x

ಸ್ಟಿಂಗ್ ಆಪರೇಷನ್‌ಗೆ ಸ್ಫೋಟಕ ಟ್ವಿಸ್ಟ್‌- ಬಾಲ ನ್ಯಾಯಸಮಿತಿಗೆ ದೂರು ನೀಡಿದ ನೈಜ ಹೋರಾಟಗಾರರ ವೇದಿಕೆ

ಸ್ಟಿಂಗ್ ಆಪರೇಷನ್‌ ಬಗ್ಗೆ ಸಾಮಾಜಿಕ ಹೋರಾಟಗಾರ ಎಚ್.ಎಂ.‌ವೆಂಕಟೇಶ್ ಅವರು ಬಾಲ ನ್ಯಾಯ ಸಮಿತಿಗೆ ದೂರುನೀಡಿದ್ದು ಬಾಲ ನ್ಯಾಯ ಸಮಿತಿಯು ಮುಂದಿನ ಅಗತ್ಯ ಕ್ರಮಕ್ಕಾಗಿ ರಾಜ್ಯ ಗೃಹ ಇಲಾಖೆಗೆ ರವಾನಿಸಿದೆ.


ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಬಂಧಿಸಿದ ಸ್ಟಿಂಗ್ ಆಪರೇಷನ್ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಈಗಾಗಲೇ ಸಿದ್ದರಾಮಯ್ಯ ಅವರ ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ ನಡೆಸುತ್ತಿರುವ ಬೆನ್ನಲ್ಲೇ, ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರ ಎಚ್.ಎಂ. ವೆಂಕಟೇಶ್ ಅವರು ಕರ್ನಾಟಕ ಹೈಕೋರ್ಟ್‌ನ ಬಾಲ ನ್ಯಾಯ ಸಮಿತಿಗೆ ದೂರು ನೀಡಿದ್ದಾರೆ.

ಸ್ಟಿಂಗ್ ಆಪರೇಷನ್ ವಿಡಿಯೋದಲ್ಲಿ 14 ವರ್ಷದ ಬಾಲಕಿಯ ಪ್ರಸ್ತಾಪವಾಗಿರುವ ಹಿನ್ನೆಲೆಯಲ್ಲಿ, ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ವೆಂಕಟೇಶ್ ಸಲ್ಲಿಸಿರುವ ದೂರನ್ನು ಪರಿಶೀಲಿಸಿರುವ ಕರ್ನಾಟಕ ಹೈಕೋರ್ಟ್‌ನ ಬಾಲ ನ್ಯಾಯ ಸಮಿತಿಯು ಮುಂದಿನ ಅಗತ್ಯ ಕ್ರಮಕ್ಕಾಗಿ ರಾಜ್ಯ ಗೃಹ ಇಲಾಖೆಗೆ ರವಾನಿಸಿದೆ. ಈ ಸಂಬಂಧ ಕ್ರಮ ಕೈಗೊಳ್ಳುವ ಕುರಿತು ಗೃಹ ಇಲಾಖೆಯಿಂದ ಮಾಹಿತಿ ಕೋರಲಾಗಿದೆ ಎಂದು ವೆಂಕಟೇಶ್ ತಿಳಿಸಿದ್ದಾರೆ.

'ದ ಫೆಡರಲ್ ಕರ್ನಾಟಕ'ದೊಂದಿಗೆ ಮಾತನಾಡಿದ ಎಚ್.ಎಂ. ವೆಂಕಟೇಶ್, ಈ ಪ್ರಕರಣದಲ್ಲಿ ರಾಜಕೀಯ ನಾಯಕರ ಹೆಸರು ಕೇಳಿಬರುತ್ತಿರುವುದರಿಂದ ಪೊಲೀಸ್ ತನಿಖೆಯ ಮೇಲೆ ಪ್ರಭಾವ ಬೀರುವ ಸಾಧ್ಯತೆಯಿದೆ. ಹೀಗಾಗಿ ಪೊಲೀಸರ ತನಿಖೆಯಿಂದ ನ್ಯಾಯ ಸಿಗುವ ಭರವಸೆ ಇಲ್ಲ. ನ್ಯಾಯಾಲಯದ ಸುಪರ್ದಿಯಲ್ಲಿ ತನಿಖೆ ನಡೆಯಬೇಕು ಎಂದು ಮನವಿ ಸಲ್ಲಿಸಿರುವುದಾಗಿ ಹೇಳಿದ್ದಾರೆ.

ಇದೇ ವೇಳೆ, ತನಿಖೆ ನಡೆಯುತ್ತಿರುವಾಗಲೇ ನಗರ ಪೊಲೀಸ್ ಆಯುಕ್ತರು ಪ್ರಕರಣದ ತನಿಖೆಯ ವಿವರಗಳನ್ನು ಬಹಿರಂಗಪಡಿಸುತ್ತಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ಪ್ರಶ್ನಿಸಿದ್ದಾರೆ. ಸಾಮಾನ್ಯವಾಗಿ ಬೇರೆ ಪ್ರಕರಣಗಳ ತನಿಖೆಯ ವಿವರಗಳನ್ನು ಪೊಲೀಸರು ಬಹಿರಂಗಪಡಿಸುವುದಿಲ್ಲ. ಆದರೆ ಈ ಸ್ಟಿಂಗ್ ಆಪರೇಷನ್ ಪ್ರಕರಣದ ಬಗ್ಗೆ ಮಾತ್ರ ಪೊಲೀಸರು ಮಾತನಾಡುತ್ತಿರುವುದೇಕೆ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇನ್ನು ಸ್ಟಿಂಗ್ ಆಪರೇಷನ್ ವಿಡಿಯೋದಲ್ಲಿ 14 ವರ್ಷದ ಬಾಲಕಿಯ ಉಲ್ಲೇಖವಿರುವುದರಿಂದ, ಆಕೆಯ ವಿಚಾರದಲ್ಲಿ ಏನಾದರೂ ಅಕ್ರಮ ನಡೆದಿದೆಯೇ ಎಂಬುದರ ಬಗ್ಗೆಯೂ ಸಮಗ್ರ ತನಿಖೆಯಾಗಬೇಕು ಎಂಬುದು ಅವರ ಒತ್ತಾಯವಾಗಿದೆ. ಸದ್ಯ ತಮ್ಮ ದೂರಿನ ಹಿನ್ನೆಲೆಯಲ್ಲಿ ಗೃಹ ಇಲಾಖೆ ಬಾಲ ನ್ಯಾಯ ಸಮಿತಿಗೆ ಯಾವ ರೀತಿಯ ವರದಿ ಸಲ್ಲಿಸಲಿದೆ ಎಂಬುದನ್ನು ಕಾಯುತ್ತಿರುವುದಾಗಿ ವೆಂಕಟೇಶ್ ತಿಳಿಸಿದ್ದಾರೆ. ಇಲಾಖೆಯ ಪ್ರತಿಕ್ರಿಯೆ ಬಂದ ಬಳಿಕ ಮುಂದಿನ ಕಾನೂನು ಕ್ರಮಗಳ ಬಗ್ಗೆ ನಿರ್ಧರಿಸುವುದಾಗಿ ಹೇಳಿದ್ದಾರೆ.

ಒಟ್ಟಿನಲ್ಲಿ, ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣದ ಪೊಲೀಸ್ ತನಿಖೆಯ ನಡುವೆಯೇ ಬಾಲ ನ್ಯಾಯ ಸಮಿತಿಗೆ ದೂರು ಸಲ್ಲಿಕೆಯಾಗಿರುವುದು ಪ್ರಕರಣಕ್ಕೆ ಮತ್ತೊಂದು ಆಯಾಮ ನೀಡಿದೆ. ಈ ಬೆಳವಣಿಗೆಯ ಬೆನ್ನಲ್ಲೇ ನ್ಯಾಯಾಂಗದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯಬೇಕೆಂಬ ಆಗ್ರಹವೂ ತೀವ್ರಗೊಂಡಿದೆ.

Read More
Next Story