
ಇಂದು ಕಾಂಗ್ರೆಸ್ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟ ಸಾಧ್ಯತೆ
Karnataka By Election|ಇಂದು ಕಾಂಗ್ರೆಸ್ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟ ಸಾಧ್ಯತೆ
ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಸಚಿವ ಮಲ್ಲಿಕಾರ್ಜುನ್ ಅವರ ಪುತ್ರ ಸಮರ್ಥ್ ಅವರ ಹೆಸರನ್ನು ಪ್ರಬಲವಾಗಿ ಶಿಫಾರಸು ಮಾಡಲಾಗಿದೆ.
ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಸಂಬಂಧಿಸಿದಂತೆ ಆಡಳಿತಾರೂಢ ಕಾಂಗ್ರೆಸ್ ಪಕ್ಷವು ಶುಕ್ರವಾರ ತನ್ನ ಅಧಿಕೃತ ಅಭ್ಯರ್ಥಿಗಳನ್ನು ಘೋಷಿಸುವ ನಿರೀಕ್ಷೆಯಿದೆ.
ಮುಂಬರುವ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೋಮವಾರವೇ ಕಡೆಯ ದಿನವಾಗಿರುವ ಹಿನ್ನೆಲೆಯಲ್ಲಿ, ಆದಷ್ಟು ಶೀಘ್ರವಾಗಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಆಡಳಿತ ಪಕ್ಷವು ತುರ್ತು ಹೆಜ್ಜೆಗಳನ್ನಿಟ್ಟಿದೆ. ಟಿಕೆಟ್ ಆಕಾಂಕ್ಷಿಗಳ ಪೈಪೋಟಿಯ ನಡುವೆಯೂ ಗೆಲುವಿನ ಮಾನದಂಡದ ಆಧಾರದ ಮೇಲೆ ಅಂತಿಮ ನಿರ್ಧಾರ ಕೈಗೊಳ್ಳಲು ಪಕ್ಷದ ವರಿಷ್ಠರು ಮುಂದಾಗಿದ್ದಾರೆ.
ಸರಣಿ ಸಭೆಗಳ ಮೂಲಕ ಅಭ್ಯರ್ಥಿಗಳ ಆಯ್ಕೆ ಕಸರತ್ತು
ಅಭ್ಯರ್ಥಿಗಳ ಅಂತಿಮ ಆಯ್ಕೆಗೆ ಸಂಬಂಧಿಸಿದಂತೆ ಗುರುವಾರ ಕಾಂಗ್ರೆಸ್ ನಾಯಕರ ಮಟ್ಟದಲ್ಲಿ ಮಹತ್ವದ ಸರಣಿ ಸಭೆಗಳು ಜರುಗಿವೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರ ನೇತೃತ್ವದಲ್ಲಿ ನಡೆದ ಈ ಮಹತ್ವದ ಸಭೆಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಆಯಾ ಜಿಲ್ಲೆಗಳ ಉಸ್ತುವಾರಿ ಸಚಿವರು ಪಾಲ್ಗೊಂಡು ಸುದೀರ್ಘ ಚರ್ಚೆ ನಡೆಸಿದ್ದಾರೆ. ಈ ಸಭೆಗಳಲ್ಲಿ ಕಲೆಹಾಕಲಾದ ಮಾಹಿತಿ ಹಾಗೂ ಸ್ಥಳೀಯ ನಾಯಕರ ಅಭಿಪ್ರಾಯಗಳ ಆಧಾರದ ಮೇಲೆ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು (ಕೆಪಿಸಿಸಿ) ಎರಡೂ ಕ್ಷೇತ್ರಗಳ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿ ಎಐಸಿಸಿ ಹೈಕಮಾಂಡ್‌ಗೆ ರವಾನಿಸಿದೆ.
ಅನುಕಂಪದ ಅಲೆಗೆ ಮಣೆ ಹಾಕಲು ಕೈ ಪಡೆ ಮುಂದು
ಮೂಲಗಳ ಪ್ರಕಾರ, ಈ ಬಾರಿಯ ಉಪಚುನಾವಣೆಯಲ್ಲಿ ಅನುಕಂಪದ ಅಲೆಯನ್ನು ಸಮರ್ಥವಾಗಿ ಬಳಸಿಕೊಳ್ಳುವ ಲೆಕ್ಕಾಚಾರದಲ್ಲಿ ರಾಜ್ಯ ಕಾಂಗ್ರೆಸ್ ನಾಯಕರಿದ್ದಾರೆ ಎನ್ನಲಾಗಿದೆ. ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಸಚಿವ ಮಲ್ಲಿಕಾರ್ಜುನ್ ಅವರ ಪುತ್ರ ಸಮರ್ಥ್ ಅವರ ಹೆಸರನ್ನು ಪ್ರಬಲವಾಗಿ ಶಿಫಾರಸು ಮಾಡಲಾಗಿದ್ದು, ಇದರ ಜೊತೆಗೆ ಅಲ್ಪಸಂಖ್ಯಾತ ಮುಖಂಡರು ಸೂಚಿಸಿರುವ ಪರ್ಯಾಯ ಹೆಸರುಗಳ ಪಟ್ಟಿಯನ್ನೂ ವರಿಷ್ಠರ ಅಂಗಳಕ್ಕೆ ಕಳುಹಿಸಲಾಗಿದೆ. ಇತ್ತ ಬಾಗಲಕೋಟೆ ಕ್ಷೇತ್ರದಿಂದ ಮೇಟಿ ಕುಟುಂಬಕ್ಕೆ ಟಿಕೆಟ್ ನೀಡುವ ಒಲವು ವ್ಯಕ್ತವಾಗಿದ್ದು, ಉಮೇಶ್ ಮೇಟಿ ಅವರ ಹೆಸರನ್ನು ಕೆಪಿಸಿಸಿ ಶಿಫಾರಸು ಮಾಡಿದೆ. ಅಂತಿಮವಾಗಿ ಎರಡೂ ಕ್ಷೇತ್ರಗಳ ಸ್ಥಳೀಯ ರಾಜಕೀಯ ಪರಿಸ್ಥಿತಿ, ಸೂಕ್ಷ್ಮ ಜಾತಿ ಸಮೀಕರಣಗಳು ಹಾಗೂ ಗೆಲ್ಲುವ ಸಾಮರ್ಥ್ಯವನ್ನು ಕೂಲಂಕಷವಾಗಿ ಪರಿಗಣಿಸಿ ಕಾಂಗ್ರೆಸ್ ಹೈಕಮಾಂಡ್ ಇಂದು ಅಧಿಕೃತವಾಗಿ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸುವ ಸಾಧ್ಯತೆಯಿದೆ.

