
ಹಂಗಾಮಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್
ನೂತನ ಸರ್ಕಾರ ರಚನೆಗೆ ಕಸರತ್ತು; ನಾಳೆ ಶಾಸಕಾಂಗ ಪಕ್ಷದ ಸಭೆ, ನಾಯಕನ ಆಯ್ಕೆ
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ನೂತನ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ನಡೆಯಲಿದೆ.
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಗುರುವಾರ ರಾಜೀನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ ರಾಜ್ಯದ ಮುಂದಿನ ನೂತನ ಮುಖ್ಯಮಂತ್ರಿ ಆಯ್ಕೆಗಾಗಿ ಕಾಂಗ್ರೆಸ್ ಪಾಳಯದಲ್ಲಿ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿವೆ. ಹೊಸ ನಾಯಕನನ್ನು ಆಯ್ಕೆ ಮಾಡುವ ನಿಟ್ಟಿನಲ್ಲಿ ಶನಿವಾರ (ಮೇ 30) ಸಂಜೆ 4 ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ತುರ್ತು ಸಭೆ ಕರೆಯಲಾಗಿದೆ.
ಸಭೆ ಎಲ್ಲಿ? ಯಾರಿಗೆಲ್ಲಾ ಆಹ್ವಾನ?
ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ 334ರಲ್ಲಿ ಈ ಮಹತ್ವದ ಸಭೆ ನಿಗದಿಯಾಗಿದೆ. ಶಾಸಕಾಂಗ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿಯೇ ಈ ಸಭೆ ನಡೆಯಲಿದೆ. ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಹಾಗೂ ವಿಧಾನ ಪರಿಷತ್ ಸಭಾನಾಯಕ ಎನ್.ಎಸ್. ಭೋಸರಾಜು ಸೇರಿದಂತೆ ಪಕ್ಷದ ಎಲ್ಲಾ ಶಾಸಕರು ಭಾಗವಹಿಸಲಿದ್ದಾರೆ ಎಂದು ಶಾಸಕಾಂಗ ಪಕ್ಷದ ಕಾರ್ಯದರ್ಶಿ ಅಲ್ಲಮಪ್ರಭು ಪಾಟೀಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯ ಪ್ರಕಟಣೆ
ನೂತನ ನಾಯಕನ ಆಯ್ಕೆ
ಈ ಸಭೆಯು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಈ ಸಭೆ ನಡೆಯಲಿದ್ದು, ನೂತನ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ನಡೆಯಲಿದೆ. ಆಯ್ಕೆಯಾದ ನಾಯಕರು ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ.
ಚರ್ಚೆಯಾಗಲಿರುವ ಪ್ರಮುಖ ವಿಷಯಗಳೇನು?
ಅಧಿಕೃತ ಪ್ರಕಟಣೆಯಲ್ಲಿ ಸಭೆಯ ಕಾರ್ಯಸೂಚಿ ಬಹಿರಂಗಪಡಿಸದಿದ್ದರೂ, ಈ ಸಭೆಯಲ್ಲಿ ಪಕ್ಷ ಮತ್ತು ಸರ್ಕಾರದ ನಡುವಿನ ಸಮನ್ವಯ ಸಾಧಿಸಲು ಸರ್ಕಾರ ಹಾಗೂ ಸಂಘಟನೆಯನ್ನು ಒಟ್ಟಾಗಿ ಮುನ್ನಡೆಸುವ ಕುರಿತು ಚರ್ಚೆ ನಡೆಸುವ ಸಾಧ್ಯತೆಯಿದೆ.
ಮುಂಬರುವ ದಿನಗಳಲ್ಲಿ ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ಹಮ್ಮಿಕೊಳ್ಳಲಿರುವ ಹೋರಾಟಗಳನ್ನು ಸದನದಲ್ಲಿ ಮತ್ತು ಸದನದ ಹೊರಗೆ ಹೇಗೆ ಸಮರ್ಥವಾಗಿ ಎದುರಿಸಬೇಕು ಎಂಬ ಬಗ್ಗೆ ಶಾಸಕರು ಮತ್ತು ಉಸ್ತುವಾರಿಗಳು ಎಐಸಿಸಿ ನಾಯಕರು ಸೂಚನೆ ನೀಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

