ದೆಹಲಿಯಲ್ಲಿ ರಾಹುಲ್, ಖರ್ಗೆ ಭೇಟಿಯಾದ ಸಿದ್ದರಾಮಯ್ಯ: ಹೈಕಮಾಂಡ್‌ಗೆ ಬೇಡಿಕೆ ಪಟ್ಟಿ ಸಲ್ಲಿಕೆ
x

ರಾಹುಲ್‌ ಗಾಂಧಿ ಅವರನ್ನು ಭೇಟಿ ಮಾಡಿದ ಸಿದ್ದರಾಮಯ್ಯ 

ದೆಹಲಿಯಲ್ಲಿ ರಾಹುಲ್, ಖರ್ಗೆ ಭೇಟಿಯಾದ ಸಿದ್ದರಾಮಯ್ಯ: ಹೈಕಮಾಂಡ್‌ಗೆ ಬೇಡಿಕೆ ಪಟ್ಟಿ ಸಲ್ಲಿಕೆ

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಮರುದಿನವೇ ದೆಹಲಿಗೆ ತೆರಳಿದ ಸಿದ್ದರಾಮಯ್ಯ, ಪುತ್ರ ಯತೀಂದ್ರ ಹಾಗೂ ಆಪ್ತರಿಗೆ ಪ್ರಮುಖ ಸಚಿವ ಸ್ಥಾನ ನೀಡುವಂತೆ ಹೈಕಮಾಂಡ್‌ಗೆ ಬೇಡಿಕೆ ಪಟ್ಟಿ ಸಲ್ಲಿಸಿದ್ದಾರೆ.


Click the Play button to hear this message in audio format

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಮರುದಿನವೇ ಸಿದ್ದರಾಮಯ್ಯ ಅವರು ಶುಕ್ರವಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ.

ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಸಚಿವ ಸಂಪುಟದಲ್ಲಿ ತಮ್ಮ ಪುತ್ರ ಯತೀಂದ್ರ ಸಿದ್ದರಾಮಯ್ಯ ಹಾಗೂ ತಮ್ಮ ನಿಷ್ಠಾವಂತ ಶಾಸಕರಿಗೆ ಪ್ರಮುಖ ಸಚಿವ ಸ್ಥಾನಗಳನ್ನು ನೀಡಬೇಕು ಎಂಬ ಬೇಡಿಕೆಗಳ ಪಟ್ಟಿಯನ್ನು ಹೈಕಮಾಂಡ್ ಮುಂದೆ ಇಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಸದಸ್ಯರ ನೇಮಕಾತಿ ಕುರಿತಾದ ಹೆಸರುಗಳ ಪಟ್ಟಿಯ ಜೊತೆಗೆ ಸಚಿವ ಸಂಪುಟದಲ್ಲಿ ತಮಗೆ ಬೇಕಾದ ಖಾತೆಗಳ ಆದ್ಯತೆಗಳನ್ನು ಸಿದ್ದರಾಮಯ್ಯ ಹೈಕಮಾಂಡ್ ಕೈಗಿಟ್ಟಿದ್ದಾರೆ. ತಮ್ಮ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರಿಗೆ ವೈದ್ಯಕೀಯ ಶಿಕ್ಷಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ, ಅಥವಾ ಕೈಗಾರಿಕೆ ಮತ್ತು ಹಿಂದೆ ಡಿ.ಕೆ. ಶಿವಕುಮಾರ್ ಅವರ ಬಳಿ ಇದ್ದ ಜಲಸಂಪನ್ಮೂಲ ಇಲಾಖೆಯಂತಹ ಪ್ರಮುಖ ಖಾತೆಗಳನ್ನು ನೀಡುವಂತೆ ಅವರು ಒತ್ತಾಯ ಹೇರಿದ್ದಾರೆ ಎನ್ನಲಾಗಿದೆ.

ರಾಜ್ಯದಲ್ಲಿ ಅಧಿಕಾರ ಹಸ್ತಾಂತರ ಪ್ರಕ್ರಿಯೆ ಪೂರ್ಣಗೊಂಡ ಬೆನ್ನಲ್ಲೇ ಹೈಕಮಾಂಡ್ ಸಿದ್ದರಾಮಯ್ಯ ಅವರಿಗೆ ರಾಜ್ಯಸಭಾ ಸ್ಥಾನದ ಆಫರ್ ನೀಡಿತ್ತು. ಆದರೆ ಅದನ್ನು ನಿರಾಕರಿಸಿರುವ ಅವರು, ತಮಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿಯಿಲ್ಲ. ಕರ್ನಾಟಕ ರಾಜಕೀಯದಲ್ಲೇ ಮುಂದುವರಿಯುವುದಾಗಿ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿ ಅಹಿಂದ ವರ್ಗದ ಪ್ರಬಲ ನಾಯಕರಾಗಿರುವ ಸಿದ್ದರಾಮಯ್ಯ, ತಮ್ಮ ರಾಜಕೀಯ ಪರಂಪರೆ ಉಳಿಸಿಕೊಳ್ಳಲು ಮತ್ತು ತಮ್ಮ ಆಪ್ತರ ಹಿತಾಸಕ್ತಿ ಕಾಯಲು ದೆಹಲಿ ಮಟ್ಟದಲ್ಲಿ ಕಸರತ್ತು ನಡೆಸುತ್ತಿರುವುದು ಸ್ಪಷ್ಟವಾಗಿದೆ.

Read More
Next Story