
ಕ್ಷೇತ್ರ ಪುನರ್ವಿಂಗಡಣೆ ಮಸೂದೆ ಅವೈಜ್ಞಾನಿಕ, ದಕ್ಷಿಣಕ್ಕೆ ಅನ್ಯಾಯ; ಪ್ರಿಯಾಂಕ್ ಖರ್ಗೆ
ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತರಲು ಉದ್ದೇಶಿಸಿರುವ ಕ್ಷೇತ್ರ ಪುನರ್ವಿಂಗಡಣೆ ಮಸೂದೆಯ ಹಿಂದೆ ಕೇವಲ ರಾಜಕೀಯ ಲಾಭ ಪಡೆಯುವ ಉದ್ದೇಶ ಇದೆ ಎಂದು ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತರಲು ಉದ್ದೇಶಿಸಿರುವ ಕ್ಷೇತ್ರ ಪುನರ್ವಿಂಗಡಣೆ ಮಸೂದೆಯು ಸಂಪೂರ್ಣ ಅವೈಜ್ಞಾನಿಕವಾಗಿದ್ದು, ಇದರ ಹಿಂದೆ ಕೇವಲ ರಾಜಕೀಯ ಲಾಭ ಪಡೆಯುವ ಉದ್ದೇಶ ಅಡಗಿದೆ ಎಂದು ರಾಜ್ಯ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.
ಕಲಬುರಗಿಯಲ್ಲಿ ಆಯೋಜಿಸಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಮಸೂದೆಯಿಂದ ದಕ್ಷಿಣ ಭಾರತದ ರಾಜ್ಯಗಳ ರಾಜಕೀಯ ಪ್ರಾತಿನಿಧ್ಯಕ್ಕೆ ಗಂಭೀರ ಅನ್ಯಾಯವಾಗುವ ಸಾಧ್ಯತೆಯಿದೆ ಎಂದು ಆತಂಕ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ಮತದಾರರ ಪಟ್ಟಿ ವಿವಾದ, ರಾಜ್ಯದ ಕುಡಿಯುವ ನೀರಿನ ಸಮಸ್ಯೆ, ಗ್ಯಾರಂಟಿ ಯೋಜನೆಗಳು ಹಾಗೂ ಭೀಮಾ ನದಿ ನೀರು ಬಿಡುಗಡೆ ಕುರಿತೂ ಅವರು ವಿಸ್ತೃತವಾಗಿ ಮಾತನಾಡಿದರು.
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸೋಲಿನ ಭಯ ಕಾಡುತ್ತಿದೆ ಎಂದು ಟೀಕಿಸಿದ ಸಚಿವ ಪ್ರಿಯಾಂಕ್ ಖರ್ಗೆ, ಇದೇ ಕಾರಣದಿಂದ ಕ್ಷೇತ್ರಗಳ ಪುನರ್ವಿಂಗಡಣೆ ಮೂಲಕ ಮತ್ತೆ ಅಧಿಕಾರಕ್ಕೆ ಬರಲು ಪ್ರಯತ್ನಿಸುತ್ತಿದ್ದಾರೆ ಎಂದು ದೂರಿದರು. ಕೇಂದ್ರ ಸರ್ಕಾರ ತಮಗೆ ಹೇಗೆ ಬೇಕೋ ಹಾಗೆ ಏಕಪಕ್ಷೀಯವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದು, ಅಧಿಕಾರದಲ್ಲಿಯೇ ಮುಂದುವರಿಯಬೇಕು ಮತ್ತು ಲೂಟಿ ಹೊಡೆಯಬೇಕು ಎಂಬ ಉದ್ದೇಶದಿಂದ ಇಂತಹ ಮಸೂದೆಗಳನ್ನು ತರುತ್ತಿದೆ ಎಂದು ಆರೋಪಿಸಿದರು. ದೇಶದಲ್ಲಿ ಉತ್ತರ ಭಾರತದ ರಾಜ್ಯಗಳಲ್ಲಿ ಮೊದಲಿನಿಂದಲೂ ಲೋಕಸಭಾ ಸ್ಥಾನಗಳ ಸಂಖ್ಯೆ ಹೆಚ್ಚಿದೆ. ಒಂದು ವೇಳೆ ಜನಸಂಖ್ಯೆಯ ಆಧಾರದಲ್ಲಿ ಕ್ಷೇತ್ರಗಳ ಪುನರ್ವಿಂಗಡಣೆ ಮಾಡಿದರೆ ದಕ್ಷಿಣ ಭಾರತದ ರಾಜ್ಯಗಳಿಗೆ ದೊಡ್ಡ ಅನ್ಯಾಯವಾಗಲಿದೆ ಎಂದು ಖರ್ಗೆ ಪ್ರತಿಪಾದಿಸಿದರು.
ದೇಶದಲ್ಲಿ ಜನಸಂಖ್ಯೆ ನಿಯಂತ್ರಣ, ಶಿಕ್ಷಣ, ಆರೋಗ್ಯ ಹಾಗೂ ಆರ್ಥಿಕ ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿರುವ ರಾಜ್ಯಗಳಿಗೆ ಪ್ರತಿಯಾಗಿ ಕಡಿಮೆ ರಾಜಕೀಯ ಪ್ರಾತಿನಿಧ್ಯ ಸಿಗುವಂತಾಗಬಾರದು. ಪ್ರಸ್ತುತ 543 ಲೋಕಸಭಾ ಸ್ಥಾನಗಳಿರುವಾಗಲೇ ಜನರ ಸಮಸ್ಯೆಗಳನ್ನು ಸಮರ್ಪಕವಾಗಿ ಆಲಿಸಲು ಸಾಧ್ಯವಾಗುತ್ತಿಲ್ಲ, ಹೀಗಿರುವಾಗ ಸ್ಥಾನಗಳ ಸಂಖ್ಯೆಯನ್ನು 800 ಅಥವಾ 900ಕ್ಕೆ ಹೆಚ್ಚಿಸಿದರೆ ಏನು ಸಾಧನೆಯಾಗಲಿದೆ ಎಂದು ಪ್ರಶ್ನಿಸಿದರು. ಮಸೂದೆಯ ಸಂಪೂರ್ಣ ವಿವರವನ್ನು ತಾವು ಇನ್ನೂ ಓದಿಲ್ಲವಾದರೂ, ಮೇಲ್ನೋಟಕ್ಕೆ ಹಲವು ಗಂಭೀರ ಆಕ್ಷೇಪಗಳಿವೆ. ಒಂದು ವೇಳೆ ಶೇಕಡಾ 50ರಷ್ಟು ಸ್ಥಾನಗಳನ್ನು ಹೆಚ್ಚಿಸುವ ಪ್ರಸ್ತಾವವಿದ್ದರೆ 543 ಸ್ಥಾನಗಳು ಸುಮಾರು 850ಕ್ಕೆ ಏರಿಕೆಯಾಗಲಿವೆ. ಇದರಿಂದ ಸಾಮಾನ್ಯ ಜನರಿಗೆ ಏನು ಪ್ರಯೋಜನವಾಗಲಿದೆ ಎಂಬುದನ್ನು ಕೇಂದ್ರ ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು.
ಆಯೋಗದ ರಚನೆ, ಸಿಇಸಿ ಪಾತ್ರ ಹಾಗೂ 2011ರ ಜನಗಣತಿ ಕುರಿತು ಪ್ರಶ್ನೆಗಳು
ಕ್ಷೇತ್ರಗಳ ಗಡಿ ನಿರ್ಧಾರದ ಪ್ರಕ್ರಿಯೆಯಲ್ಲಿ ಸರ್ಕಾರದ ಯಾವುದೇ ರೀತಿಯ ಪ್ರಭಾವಕ್ಕೆ ಅವಕಾಶ ಇರಬಾರದು ಎಂದು ಅಭಿಪ್ರಾಯಪಟ್ಟ ಸಚಿವರು, ಭೌಗೋಳಿಕ ಸ್ಥಿತಿ, ಆಡಳಿತಾತ್ಮಕ ಅನುಕೂಲ ಹಾಗೂ ಸಾಮಾಜಿಕ ನ್ಯಾಯದ ಅಂಶಗಳನ್ನು ಪ್ರಮುಖವಾಗಿ ಪರಿಗಣಿಸಬೇಕು ಎಂದರು. ಡಿಲಿಮಿಟೇಶನ್ ಆಯೋಗದ ರಚನೆ, ಸದಸ್ಯರಿಗೆ ನೀಡಿರುವ ಅಧಿಕಾರ ಹಾಗೂ ಮತದಾನದ ಹಕ್ಕುಗಳ ಕುರಿತು ಸಂಪೂರ್ಣ ಸ್ಪಷ್ಟತೆ ಇರಬೇಕು. ಮುಖ್ಯ ಚುನಾವಣಾ ಆಯುಕ್ತರಿಗೆ ಆಯೋಗದಲ್ಲಿ ಮತದಾನದ ಹಕ್ಕು ನೀಡುವ ಪ್ರಸ್ತಾಪದ ಬಗ್ಗೆಯೂ ಪ್ರಶ್ನೆಗಳಿವೆ. ಚುನಾವಣಾ ಆಯೋಗದ ಮುಖ್ಯಸ್ಥರ ಆಯ್ಕೆ ಪ್ರಕ್ರಿಯೆಯಲ್ಲಿಯೇ ಬದಲಾವಣೆ ಮಾಡಿರುವ ಸಂದರ್ಭದಲ್ಲಿ, ಅದೇ ಸಂಸ್ಥೆಯ ಮುಖ್ಯಸ್ಥರಿಗೆ ಕ್ಷೇತ್ರ ಪುನರ್ವಿಂಗಡಣೆಯಲ್ಲಿ ನಿರ್ಣಾಯಕ ಪಾತ್ರ ನೀಡುವುದು ಎಷ್ಟು ಸೂಕ್ತ ಎಂದು ಪ್ರಶ್ನಿಸಿದರು.
ಅಲ್ಲದೆ, 2011ರ ಜನಗಣತಿಯ ಆಧಾರದಲ್ಲಿ ಕ್ಷೇತ್ರಗಳ ಪುನರ್ವಿಂಗಡಣೆ ಮಾಡಲು ಕೇಂದ್ರ ಸರ್ಕಾರ ಈಗ ಇಷ್ಟೊಂದು ಆತುರ ತೋರುತ್ತಿರುವುದೇಕೆ ಎಂದು ಪ್ರಶ್ನಿಸಿದ ಅವರು, ಮೀಸಲಾತಿ ಸೇರಿದಂತೆ ಯಾವ ಮಾನದಂಡಗಳನ್ನು ಅನುಸರಿಸಲಾಗುತ್ತದೆ ಎಂಬುದನ್ನು ತಿಳಿಸಬೇಕು. ವಿಶೇಷವಾಗಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಹಾಗೂ ಮಹಿಳೆಯರ ರಾಜಕೀಯ ಪ್ರಾತಿನಿಧ್ಯವನ್ನು ಯಾವ ಆಧಾರದ ಮೇಲೆ ನಿಗದಿಪಡಿಸಲಾಗುತ್ತದೆ ಎಂಬುದರ ಬಗ್ಗೆ ಸ್ಪಷ್ಟತೆ ಅಗತ್ಯವಿದೆ. ದಕ್ಷಿಣ ಭಾರತದ ರಾಜ್ಯಗಳ ಹಿತಾಸಕ್ತಿಗೆ ಧಕ್ಕೆಯಾಗುವ ಯಾವುದೇ ಕ್ರಮದ ವಿರುದ್ಧ ಎಲ್ಲ ರಾಜ್ಯಗಳು ಒಗ್ಗಟ್ಟಿನಿಂದ ಧ್ವನಿ ಎತ್ತಬೇಕು ಹಾಗೂ ರಾಜ್ಯದ ಹಿತಾಸಕ್ತಿಯ ಪ್ರಶ್ನೆ ಬಂದಾಗ ಪಕ್ಷಭೇದ ಮರೆತು ಒಟ್ಟಾಗಿ ನಿಲ್ಲುವ ಅಗತ್ಯವಿದೆ ಎಂದು ಕರೆ ನೀಡಿದರು.
ರಾಜನಾಥ್ ಸಿಂಗ್ಗೆ ನೇರ ಪ್ರಶ್ನೆ
ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಈಗಾಗಲೇ ಹಲವು ವಿವಾದಗಳು ಉಂಟಾಗಿರುವುದನ್ನು ಪ್ರಸ್ತಾಪಿಸಿದ ಖರ್ಗೆ, ಆಳಂದ ಮತ್ತು ಚಿತ್ತಾಪುರ ವಿಧಾನಸಭಾ ಕ್ಷೇತ್ರಗಳಲ್ಲಿ ಎಸ್ಐಆರ್ ಪ್ರಕ್ರಿಯೆಗೆ ಸಂಬಂಧಿಸಿದಂತೆ ದೂರುಗಳು ದಾಖಲಾಗಿವೆ ಎಂದರು. ಆಳಂದದಲ್ಲಿ ನಡೆದ ಮತಗಳ ಅಳಿಸುವಿಕೆ ಪ್ರಕರಣದ ಕುರಿತು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮಾತನಾಡಬೇಕು ಎಂದು ಒತ್ತಾಯಿಸಿದ ಸಚಿವರು, ಅರಾಜಕತೆ ಸೃಷ್ಟಿಸಿ ಅಧಿಕಾರಕ್ಕೆ ಬರುತ್ತಾರೆ ಎಂದು ಆರೋಪಿಸುವವರು, ತಮ್ಮದೇ ಶಾಸಕರ ವ್ಯಾಪ್ತಿಯಲ್ಲಿ ನಡೆದಿರುವ 'ವೋಟ್ ಚೋರಿ'ಗೆ ಸಂಬಂಧಿಸಿದ ಗಂಭೀರ ಆರೋಪಗಳ ಬಗ್ಗೆ ಏಕೆ ಮೌನವಾಗಿದ್ದಾರೆ ಎಂದು ತರಾಟೆಗೆ ತೆಗೆದುಕೊಂಡರು.
ಕುಡಿಯುವ ನೀರಿನ ಸಮಸ್ಯೆ ನಿರ್ವಹಣೆ
ರಾಜ್ಯದಲ್ಲಿ ಎದುರಾಗಿರುವ ಕುಡಿಯುವ ನೀರಿನ ಸಮಸ್ಯೆ ಕುರಿತು ವಿವರಿಸಿದ ಸಚಿವರು, ಗ್ರಾಮ ಪಂಚಾಯಿತಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸದಿರುವ ಕಡೆಗಳಲ್ಲಿಯೂ ಸರ್ಕಾರ ಅಗತ್ಯ ಸಹಕಾರ ನೀಡುತ್ತಿದೆ. ಆದರೆ, ಕೆಲವು ಕಡೆ ಪ್ರಕೃತಿಯೇ ನೀರಿನ ಲಭ್ಯತೆಗೆ ಅಡ್ಡಿಯಾಗಿರುವಾಗ ಸರ್ಕಾರದಿಂದಲೂ ಎಲ್ಲವನ್ನೂ ಮಾಡಲು ಸಾಧ್ಯವಾಗುವುದಿಲ್ಲ. ಮಂಗಳೂರು ಮತ್ತು ಉಡುಪಿಯಂತಹ ಕರಾವಳಿ ಪ್ರದೇಶಗಳಲ್ಲಿಯೂ ಹಣ ನೀಡಿದರೂ ನೀರು ಸಿಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು. ನೀರಿನ ಸಮಸ್ಯೆ ಪರಿಹಾರಕ್ಕಾಗಿ ಸರ್ಕಾರವು ಈಗಾಗಲೇ ಟಾಸ್ಕ್ಫೋರ್ಸ್ ರಚಿಸಿದ್ದು, ಅಗತ್ಯವಿದ್ದರೆ ಹೆಚ್ಚಿನ ಅನುದಾನ ನೀಡಲು ಸಿದ್ಧವಿದೆ. ಶಾಸಕರಿಗೆ ತಮ್ಮ ಕ್ಷೇತ್ರದ ಪರಿಸ್ಥಿತಿಗೆ ಅನುಗುಣವಾಗಿ ಕ್ರಮ ಕೈಗೊಳ್ಳಲು ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ. ನೀರಿನ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳಲ್ಲಿ ಬೋರ್ವೆಲ್ ಕೊರೆದರೂ ನೀರು ಸಿಗದ ಉದಾಹರಣೆಗಳಿವೆ. ತಮ್ಮದೇ ಕ್ಷೇತ್ರದ ರಾಜವಾಳ ಗ್ರಾಮದಲ್ಲಿ ಕಳೆದ ಹತ್ತು ವರ್ಷಗಳಿಂದ ಪ್ರಾಮಾಣಿಕ ಪ್ರಯತ್ನ ನಡೆಸಿದರೂ ನೀರಿನ ಸಮಸ್ಯೆ ಸಂಪೂರ್ಣ ಬಗೆಹರಿದಿಲ್ಲ; ಪ್ರಕೃತಿಯ ವಿರುದ್ಧ ಏನೂ ಮಾಡಲು ಸಾಧ್ಯವಿಲ್ಲ. ಇದೇ ವೇಳೆ, ಖಾಸಗಿ ಟ್ಯಾಂಕರ್ಗಳ ಮೂಲಕ ನೀರು ಪೂರೈಸುವ ವ್ಯವಸ್ಥೆಯ ಮೇಲೆಯೂ ಸೂಕ್ತ ನಿಯಂತ್ರಣ ತರುವುದು ಅಗತ್ಯವಿದೆ ಎಂದು ಹೇಳಿದರು.
ಬಿಜೆಪಿಗೆ ತಿರುಗೇಟು
ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಜಾರಿಯಾಗುವುದಿಲ್ಲ ಎಂದು ಬಿಜೆಪಿ ನಾಯಕರು ಆರಂಭದಲ್ಲಿ ಟೀಕಿಸಿದ್ದರು, ಆದರೆ ಸರ್ಕಾರ ಎಲ್ಲ ಐದು ಗ್ಯಾರಂಟಿಗಳನ್ನೂ ಯಶಸ್ವಿಯಾಗಿ ಜಾರಿಗೊಳಿಸಿದೆ ಎಂದು ಖರ್ಗೆ ತಿರುಗೇಟು ನೀಡಿದರು. ಎನ್ಡಿಎ ನಾಯಕರು ಸುಳ್ಳು ಹೇಳುವುದರಲ್ಲಿ ನಿಪುಣರು ಎಂದು ಟೀಕಿಸಿದ ಅವರು, ವಿದೇಶಕ್ಕೆ ತೆರಳಿರುವ ವಿಜಯ್ ಮಲ್ಯ ಮತ್ತು ನೀರವ್ ಮೋದಿ ಅವರನ್ನು ವಾಪಸ್ ಕರೆತರುವ ವಿಚಾರ ಹಾಗೂ ದೇಶದಲ್ಲಿನ ಬೆಲೆ ಏರಿಕೆ ಸೇರಿದಂತೆ ಹಲವು ಪ್ರಶ್ನೆಗಳಿಗೆ ಕೇಂದ್ರ ಸರ್ಕಾರ ಉತ್ತರ ನೀಡಬೇಕು ಎಂದರು. ಬಿಜೆಪಿಯವರು ತಮ್ಮ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬುದನ್ನು ಮೊದಲು ಸ್ಪಷ್ಟಪಡಿಸಲಿ ಎಂದ ಖರ್ಗೆ, ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ಸಂಬಂಧಿಸಿದಂತೆ ಒಪ್ಪಿಕೊಂಡಿರುವಂತೆ ಕಾಣುತ್ತಿದೆ ಎಂದು ವ್ಯಂಗ್ಯವಾಡಿದರು. ರಾಜ್ಯ ಸರ್ಕಾರದ ಆಡಳಿತದಲ್ಲಿ 24 ಗಂಟೆಯೂ ಕೆಲಸ ನಡೆಯುತ್ತಿದೆ ಎಂದು ಪ್ರತಿಪಾದಿಸಿದರು.

