
ಸಿಎಂ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್
ಭುಗಿಲೆದ್ದ ನಾಯಕತ್ವ ಬದಲಾವಣೆ ಚರ್ಚೆ: ದೆಹಲಿಯಲ್ಲಿ ಡಿಕೆಶಿ ತೀವ್ರ ಕಸರತ್ತು
ಮೇ 4ರ ನಂತರ ಅಧಿಕಾರ ಹಂಚಿಕೆ ಕುರಿತು ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಸಮ್ಮುಖದಲ್ಲಿ ಚರ್ಚೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪಂಚ ರಾಜ್ಯಗಳ ಚುನಾವಣೆ ಹಾಗೂ ರಾಜ್ಯ ವಿಧಾನಸಭೆ ಉಪ ಚುನಾವಣೆ ಮತದಾನ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೂ ಬೂದಿ ಮುಚ್ಚಿದ ಕೆಂಡದಂತಿದ್ದ ನಾಯಕತ್ವ ಬದಲಾವಣೆ ವಿಚಾರ ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ. ಕಳೆದೆರೆಡು ದಿನಗಳಿಂದ ದೆಹಲಿಯಲ್ಲೇ ವಾಸ್ತವ್ಯ ಹೂಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಶತಾಯಗತಾಯ ಹೈಕಮಾಂಡ್ ಒಪ್ಪಿಗೆ ಪಡೆಯಲೇ ಬೇಕು ಎಂದು ಎಐಸಿಸಿ ನಾಯಕರನ್ನು ಭೇಟಿ ಮಾಡುತ್ತಿರುವುದು ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ.
ಶುಕ್ರವಾರ ರಾತ್ರಿ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆಯನ್ನು ಭೇಟಿ ಮಾಡಿದ್ದು, ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ಮಾಡಬೇಕು ಎಂದು ಪಟ್ಟು ಹಿಡಿದಿದ್ದು, ಮೇ 4ರ ನಂತರ ಅಧಿಕಾರ ಹಂಚಿಕೆಯ ಕುರಿತು ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಸಮ್ಮುಖದಲ್ಲಿ ಚರ್ಚೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕಳೆದ ಎರಡು ದಿನಗಳಿಂದ ರಾಹುಲ್ ಗಾಂಧಿಯನ್ನು ಭೇಟಿ ಮಾಡಿ ಚರ್ಚಿಸಲು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಯತ್ನ ಮಾಡುತ್ತಿದ್ದರೂ, ಯಾವುದೇ ಪ್ರಯೋಜನವಾಗಿಲ್ಲ. ಈ ಕುರಿತು ಹೈಕಮಾಂಡ್ ನಾಯಕರೂ ಯಾವುದೇ ಪ್ರತಿಕ್ರಿಯೆ ನೀಡದಿರುವುದು ಡಿಕೆಶಿಗೆ ಬೇಸರ ತರಿಸಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಮೂಲಕ ಭೇಟಿ ಮಾಡಿ ಚರ್ಚಿಸಲು ಸಿದ್ಧತೆ ನಡೆಸುತ್ತಿದ್ದಾರೆ.
ಹೈಕಮಾಂಡ್ ನಾಯಕರೊಂದಿಗೆ ಚರ್ಚಿಸಲು ಮನವಿ
ರಾಜ್ಯ ಸರ್ಕಾರ ರಚನೆಯಾಗಿ ಮೂರು ವರ್ಷವಾಗುತ್ತಿದೆ. ಆದರೆ ಇದುವರೆಗೂ ರಾಜ್ಯ ನಾಯಕತ್ವದ ಬದಲಾವಣೆ ಬಗ್ಗೆ ಹೈಕಮಾಂಡ್ ನಾಯಕರು ಯಾವುದೇ ತೀರ್ಮಾನ ಕೈಗೊಂಡಿಲ್ಲ. ಆದಷ್ಟು ಶೀಘ್ರವಾಗಿ ಸಿಎಂ ಸಿದ್ದರಾಮಯ್ಯನವರನ್ನು ದೆಹಲಿಗೆ ಕರೆಸಿ ಎಐಸಿಸಿ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಅವರ ಸಮ್ಮುಖದಲ್ಲಿ ಚರ್ಚೆ ನಡೆಸುವಂತೆ ಮಲ್ಲಿಕಾರ್ಜುನ ಖರ್ಗೆ ಅವರ ಬಳಿ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ.
ಮುಂದುವರಿದ ಡಿಕೆಶಿ ಪ್ರಯತ್ನ
ಕಾಂಗ್ರೆಸ್ ಸರ್ಕಾರದ ಈ ಅವಧಿಯಲ್ಲೇ ಮುಖ್ಯಮಂತ್ರಿ ಗಾದಿ ಪಡೆಯಬೇಕು ಎಂದು ಪನ ತೊಟ್ಟಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಕಳೆದೊಂದು ವರ್ಷದಿಂದ ಪ್ರಯತ್ನ ಮಾಡುತ್ತಲೇ ಇದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಭೇಟಿ ಮಾಡಿ ನಾಯಕತ್ವ ಬದಲಾವಣೆ ಮಾಡಬೇಕು ಎಂದು ಪ್ರಯತ್ನ ಮಾಡುತ್ತಲೇ ಇದ್ದಾರೆ. ತನ್ನ ಆಪ್ತರಾದ ಶಾಸಕರಾದ ಇಕ್ಬಾಲ್ ಹುಸೇನ್, ಹೆಚ್.ಸಿ. ಬಾಲಕೃಷ್ಣ, ಬಸವರಾಜು ಶಿವಗಂಗಾ, ನಯನಾ ಮೋಟಮ್ಮ ಸೇರಿದಂತೆ ಹಲವು ಶಾಸಕರಿಂದ ಹೈಕಮಾಂಡ್ ಮೇಲೆ ಒತ್ತಡ ಹೇರುತ್ತಿದ್ದಾರೆ.
ಸಿಎಂ ಆಪ್ತರಿಂದಲೂ ಸಭೆ
ಕಳೆದ ಒಂದು ವರ್ಷದಿಂದ ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ಹಾಗೂ ಅಧಿಕಾರ ಹಂಚಿಕೆ ಚರ್ಚೆ ನಡೆಯುತ್ತಲೇ ಇದೆ. ಸಮಯ ಸಿಕ್ಕಾಗಲೆಲ್ಲಾ ಸಿಎಂ ಸಿದ್ದರಾಮಯ್ಯ ಆಪ್ತ ಸಚಿವರು ಹಾಗೂ ಶಾಸಕರು ಔತಣಕೂಟದ ನೆಪದಲ್ಲಿ ಸಭೆ ಸೇರಿ ಹೈಕಮಾಂಡ್‌ಗೆ ಸಂದೇಶ ರವಾನಿಸುತ್ತಿದ್ದಾರೆ. ಸಚಿವರಾದ ಡಾ.ಜಿ. ಪರಮೇಶ್ವರ್, ಸತೀಶ್ ಜಾರಕಿಹೊಳಿ, ಎಚ್.ಸಿ. ಮಹದೇವಪ್ಪ, ಕೃಷ್ಣಬೈರೇಗೌಡ, ಜಮೀರ್ ಅಹಮದ್, ಮಧುಗಿರಿ ಶಾಸಕ ಕೆ.ಎನ್. ರಾಜಣ್ಣ ಸೇರಿದಂತೆ ಹಲವು ನಾಯಕರು ಸಿದ್ದರಾಮಯ್ಯನವರೇ ಐದು ವರ್ಷ ಸಿಎಂ ಎಂದು ಹೇಳಿಕೆ ನೀಡಿದ್ದರು.

