ಇಂದು ರಾಹುಲ್ ಗಾಂಧಿ ಜೊತೆ ಅಂತಿಮ ಸುತ್ತಿನ ಮಾತುಕತೆ- ನೂತನ ಸಚಿವರ ಪಟ್ಟಿ ಇಂದು ಫೈನಲ್
ಮಂಗಳವಾರ ಕೆ.ಸಿ. ವೇಣುಗೋಪಾಲ್ ನೇತೃತ್ವದಲ್ಲಿ ನಡೆದ ಸುದೀರ್ಘ ಸಭೆಯಲ್ಲಿ ಬಹುತೇಕ ಭಿನ್ನಾಭಿಪ್ರಾಯಗಳು ಬಗೆಹರಿದಿವೆ ಎಂದು ಮೂಲಗಳು ತಿಳಿಸಿವೆ. ಇಂದು ರಾಹುಲ್ ಗಾಂಧಿ ಅವರೊಂದಿಗೆ ನಡೆಯುವ ಸಭೆಯಲ್ಲೇ ಅಂತಿಮ ತೀರ್ಮಾನವಾಗುವ ನಿರೀಕ್ಷೆ ಇದೆ.
ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ಕಸರತ್ತು ಅಂತಿಮ ಹಂತ ತಲುಪಿದ್ದು, ಇಂದು ಸಂಜೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯಲಿರುವ ಮಹತ್ವದ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಸೋಮವಾರದಿಂದಲೇ ರಾಜ್ಯದ ಪ್ರಮುಖ ಕಾಂಗ್ರೆಸ್ ನಾಯಕರು ದೆಹಲಿಯಲ್ಲಿ ವಾಸ್ತವ್ಯ ಹೂಡಿದ್ದು, ಹಲವು ಸುತ್ತಿನ ಮಾತುಕತೆಗಳು ನಡೆದಿದ್ದರೂ ಸಚಿವರ ಅಂತಿಮ ಪಟ್ಟಿಗೆ ಒಮ್ಮತ ಮೂಡಿರಲಿಲ್ಲ. ಮಂಗಳವಾರ ಕೆ.ಸಿ. ವೇಣುಗೋಪಾಲ್ ನೇತೃತ್ವದಲ್ಲಿ ನಡೆದ ಸುದೀರ್ಘ ಸಭೆಯಲ್ಲಿ ಬಹುತೇಕ ಭಿನ್ನಾಭಿಪ್ರಾಯಗಳು ಬಗೆಹರಿದಿವೆ ಎಂದು ಮೂಲಗಳು ತಿಳಿಸಿವೆ. ಇಂದು ನಡೆದ ಪ್ರಾಥಮಿಕ ಹಂತದ ಸಭೆಯ ಬಳಿಕ ಸಂಜೆ ರಾಹುಲ್ ಗಾಂಧಿ ಅವರೊಂದಿಗೆ ನಡೆಯುವ ಸಭೆಯಲ್ಲೇ ಅಂತಿಮ ತೀರ್ಮಾನವಾಗುವ ನಿರೀಕ್ಷೆ ಇದೆ.
ಪ್ರಸ್ತುತ ರಾಜ್ಯ ಸಚಿವ ಸಂಪುಟದಲ್ಲಿ 20 ಸ್ಥಾನಗಳು ಖಾಲಿ ಇದ್ದು, ಅವುಗಳನ್ನು ಭರ್ತಿ ಮಾಡುವ ಕುರಿತು ಹೈಕಮಾಂಡ್ ಮಟ್ಟದಲ್ಲಿ ತೀವ್ರ ಚರ್ಚೆ ನಡೆಯುತ್ತಿದೆ. ಈ ಬಾರಿ ಹಲವು ಹೊಸ ಮುಖಗಳಿಗೆ ಅವಕಾಶ ನೀಡುವ ಸಾಧ್ಯತೆ ಇದ್ದು, ಯುವ ನಾಯಕರಿಗೂ ಆದ್ಯತೆ ಸಿಗಬಹುದು ಎನ್ನಲಾಗುತ್ತಿದೆ. ಜೊತೆಗೆ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಬಣಗಳ ನಡುವೆ ಸಮತೋಲನ ಸಾಧಿಸುವ ಪ್ರಯತ್ನವೂ ನಡೆಯುತ್ತಿದೆ.
ಕೇವಲ ಹೊಸ ಸಚಿವರನ್ನು ಸೇರ್ಪಡೆಗೊಳಿಸುವುದಷ್ಟೇ ಅಲ್ಲದೆ, ಈಗಿರುವ ಕೆಲವು ಸಚಿವರ ಕಾರ್ಯಕ್ಷಮತೆಯನ್ನು ಪರಿಶೀಲಿಸಿ ಖಾತೆ ಬದಲಾವಣೆ ಅಥವಾ ಕೆಲವು ಬದಲಾವಣೆಗಳಿಗೂ ಹೈಕಮಾಂಡ್ ಚಿಂತನೆ ನಡೆಸಿದೆ ಎನ್ನಲಾಗಿದೆ. ಮುಂದಿನ ರಾಜಕೀಯ ಸವಾಲುಗಳನ್ನು ಗಮನದಲ್ಲಿಟ್ಟುಕೊಂಡು ಬಲಿಷ್ಠ ತಂಡವನ್ನು ರೂಪಿಸುವುದು ಕಾಂಗ್ರೆಸ್ ನಾಯಕತ್ವದ ಉದ್ದೇಶವಾಗಿದೆ.
ಸಚಿವ ಸಂಪುಟ ರಚನೆಯಲ್ಲಿ ಜಾತಿ ಹಾಗೂ ಪ್ರಾದೇಶಿಕ ಸಮತೋಲನಕ್ಕೂ ವಿಶೇಷ ಆದ್ಯತೆ ನೀಡಲಾಗಿದೆ. ಲಿಂಗಾಯತ, ವೊಕ್ಕಲಿಗ, ಕುರುಬ, ದಲಿತ, ಹಿಂದುಳಿದ ವರ್ಗ, ಅಲ್ಪಸಂಖ್ಯಾತರು ಸೇರಿದಂತೆ ವಿವಿಧ ಸಮುದಾಯಗಳಿಗೆ ಸಮರ್ಪಕ ಪ್ರಾತಿನಿಧ್ಯ ನೀಡುವ ಜೊತೆಗೆ ಉತ್ತರ ಕರ್ನಾಟಕ, ಹಳೆ ಮೈಸೂರು, ಕರಾವಳಿ, ಕಲ್ಯಾಣ ಕರ್ನಾಟಕ ಹಾಗೂ ಮಧ್ಯ ಕರ್ನಾಟಕ ಭಾಗಗಳಿಗೂ ಸೂಕ್ತ ಸ್ಥಾನಮಾನ ನೀಡುವ ಕುರಿತು ಚರ್ಚೆ ನಡೆದಿದೆ.
ಈ ನಡುವೆ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಸಚಿವ ಸ್ಥಾನ ಕುರಿತು ಕೂಡ ಚರ್ಚೆ ನಡೆಯುತ್ತಿದೆ. ದಾವಣಗೆರೆ ಉಪಚುನಾವಣೆಯಲ್ಲಿ ಪಕ್ಷದ ಪರವಾಗಿ ಸಮರ್ಪಕವಾಗಿ ಕೆಲಸ ಮಾಡಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಅವರಿಗೆ ಈ ಬಾರಿ ಅವಕಾಶ ಸಿಗದಿರಬಹುದು ಎಂಬ ಮಾತುಗಳು ಕೇಳಿಬರುತ್ತಿವೆ. ಆದರೆ ತಾವು ಯಾವುದೇ ಪಕ್ಷ ವಿರೋಧಿ ಚಟುವಟಿಕೆ ನಡೆಸಿಲ್ಲ. ಒಂದು ವೇಳೆ ವರಿಷ್ಠರಿಗೆ ಹಾಗೆ ಅನಿಸಿದ್ದರೆ ಕ್ಷಮೆ ಕೇಳಲು ಸಿದ್ಧ ಎಂದು ಜಮೀರ್ ಅಹ್ಮದ್ ಖಾನ್ ಸ್ಪಷ್ಟಪಡಿಸಿದ್ದಾರೆ.
ಮೂಲಗಳ ಪ್ರಕಾರ, ಇಂದಿನ ಸಭೆಯಲ್ಲೇ ಸಚಿವರ ಪಟ್ಟಿಗೆ ಅಂತಿಮ ರೂಪ ಸಿಗುವ ಸಾಧ್ಯತೆ ಇದೆ. ಪಟ್ಟಿ ಅಧಿಕೃತವಾಗಿ ಪ್ರಕಟವಾಗದಿದ್ದರೂ, ಸಚಿವರಾಗುವ ಸಾಧ್ಯತೆ ಇರುವ ನಾಯಕರಿಗೆ ವೈಯಕ್ತಿಕವಾಗಿ ಮಾಹಿತಿ ನೀಡಬಹುದು ಎನ್ನಲಾಗಿದೆ. ಸಭೆ ಮುಗಿದ ಬಳಿಕ ಮುಖ್ಯಮಂತ್ರಿ ಸೇರಿದಂತೆ ರಾಜ್ಯ ನಾಯಕರು ನಾಳೆ ರಾತ್ರಿ ಬೆಂಗಳೂರಿಗೆ ವಾಪಸ್ಸಾಗುವ ಸಾಧ್ಯತೆಯಿದೆ.
ಎಲ್ಲವೂ ಯೋಜನೆಯಂತೆ ನಡೆದರೆ ಗುರುವಾರ ಸಂಜೆ ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯುವ ಸಾಧ್ಯತೆ ಇದೆ. ಈ ಸಂಬಂಧ ಮುಖ್ಯಮಂತ್ರಿ ಕಚೇರಿಯಿಂದ ರಾಜಭವನ ಹಾಗೂ ಲೋಕೋಪಯೋಗಿ ಇಲಾಖೆಗೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಸೂಚನೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.

