ಶಹಾಪುರದಲ್ಲಿ ವಿದ್ಯುತ್ ಕಂಬಕ್ಕೆ ಬೊಲೆರೊ ಡಿಕ್ಕಿ, ಮೂವರು ಮಹಿಳಾ ಕೂಲಿ ಕಾರ್ಮಿಕರ ಸಾವು
x
ಅಪಘಾತಕ್ಕೆ ಒಳಗಾದ ಮ್ಯಾಕ್ಸಿಕ್ಯಾಬ್​.

ಶಹಾಪುರದಲ್ಲಿ ವಿದ್ಯುತ್ ಕಂಬಕ್ಕೆ ಬೊಲೆರೊ ಡಿಕ್ಕಿ, ಮೂವರು ಮಹಿಳಾ ಕೂಲಿ ಕಾರ್ಮಿಕರ ಸಾವು

ಹತ್ತಿ ಹೊಲದಲ್ಲಿ ಕೂಲಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಮಹಿಳೆಯರಿದ್ದ ಬೊಲೆರೊ ನಿಯಂತ್ರಣ ತಪ್ಪಿ ಡಿಕ್ಕಿ ಹೊಡಿದೆ. ಚಾಲಕನನ್ನು ವಶಕ್ಕೆ ಪಡೆದುಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


Click the Play button to hear this message in audio format

ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನ ಮಡ್ನಾಳ ಗ್ರಾಮದ ಸಮೀಪ ಭಾನುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮಹಿಳಾ ಕೂಲಿ ಕಾರ್ಮಿಕರು ಮೃತಪಟ್ಟಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹತ್ತಿ ಹೊಲದಲ್ಲಿ ಕೂಲಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವೇಳೆ ಬೊಲೆರೊ ಮ್ಯಾಕ್ಸ್ ಪಿಕಪ್ ವಾಹನವು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

ಮೃತರನ್ನು ಶಹಾಪುರ ತಾಲ್ಲೂಕಿನ ಹಳಿಸಗರ ಬಡಾವಣೆ ನಿವಾಸಿಗಳಾದ ಭಾಗ್ಯಶ್ರೀ (35), ಸತ್ಯಮ್ಮ (30) ಹಾಗೂ ಹೊನ್ನ ನಿಂಗಮ್ಮ (18) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಾಯಗೊಂಡ ಐವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಸಣ್ಣಪುಟ್ಟ ಗಾಯಗೊಂಡ ಕೆಲವರಿಗೆ ಶಹಾಪುರ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಹತ್ತಿ ಹೊಲದಿಂದ ವಾಪಸ್ ಆಗುತ್ತಿದ್ದ ಕೂಲಿ ಕಾರ್ಮಿಕರು

ಮಡ್ನಾಳ ಹಾಗೂ ಸುತ್ತಮುತ್ತಲಿನ ಪ್ರದೇಶದ ಹತ್ತಿ ಹೊಲಗಳಲ್ಲಿ ಕಳೆ ತೆಗೆಯುವ ಕೆಲಸಕ್ಕೆ 20ಕ್ಕೂ ಹೆಚ್ಚು ಮಹಿಳಾ ಕೂಲಿ ಕಾರ್ಮಿಕರು ತೆರಳಿದ್ದರು. ಕೆಲಸ ಮುಗಿಸಿದ ಬಳಿಕ ಎಲ್ಲರೂ ಬೊಲೆರೊ ಮ್ಯಾಕ್ಸ್ ಪಿಕಪ್ ವಾಹನದಲ್ಲಿ ವಾಪಸ್ ಆಗುತ್ತಿದ್ದರು ಎನ್ನಲಾಗಿದೆ.

ಮಡ್ನಾಳ ಗ್ರಾಮದ ಸಮೀಪ ವಾಹನ ಚಲಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಚಾಲಕ ಅತಿವೇಗವಾಗಿ ವಾಹನ ಚಲಾಯಿಸುತ್ತಿದ್ದ ಎಂಬ ಆರೋಪ ಕೇಳಿಬಂದಿದ್ದು, ನಿಯಂತ್ರಣ ತಪ್ಪಿದ ವಾಹನ ರಸ್ತೆ ಬದಿಯಲ್ಲಿ ಹೊಸದಾಗಿ ಅಳವಡಿಸಲಾಗುತ್ತಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ.

ಡಿಕ್ಕಿಯ ರಭಸಕ್ಕೆ ಮೂವರು ಸ್ಥಳದಲ್ಲೇ ಸಾವು

ವಿದ್ಯುತ್ ಕಂಬಕ್ಕೆ ವಾಹನ ಡಿಕ್ಕಿ ಹೊಡೆದ ರಭಸಕ್ಕೆ ಬೊಲೆರೊ ವಾಹನದ ಮುಂಭಾಗ ತೀವ್ರವಾಗಿ ಜಖಂಗೊಂಡಿದೆ. ವಾಹನದಲ್ಲಿದ್ದ ಕೂಲಿ ಕಾರ್ಮಿಕರು ಗಾಯಗೊಂಡಿದ್ದು, ಮೂವರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಲಾಗಿದೆ. ಐವರ ಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಅವರನ್ನು ಕಲಬುರಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಮುಂದುವರಿಸಲಾಗಿದೆ.

ಚಾಲಕನ ವಶಕ್ಕೆ ಪಡೆದು ತನಿಖೆ

ಅಪಘಾತ ಸಂಭವಿಸಿದ ಬೊಲೆರೊ ವಾಹನದ ಚಾಲಕ ಶೇಖಪ್ಪ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಪಘಾತಕ್ಕೆ ಅತಿವೇಗ, ನಿರ್ಲಕ್ಷ್ಯದ ಚಾಲನೆ ಅಥವಾ ಬೇರೆ ಯಾವುದೇ ಕಾರಣ ಕಾರಣವಾಗಿದೆಯೇ ಎಂಬ ಕುರಿತು ತನಿಖೆ ನಡೆಸಲಾಗುತ್ತಿದೆ. ಘಟನಾ ಸ್ಥಳಕ್ಕೆ ಭೀಮರಾಯನಗುಡಿ ಪೊಲೀಸ್ ಠಾಣೆಯ ಪಿಎಸ್‌ಐ ದೇವಿಂದ್ರರೆಡ್ಡಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Read More
Next Story