Public Allowed to Visit Inside Vidhana Soudha
x

ವಿಧಾನಸೌಧವನ್ನು ಬಾಂಬ್ ಸ್ಫೋಟದಿಂದ ಧ್ವಂಸಗೊಳಿಸಿದಂತೆ ತೋರಿಸುವ ಎಐ ವಿಡಿಯೋ ಇನ್‌ಸ್ಟಾಗ್ರಾಮ್‌ನಲ್ಲಿ ವೈರಲ್ ಆಗಿದೆ.

ವಿಧಾನಸೌಧ ಸ್ಫೋಟದ ಎಐ ವಿಡಿಯೋ ವೈರಲ್: ಕಿಡಿಗೇಡಿಯ ವಿರುದ್ಧ ಕ್ರಮಕ್ಕೆ ಆಗ್ರಹ

ವಿಧಾನಸೌಧದಂತಹ ಮಹತ್ವದ ಕಟ್ಟಡವನ್ನು ಗುರಿಯಾಗಿಸಿಕೊಂಡು ಸ್ಫೋಟದ ನಕಲಿ ದೃಶ್ಯಗಳನ್ನು ಸೃಷ್ಟಿಸಿ ಹಂಚಿಕೊಂಡಿರುವ ವ್ಯಕ್ತಿಯನ್ನು ಪತ್ತೆಹಚ್ಚಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.


Click the Play button to hear this message in audio format

ಬೆಂಗಳೂರಿನ ವಿಧಾನಸೌಧವನ್ನು ಬಾಂಬ್ ಸ್ಫೋಟದಿಂದ ಧ್ವಂಸಗೊಳಿಸಿದಂತೆ ಚಿತ್ರಿಸುವ ಕೃತಕ ಬುದ್ಧಿಮತ್ತೆ (AI) ಮೂಲಕ ಸಿದ್ಧಪಡಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋ ಸಾರ್ವಜನಿಕ ವಲಯದಲ್ಲಿ ಆತಂಕ ಮತ್ತು ಆಕ್ರೋಶಕ್ಕೆ ಕಾರಣವಾಗಿದ್ದು, ಇದನ್ನು ಹಂಚಿಕೊಂಡ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ನೆಟ್ಟಿಗರು ಆಗ್ರಹಿಸಿದ್ದಾರೆ.

ಸಾಮಾಜಿಕ ಜಾಲತಾಣವಾದ ಇನ್‌ಸ್ಟಾಗ್ರಾಮ್‌ನಲ್ಲಿ ಅಪ್‌ಲೋಡ್ ಮಾಡಲಾದ ವಿಡಿಯೋದಲ್ಲಿ ಕರ್ನಾಟಕದ ಆಡಳಿತ ಕೇಂದ್ರವಾದ ವಿಧಾನಸೌಧದಲ್ಲಿ ಬಾಂಬ್ ಸ್ಫೋಟ ಸಂಭವಿಸಿದಂತೆ ದೃಶ್ಯಗಳನ್ನು ಸೃಷ್ಟಿಸಲಾಗಿದೆ. ವಿಧಾನಸೌಧದ ಮುಂಭಾಗದಲ್ಲಿ ಚಿತ್ರೀಕರಿಸಿದ ದೃಶ್ಯಗಳಿಗೆ ಎಐ ತಂತ್ರಜ್ಞಾನದ ಮೂಲಕ ಮಾರ್ಪಾಡು ಮಾಡಿ, ಕಟ್ಟಡ ಸ್ಫೋಟಗೊಂಡಿರುವ ರೀತಿಯಲ್ಲಿ ತೋರಿಸಲಾಗಿದೆ.

ವರದಿಗಳ ಪ್ರಕಾರ, 'Jnx king Hg' ಎಂಬ ಹೆಸರಿನ ಇನ್‌ಸ್ಟಾಗ್ರಾಮ್ ಖಾತೆಯಿಂದ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ವಿಡಿಯೋ ಪ್ರಕಟಿಸಿದ ವ್ಯಕ್ತಿ ವಿಧಾನಸೌಧವನ್ನು ಬಾಂಬ್‌ನಿಂದ ಸ್ಫೋಟಿಸಿರುವುದಾಗಿ ಹೇಳಿಕೊಳ್ಳುವ ಬರಹವನ್ನೂ ಸೇರಿಸಿದ್ದಾನೆ ಎನ್ನಲಾಗಿದೆ. ಆದರೆ, ವಿಡಿಯೋದಲ್ಲಿರುವ ಸ್ಫೋಟದ ದೃಶ್ಯಗಳು ನೈಜ ಘಟನೆಯಲ್ಲ; ಎಐ ಬಳಸಿ ಸೃಷ್ಟಿಸಲಾದ ದೃಶ್ಯಗಳಾಗಿವೆ.

ದಸರಾ ಹಬ್ಬದ ಸಂಭ್ರಮದ ನಡುವೆ ಇಂತಹ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವುದು ಚರ್ಚೆಗೆ ಗ್ರಾಸವಾಗಿದೆ. ವಿಡಿಯೋವನ್ನು ನೋಡಿದ ಅನೇಕರು ಸಾಮಾಜಿಕ ಜಾಲತಾಣಗಳಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದು, ಇಂತಹ ಕೃತ್ಯಗಳು ಸಾರ್ವಜನಿಕರಲ್ಲಿ ಅನಗತ್ಯ ಭೀತಿ ಮೂಡಿಸಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರು ಪೊಲೀಸರಿಗೆ ಕ್ರಮ ಕೈಗೊಳ್ಳುವಂತೆ ಒತ್ತಾಯ

ವಿಧಾನಸೌಧದಂತಹ ಮಹತ್ವದ ಕಟ್ಟಡವನ್ನು ಗುರಿಯಾಗಿಸಿಕೊಂಡು ಸ್ಫೋಟದ ನಕಲಿ ದೃಶ್ಯಗಳನ್ನು ಸೃಷ್ಟಿಸಿ ಹಂಚಿಕೊಂಡಿರುವ ವ್ಯಕ್ತಿಯನ್ನು ಪತ್ತೆಹಚ್ಚಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋ ಹಂಚಿಕೊಂಡ ಖಾತೆಯನ್ನು ಪರಿಶೀಲಿಸಿ, ಕೃತ್ಯದ ಹಿಂದಿರುವ ವ್ಯಕ್ತಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಬೆಂಗಳೂರು ಪೊಲೀಸರನ್ನು ಟ್ಯಾಗ್ ಮಾಡಿ ಮನವಿ ಮಾಡಿದ್ದಾರೆ.

Read More
Next Story