
ಹಂಗಾಮಿ ಸಿಎಂ ಸಿದ್ದರಾಮಯ್ಯ ಹಾಗೂ ನಿಯೋಜಿತ ಸಿಎಂ ಡಿ.ಕೆ.ಶಿವಕುಮಾರ್
"ಚುನಾವಣೆಯಲ್ಲಿ ಸೋಲಬಹುದು, ಸೈದ್ಧಾಂತಿಕವಾಗಿ ಸೋಲಬಾರದು"; ಡಿಕೆಶಿಗೆ ಸಿದ್ದರಾಮಯ್ಯ ಕಿವಿಮಾತು
ಎಂಟು ವರ್ಷಗಳ ಕಾಲ ರಾಜ್ಯದ ಮುಖ್ಯಮಂತ್ರಿಯಾಗಿ ಕನ್ನಡಿಗರ ಸೇವೆ ಮಾಡಲು ಒದಗಿ ಬಂದಿದ್ದ ಅವಕಾಶವನ್ನು ಬಳಸಿಕೊಂಡು ಕರ್ನಾಟಕವನ್ನು ಸಮೃದ್ದ, ಸ್ವಾವಲಂಬಿ ಮತ್ತು ಸ್ವಾಭಿಮಾನಿ ರಾಜ್ಯವನ್ನಾಗಿ ಅಭಿವೃದ್ದಿಪಡಿಸಿದ ಹೆಮ್ಮೆ ನನ್ನದಾಗಿದೆ ಎಂದು ತಿಳಿಸಿದ್ದಾರೆ.
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ಧರಾಮಯ್ಯ ಅವರು ರಾಜೀನಾಮೆ ನೀಡಿದ ನಂತರ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಡಿ.ಕೆ.ಶಿವಕುಮಾರ್ ಅವರಿಗೆ ಅಭಿನಂದನೆ ಜತೆಗೆ ಹಲವು ಸಲಹೆಗಳನ್ನು ನೀಡಿದ್ದಾರೆ.
ಈ ಸಂಬಂಧ ತಮ್ಮ ಸಾಮಾಜಿಕ ಜಾಲತಾಣ ʼಎಕ್ಸ್ʼ ಖಾತೆಯಲ್ಲಿ ಸುದೀರ್ಘ ಪೋಸ್ಟ್ ಹಾಕಿರುವ ಅವರು, "ಶಿವಕುಮಾರ್ ಅವರೇ, ನಿಮ್ಮಲ್ಲಿರುವ ಅದಮ್ಯ ಕ್ರಿಯಾಶೀಲತೆ, ಸಂಘಟನಾ ಚಾತುರ್ಯ ಮತ್ತು ಕಾಂಗ್ರೆಸ್ ಪಕ್ಷದ ಮೇಲಿನ ಸಂಶಾಯತೀತ ನಿಷ್ಠೆಯನ್ನು ಒಬ್ಬ ಸಹದ್ಯೋಗಿಯಾಗಿ ನಾನು ಸಮೀಪದಿಂದ ಗಮನಿಸಿದ್ದೇನೆ. ಇವೆಲ್ಲದರ ಸದುಪಯೋಗ ರಾಜ್ಯದ ಜನತೆಗೆ ಆಗಲಿ" ಎಂದು ಹಾರೈಸಿದ್ದಾರೆ.
ಮುಂದುವರಿದು, "ಇಂದು ಕರ್ನಾಟಕ ತಲಾವಾರು ಆದಾಯದಲ್ಲಿ ದೇಶದಲ್ಲೇ ಮೊದಲ ಸ್ಥಾನದಲ್ಲಿರುವುದು ಮಾತ್ರವಲ್ಲ ಸಂಪತ್ತು, ಅಧಿಕಾರ ಮತ್ತು ಅವಕಾಶಗಳ ಸಮಾನ ಹಂಚಿಕೆಯಲ್ಲಿಯೂ ದೇಶಕ್ಕೆ ಮಾದರಿಯಾಗಿದೆ. ನಾವು ಪ್ರಾರಂಭಿಸಿರುವ ಪ್ರತಿ ಯೋಜನೆಯನ್ನೂ ಉಳಿದ ರಾಜ್ಯಗಳು ಮಾದರಿಯಾಗಿ ಸ್ವೀಕರಿಸಿ ಅನುಷ‍್ಠಾನಕ್ಕೆ ತರುತ್ತಿರುವುದೇ ನಮಗೆಲ್ಲರಿಗೂ ಹೆಮ್ಮೆಯ ವಿಚಾರ" ಎಂದು ತಿಳಿಸಿದ್ದಾರೆ.
ಅಭಿವೃದ್ಧಿ ಬಂಡಿ ಎಳೆಯಿರಿ
ಒಟ್ಟು ಎಂಟು ವರ್ಷಗಳ ಕಾಲ ರಾಜ್ಯದ ಮುಖ್ಯಮಂತ್ರಿಯಾಗಿ ಕನ್ನಡಿಗರ ಸೇವೆ ಮಾಡಲು ಒದಗಿ ಬಂದಿದ್ದ ಅವಕಾಶವನ್ನು ಬಳಸಿಕೊಂಡು ಕರ್ನಾಟಕವನ್ನು ಸಮೃದ್ದ, ಸ್ವಾವಲಂಬಿ ಮತ್ತು ಸ್ವಾಭಿಮಾನಿ ರಾಜ್ಯವನ್ನಾಗಿ ಅಭಿವೃದ್ದಿಪಡಿಸಿದ ಹೆಮ್ಮೆ ನನ್ನದಾಗಿದೆ. ಈ ಅಭಿವೃದ್ದಿಯ ಬಂಡಿಯನ್ನು ಮುಂದಕ್ಕೆ ಎಳೆದೊಯ್ಯವ ಜವಾಬ್ದಾರಿ ನಿಮ್ಮ ಹೆಗಲ ಮೇಲಿದೆ. ಅದಕ್ಕೆ ಬೇಕಾಗಿರುವ ಬದ್ದತೆ, ಸಾಮರ್ಥ್ಯ ಮತ್ತು ಮುನ್ನೋಟ ನಿಮ್ಮಲ್ಲಿದೆ ಎನ್ನುವ ನಂಬಿಕೆ ನನ್ನದು ಎಂದು ಹೇಳಿದ್ದಾರೆ.
ಇಡೀ ದೇಶ ಇಂದು ಆರ್ಥಿಕ ಅಭದ್ರತೆಯಲ್ಲಿ ಭೀತಿಗೊಳಗಾಗಿದೆ. ರಾಜ್ಯದ ಜನತೆ ಕೂಡ ಭವಿಷ್ಯದ ಬಗ್ಗೆ ಆತಂಕಗೊಂಡಿದ್ದಾರೆ. ಸಮರ್ಥ ಆಡಳಿತದ ಮೂಲಕ ಅವರಲ್ಲಿ ಭರವಸೆಯನ್ನು ಹುಟ್ಟಿಸುವ ಜೊತೆಯಲ್ಲಿ ರಾಜ್ಯವನ್ನು ಅಭಿವೃದ್ದಿಯ ಪಥದಲ್ಲಿ ಮುನ್ನಡೆಸುವ ಜವಾಬ್ದಾರಿ ನಿಮ್ಮ ಮೇಲಿದೆ ಎಂದು ಕಿವಿ ಮಾತು ಹೇಳಿದ್ದಾರೆ.
ನಾಯಕತ್ವದ ಬಲ ಹೆಚ್ಚಾಗಲಿ
ಇತ್ತೀಚಿನ ದಿನಗಳಲ್ಲಿ ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ರಾಜಕೀಯವಾಗಿ ಸ್ವಲ್ಪ ಹಿನ್ನಡೆಯಾಗಿದೆ. ನಾವು ಚುನಾವಣೆಯಲ್ಲಿ ಸೋಲಬಹುದು, ಗೆಲ್ಲಬಹುದು. ಆದರೆ, ಸೈದ್ಧಾಂತಿಕವಾಗಿ ಎಂದೂ ಸೋಲಬಾರದು. ಒಂದು ರಾಜಕೀಯ ಪಕ್ಷ ಸೈದ್ಧಾಂತಿಕವಾಗಿ ಸೋತರೆ ಆ ಪಕ್ಷ ಚುನಾವಣೆಯನ್ನು ಗೆಲ್ಲಲಾಗದೆ ನಾಶವಾಗುತ್ತದೆ ಎಂದು ನಂಬಿದವನು ನಾನು. ರಾಜ್ಯದ ಅಭಿವೃದ್ಧಿಯ ಜೊತೆಯಲ್ಲಿ ನಮ್ಮೆಲ್ಲರ ಮಾತೃಸ್ವರೂಪಿಯಾಗಿರುವ ಕಾಂಗ್ರೆಸ್ ಪಕ್ಷದ ಗತವೈಭವವನ್ನು ಮರಳಿ ಸ್ಥಾಪಿಸುವ ಹೊಣೆಗಾರಿಕೆ ಕೂಡ ನಮ್ಮೆಲ್ಲರ ಮೇಲಿದೆ. ಕಾಂಗ್ರೆಸ್ ಪಕ್ಷ ಇಂತಹ ಸವಾಲಿನ ಅನೇಕ ಅಗ್ನಿದಿವ್ಯಗಳನ್ನು ಯಶಸ್ವಿಯಾಗಿ ದಾಟಿ ಬಂದಿರುವ ಇತಿಹಾಸ ನಮಗೆಲ್ಲರಿಗೂ ಪ್ರೇರಣೆಯಾಗಬೇಕು. ನಿಮ್ಮ ನಾಯಕತ್ವ ಬಲ ಈ ಪ್ರಯತ್ನವನ್ನು ಸಫಲಗೊಳಿಸಬೇಕು ಎಂದು ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷದ ಹಿರಿಯರು ತ್ಯಾಗ-ಬಲಿದಾನಗಳ ಮೂಲಕ ಕಟ್ಟಿದ ಸೌಹಾರ್ದ ಭಾರತವನ್ನು ಜಾತಿ-ಧರ್ಮಗಳ ಹೆಸರಲ್ಲಿ ಒಡೆದು ಹಾಕಲಾಗುತ್ತಿದೆ. ಸಂವಿಧಾನವನ್ನೇ ಪ್ರಶ್ನಿಸಲಾಗುತ್ತಿದೆ. ಪ್ರಭುತ್ವವನ್ನು ಪ್ರಶ್ನಿಸುವವರ ದಮನ ಮಾಡಲಾಗುತ್ತಿದೆ. ಗಾಂಧಿ ಅವರನ್ನು ಕೊಂದವರು ಇಂದು ಗೋಡ್ಸೆಯನ್ನು ಮೆರೆಸಲು ಹೊರಟಿದ್ದಾರೆ.
ಸಂವಿಧಾನ ಉಳಿಸಲು ಹೋರಾಟ ಅನಿವಾರ್ಯ
ಸಂವಿಧಾನದ ಆಶಯಗಳಾದ ಸಮಾನತೆ, ಸೌಹಾರ್ದತೆ, ಸಾಮಾಜಿಕ ನ್ಯಾಯ ಮತ್ತು ಜಾತ್ಯತೀತತೆಯ ಮೌಲ್ಯಗಳನ್ನೇ ತನ್ನ ಸಿದ್ಧಾಂತವಾಗಿ ಸ್ವೀಕರಿಸಿರುವ ಕಾಂಗ್ರೆಸ್ ಪಕ್ಷವನ್ನು ಸೈದ್ಧಾಂತಿಕವಾಗಿ ತಳಮಟ್ಟದಿಂದಲೇ ಗಟ್ಟಿಗೊಳಿಸಲು ಮುಂದಾಗುವುದೇ ದೇಶವನ್ನು ಉಳಿಸಲು ನಮಗೆ ಇರುವ ಏಕೈಕ ಮತ್ತು ಸರಿಯಾದ ದಾರಿಯಾಗಿದೆ. ದೇಶದ ಏಕತೆ, ಸಮಗ್ರತೆಯನ್ನು ಉಳಿಸಲು ಸಂವಿಧಾನದ ಗೌರವವನ್ನು ಕಾಪಾಡಲು ಎರಡನೇ ಸ್ವಾತಂತ್ರ್ಯ ಹೋರಾಟ ನಡೆಸಬೇಕಾಗಿರುವ ಕಾಲಘಟ್ಟದಲ್ಲಿ ನಾವಿದ್ದೇವೆ. ಈ ಹೋರಾಟದಲ್ಲಿ ಇಡೀ ಶಾಸಕಾಂಗ ಪಕ್ಷ ಮಾತ್ರವಲ್ಲ,ರಾಜ್ಯದ ಏಳುಕೋಟಿ ಜನತೆ ನಿಮ್ಮ ಜೊತೆಯಲ್ಲಿರುತ್ತದೆ ಎಂದು ಸಿದ್ಧರಾಮಯ್ಯ ಅಭಯ ನೀಡಿದ್ದಾರೆ.

