
‘ಕಾವೇರಿ’ಯಲ್ಲಿ ಹೈ-ವೋಲ್ಟೇಜ್ ಮೀಟಿಂಗ್; ಸಿಎಂ ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆಶಿ!
ಸಭೆಗೂ ಮುನ್ನ ಸಿಎಂ ನಿವಾಸಕ್ಕೆ ಆಗಮಿಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದು ಭಾರಿ ಕುತೂಹಲ ಮೂಡಿಸಿದೆ.
ರಾಜ್ಯ ಸರ್ಕಾರದ ನಾಯಕತ್ವ ಬದಲಾವಣೆ ಮತ್ತು ಅಧಿಕಾರ ಹಂಚಿಕೆ ಬಿಕ್ಕಟ್ಟು ಕೊನೆಗೂ ಅಂತಿಮ ಹಂತ ತಲುಪಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಆಯೋಜಿಸಲಾಗಿದ್ದ ಹೈ-ವೋಲ್ಟೇಜ್ ಉಪಹಾರ ಕೂಟದ ರಾಜಕೀಯ ಬೆಳವಣಿಗೆಗಳು ಇಡೀ ರಾಜ್ಯದ ಗಮನ ಸೆಳೆದಿವೆ.
ದೆಹಲಿಯಲ್ಲಿ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ನಡೆದ ಸುದೀರ್ಘ ಸಭೆಯ ಬಳಿಕ, ಹೈಕಮಾಂಡ್ ನೀಡಿದ 2.5 ವರ್ಷದ ಅಧಿಕಾರ ಹಂಚಿಕೆ ಸೂತ್ರಕ್ಕೆ ಸಿಎಂ ಸಿದ್ದರಾಮಯ್ಯ ತಲೆಬಾಗಿದ್ದಾರೆ ಎನ್ನಲಾಗಿದೆ. ಹೈಕಮಾಂಡ್ ಮಾತಿಗೆ ಗೌರವ ನೀಡಿ ಸಿಎಂ ಸ್ಥಾನಕ್ಕೆ ಅವರು ರಾಜೀನಾಮೆ ನೀಡಲು ಸಿದ್ಧರಾಗಿದ್ದಾರೆ ಎಂಬ ದಟ್ಟ ವದಂತಿಗಳ ನಡುವೆಯೇ ಈ ಮಹತ್ವದ ಸಭೆ ನಡೆದಿದೆ.
ಡಿಕೆಶಿ ಭಾವುಕ ಕ್ಷಣ: ಸಿದ್ದು ಕಾಲಿಗೆ ಬಿದ್ದ ‘ಬಂಡೆ’!
ಸಭೆಗೂ ಮುನ್ನ ಸಿಎಂ ನಿವಾಸಕ್ಕೆ ಆಗಮಿಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದು ಭಾರಿ ಕುತೂಹಲ ಮೂಡಿಸಿದೆ. ಸುಗಮ ಅಧಿಕಾರ ಹಸ್ತಾಂತರ ಹಾಗೂ ಉಭಯ ನಾಯಕರ ನಡುವೆ ಸೌಹಾರ್ದಯುತ ವಾತಾವರಣ ಸೃಷ್ಟಿಸುವ ಸಲುವಾಗಿ ಈ ಬ್ರೇಕ್‌ಫಾಸ್ಟ್ ಮೀಟಿಂಗ್ ಆಯೋಜಿಸಲಾಗಿತ್ತು. ಸಿದ್ದರಾಮಯ್ಯ ಅವರ ತೀರ್ಮಾನಕ್ಕೆ ಕೃತಜ್ಞತೆ ಸಲ್ಲಿಸುವಂತೆ ಡಿ.ಕೆ.ಶಿವಕುಮಾರ್ ಈ ಗೌರವ ತೋರಿದ್ದಾರೆ ಎಂದು ರಾಜಕೀಯ ವಲಯದಲ್ಲಿ ವಿಶ್ಲೇಷಿಸಲಾಗುತ್ತಿದೆ.
ಸಿಎಂ ಸಿದ್ದರಾಮಯ್ಯನವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಸಿಎಂ ಡಿ.ಕೆ. ಶಿವಕುಮಾರ್
ಡಿಕೆಶಿ ಎದುರೇ 'ಸಿದ್ದು' ಜೈಕಾರ
ಒಂದೆಡೆ ಸಭೆ ಆರಂಭವಾಗುತ್ತಿದ್ದಂತೆ, ಕಾವೇರಿ ನಿವಾಸದ ಹೊರಗೆ ಹೈಡ್ರಾಮಾ ನಡೆದಿದೆ. ಸಿಎಂ ನಿವಾಸಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಆಗಮಿಸುತ್ತಿದ್ದಂತೆ ಅಲ್ಲಿ ನೆರೆದಿದ್ದ ಸಿದ್ದರಾಮಯ್ಯ ಬೆಂಬಲಿಗರು "5 ವರ್ಷ ಸಿದ್ದರಾಮಯ್ಯ ಅವರೇ ಸಿಎಂ" ಎಂದು ಘೋಷಣೆ ಕೂಗಿದ್ದಾರೆ. ಹೈಕಮಾಂಡ್ ನಿರ್ಧಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅಭಿಮಾನಿಗಳನ್ನು ಪೊಲೀಸರು ವಶಕ್ಕೆ ಪಡೆದು ಪರಿಸ್ಥಿತಿ ತಿಳಿಗೊಳಿಸಿದ್ದಾರೆ.
ಬ್ರೇಕ್‌ಫಾಸ್ಟ್ ಮೀಟಿಂಗ್‌ನಲ್ಲಿ ಭಾಗವಹಿಸಿದ್ದ ಪ್ರಮುಖರು
ಸಚಿವರ ಜೊತೆ ಸಿಎಂ ಸಿದ್ದರಾಮಯ್ಯರಿಂದ ಬ್ರೇಕ್‌ಫಾಸ್ಟ್ ಮೀಟಿಂಗ್ ಆರಂಭಗೊಂಡಿದೆ. ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಸತೀಶ್ ಜಾರಕಿಹೊಳಿ, ಎಂ.ಬಿ.ಪಾಟೀಲ್, ಈಶ್ವರ ಖಂಡ್ರೆ, ಸಂತೋಷ್ ಲಾಡ್, ಪ್ರಿಯಾಂಕ್ ಖರ್ಗೆ, ಎನ್.ಎಸ್.ಬೋಸರಾಜು, ಡಾ.ಶರಣಪ್ರಕಾಶ್ ಪಾಟೀಲ್, ಎಸ್.ಎಸ್.ಮಲ್ಲಿಕಾರ್ಜುನ್, ಜಾರ್ಜ್, ಭೈರತಿ ಸುರೇಶ್, ಡಾ.ಎಂ.ಸಿ.ಸುಧಾಕರ್, ಎನ್.ಚಲುವರಾಯಸ್ವಾಮಿ, ಮಧುಬಂಗಾರಪ್ಪ, ಶಿವಾನಂದ ಪಾಟೀಲ್, ಕೆ.ಹೆಚ್.ಮುನಿಯಪ್ಪ, ರಾಮಲಿಂಗಾರೆಡ್ಡಿ, ಲಕ್ಷ್ಮೀ ಹೆಬ್ಬಾಳ್ಕರ್, ಎಚ್.ಕೆ.ಪಾಟೀಲ್, ಮಹದೇವಪ್ಪ, ಶಿವರಾಜ ತಂಗಡಗಿ, ದಿನೇಶ್ ಗುಂಡೂರಾವ್, ಶಾಸಕರಾದ ಪೊನ್ನಣ್ಣ, ರಾಯರೆಡ್ಡಿ, ಅಶೋಕ್ ಪಟ್ಟಣ್, ಪುಟ್ಟರಂಗಶೆಟ್ಟಿ ಸೇರಿ ಹಲವರು ಭಾಗಿಯಾಗಿದ್ದಾರೆ.

