಿ ಪ್ರತಿಮೆ ಸ್ಥಾಪನೆಯ ಹಿಂದಿನ ಉದ್ದೇಶವೇನು ಎಂಬ ಬಗ್ಗೆಯೂ ಚರ್ಚೆ ಆರಂಭವಾಗಿದೆ.

ಸಾರ್ವಜನಿಕ ಸ್ಥಳದಲ್ಲಿ ಪ್ರತಿಮೆ ಸ್ಥಾಪನೆಗೆ ಅಗತ್ಯ ಅನುಮತಿಗಳನ್ನು ಪಡೆಯಲಾಗಿದೆಯೇ? ಅನುಮತಿ ಪಡೆಯದಿದ್ದರೆ ಜಿಲ್ಲಾಡಳಿತ ಪ್ರತಿಮೆಯನ್ನು ತೆರವುಗೊಳಿಸಲಿದೆಯೇ ಅಥವಾ ಸ್ಥಾಪಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಿದೆಯೇ ಎಂಬುದು ಸದ್ಯದ ಕುತೂಹಲವಾಗಿದೆ. ಪ್ರತಿಮೆ ಸ್ಥಾಪನೆಗೆ ಸಂಬಂಧಿಸಿದಂತೆ ಜಿಲ್ಲಾಡಳಿತದಿಂದ ಅಧಿಕೃತ ಮಾಹಿತಿ ಹೊರಬರಬೇಕಿದೆ.

Read More
Next Story