
ಮೇ 2ಕ್ಕೆ ಅಂಚೆ ಮತಗಳ ಮರುಎಣಿಕೆಗೆ ಸಿದ್ಧತೆ; ಕುತೂಹಲ ಕೆರಳಿಸಿದ ಶೃಂಗೇರಿ ಕ್ಷೇತ್ರ
2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ. ರಾಜೇಗೌಡ ಅವರು ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ವಿರುದ್ಧ ಕೇವಲ 201 ಮತಗಳ ಅಂತರದಿಂದ ಜಯ ಗಳಿಸಿದ್ದರು.
ಕಳೆದ ವಿಧಾನಸಭಾ ಚುನಾವಣೆಯ ಶೃಂಗೇರಿ ಕ್ಷೇತ್ರದ ಫಲಿತಾಂಶಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ಆದೇಶದ ಹಿನ್ನೆಲೆ ಮೇ 2ರಂದು ಅಂಚೆ ಮತಗಳ ಮರುಎಣಿಕೆ ನಡೆಯಲಿದೆ.
ಜಿಲ್ಲಾಡಳಿತವು ನಗರದ ಐಡಿಎಸ್‌ಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂಚೆ ಮತಗಳ ಎಣಿಕೆಗೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ.
ಜಿಲ್ಲಾಡಳಿತದಿಂದ ಬಿಗಿ ಸಿದ್ಧತೆ
ಮರುಎಣಿಕೆ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ನಡೆಸಲು ಜಿಲ್ಲಾಡಳಿತ ಮುಂದಾಗಿದ್ದು, ಹೆಚ್ಚುವರಿ ಜಿಲ್ಲಾಧಿಕಾರಿ ಗೌರವ್ ಶೆಟ್ಟಿ ಅವರನ್ನು ಚುನಾವಣಾಧಿಕಾರಿಯಾಗಿ ನೇಮಿಸಲಾಗಿದೆ. ಜತೆಗೆ ನಾಲ್ವರು ಸಹಾಯಕ ಚುನಾವಣಾಧಿಕಾರಿಗಳನ್ನು ಚುನಾವಣಾ ಪ್ರಕ್ರಿಯೆಗೆ ನಿಯೋಜಿಸಲಾಗಿದೆ. ಇಡೀ ಪ್ರಕ್ರಿಯೆಯ ಮೇಲೆ ನಿಗಾ ಇರಿಸಲು ಮತ ಎಣಿಕೆ ಕೊಠಡಿಯಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಮೇ 2ರಂದು ಬೆಳಿಗ್ಗೆ 8 ಗಂಟೆಯಿಂದಲೇ ಮರುಎಣಿಕೆ ಕಾರ್ಯ ಆರಂಭವಾಗಲಿದೆ.
ಪ್ರಕರಣದ ಹಿನ್ನೆಲೆ ಏನು?
2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ. ರಾಜೇಗೌಡ ಅವರು ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ವಿರುದ್ಧ ಕೇವಲ 201 ಮತಗಳ ಅಂತರದಿಂದ ಜಯ ಗಳಿಸಿದ್ದರು. ಆ ಸಂದರ್ಭದಲ್ಲಿ ಚಲಾವಣೆಯಾಗಿದ್ದ ಒಟ್ಟು 2,811 ಅಂಚೆ ಮತಗಳ ಪೈಕಿ 279 ಮತಗಳನ್ನು ವಿವಿಧ ತಾಂತ್ರಿಕ ಕಾರಣ ನೀಡಿ ತಿರಸ್ಕರಿಸಲಾಗಿತ್ತು.
ಈ ತಿರಸ್ಕೃತ ಮತಗಳೇ ಫಲಿತಾಂಶದ ಮೇಲೆ ಪ್ರಭಾವ ಬೀರಿವೆ ಎಂದು ಆರೋಪಿಸಿದ್ದ ಡಿ.ಎನ್. ಜೀವರಾಜ್, ಅಂದೇ ಮರು ಎಣಿಕೆಗೆ ಮನವಿ ಮಾಡಿದ್ದರು. ಆದರೆ ಜಿಲ್ಲಾ ಚುನಾವಣಾಧಿಕಾರಿಗಳು ಈ ಮನವಿಯನ್ನು ತಿರಸ್ಕರಿಸಿ ಟಿ.ಡಿ. ರಾಜೇಗೌಡ ಅವರ ಆಯ್ಕೆಯನ್ನು ಪ್ರಕಟಿಸಿದ್ದರು. ಇದನ್ನು ಪ್ರಶ್ನಿಸಿ ಜೀವರಾಜ್ ಹೈಕೋರ್ಟ್ ಮೆಟ್ಟಿಲೇರಿದ್ದರು.
ಹೈಕೋರ್ಟ್ ನೀಡಿದ ಆದೇಶವೇನು?
ಜೀವರಾಜ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್. ನಟರಾಜ್ ಅವರಿದ್ದ ಪೀಠವು, ತಿರಸ್ಕೃತಗೊಂಡಿರುವ 279 ಅಂಚೆ ಮತಪತ್ರಗಳನ್ನು ಪುನರ್ ಪರಿಶೀಲಿಸುವಂತೆ ಮಹತ್ವದ ಆದೇಶ ನೀಡಿದೆ.
ಎರಡು ವಾರಗಳ ಒಳಗಾಗಿ ಮರುಪರಿಶೀಲನೆ ಮುಗಿಸಿ ವರದಿ ಸಲ್ಲಿಸುವಂತೆ ಸೂಚಿಸಿರುವುದರಿಂದ ಇದೀಗ ಜಿಲ್ಲಾಡಳಿತ ಕಾರ್ಯಪ್ರವೃತ್ತವಾಗಿದೆ.
ಮರು ಎಣಿಕೆ ವೇಳೆ ಶಾಸಕ ಟಿ.ಡಿ. ರಾಜೇಗೌಡ, ಪರಾಜಿತ ಅಭ್ಯರ್ಥಿ ಡಿ.ಎನ್. ಜೀವರಾಜ್ ಮತ್ತು ಉಭಯ ಪಕ್ಷಗಳ ಏಜೆಂಟರು ಉಪಸ್ಥಿತಿ ಇರಲಿದ್ದಾರೆ.
ಈ ಮರುಎಣಿಕೆಯು ಕ್ಷೇತ್ರದ ರಾಜಕೀಯ ಭವಿಷ್ಯವನ್ನು ನಿರ್ಧರಿಸಲಿದ್ದು, ಇಡೀ ರಾಜ್ಯದ ಕುತೂಹಲ ಶೃಂಗೇರಿಯತ್ತ ನೆಟ್ಟಿದೆ.

