ಸೌಜನ್ಯಳ ತಾಯಿಗೆ ನ್ಯಾಯ ಕೊಡಿಸುವ ಹೊಣೆ ಸರ್ಕಾರದ್ದು: ಡಿಕೆ ಶಿವಕುಮಾರ್ ವಿರುದ್ಧ ಮಹೇಶ್ ಶೆಟ್ಟಿ ತಿಮರೋಡಿ ಆಕ್ರೋಶ
ಸೌಜನ್ಯ ಪ್ರಕರಣದಲ್ಲಿ 14 ವರ್ಷಗಳಿಂದ ನ್ಯಾಯಕ್ಕಾಗಿ ಹೋರಾಡುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ, ಇದೀಗ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವಿರುದ್ಧವೇ ಪ್ರಶ್ನೆಗಳನ್ನೆತ್ತಿದ್ದಾರೆ. ಎಸ್‌ಐಟಿ ತನಿಖೆಯ ಮೇಲಿನ ನಂಬಿಕೆಗಿಂತ ಮುಖ್ಯಮಂತ್ರಿಗಳ ಮೇಲೆಯೇ ಹೆಚ್ಚು ನಿರೀಕ್ಷೆ ಇದೆ ಎಂದಿರುವ ಅವರು, ಸೌಜನ್ಯಳ ತಾಯಿಯ ಬೆಂಬಲಕ್ಕೆ ಸರ್ಕಾರ ನಿಲ್ಲಬೇಕು ಎಂದು ಆಗ್ರಹಿಸಿದ್ದಾರೆ.
ಸೌಜನ್ಯ ಪ್ರಕರಣದಲ್ಲಿ ನ್ಯಾಯ ಸಿಗುವ ವಿಚಾರವಾಗಿ ವಿಶೇಷ ತನಿಖಾ ತಂಡದ (ಎಸ್‌ಐಟಿ) ತನಿಖೆಯ ಮೇಲಿನ ನಂಬಿಕೆಗಿಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮೇಲೆಯೇ ಹೆಚ್ಚು ನಿರೀಕ್ಷೆ ಇಟ್ಟಿದ್ದೇನೆ ಎಂದು ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಹೇಳಿದ್ದಾರೆ.
ದ ಫೆಡರಲ್ ಕರ್ನಾಟಕಕ್ಕೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಅವರು, 14 ವರ್ಷಗಳಿಂದ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿರುವುದಾಗಿ ಹೇಳಿದ ಅವರು, ಈ ಹಿಂದೆ ಉಪಮುಖ್ಯಮಂತ್ರಿಯಾಗಿದ್ದಾಗ ಧರ್ಮಸ್ಥಳದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಡಿ.ಕೆ. ಶಿವಕುಮಾರ್ ಅವರು, 'ನನ್ನಂತ ಸಾವಿರಾರು ಡಿಕೆಸಿಗಳು ನಿಮ್ಮ ಪರವಾಗಿದ್ದೇವೆ' ಎಂದು ಹೇಳಿದ್ದರು ಎಂದು ನೆನಪಿಸಿದ್ದಾರೆ. ಅಲ್ಲದೆ, ತಮ್ಮನ್ನು ಜೈಲಿಗೆ ಕಳುಹಿಸಿದ್ದಾಗಿ ಶಿವಕುಮಾರ್ ಹೇಳಿರುವ ವಿಡಿಯೋ ಕೂಡ ತಮ್ಮ ಬಳಿ ಇದೆ ಎಂದು ತಿಳಿಸಿದ್ದಾರೆ.
ಈಗ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿರುವುದರಿಂದ ಅವರ ಬಳಿಯೇ ನ್ಯಾಯ ಕೇಳುವುದಾಗಿ ತಿಮರೋಡಿ ಹೇಳಿದ್ದಾರೆ. ಸೌಜನ್ಯಳ ತಾಯಿಯ ಪರವಾಗಿ ಸರ್ಕಾರ ನಿಲ್ಲಬೇಕು. ಕೇವಲ ತನಿಖೆ ನಡೆಸಬೇಡಿ, ತನಿಖೆ ಸರಿಯಿಲ್ಲ ಎಂದು ಹೇಳುವುದಷ್ಟೇ ಅಲ್ಲ; ಪ್ರಕರಣಕ್ಕೆ ಸಂಬಂಧಿಸಿದ ಸರ್ಕಾರಿ ದಾಖಲೆಗಳನ್ನು ಪರಿಶೀಲಿಸಿ, ನ್ಯಾಯಾಲಯದಲ್ಲಿ ಅಗತ್ಯ ಕ್ರಮಗಳನ್ನು ಸರ್ಕಾರವೇ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಸೌಜನ್ಯಳ ತಾಯಿ 14 ವರ್ಷಗಳಿಂದ ನ್ಯಾಯಕ್ಕಾಗಿ ಹೋರಾಡುತ್ತಿದ್ದರೂ ಸರ್ಕಾರ ಅವರ ಬೆಂಬಲಕ್ಕೆ ನಿಲ್ಲುತ್ತಿಲ್ಲ ಏಕೆ ಎಂದು ಪ್ರಶ್ನಿಸಿರುವ ಅವರು, ನ್ಯಾಯಾಲಯದಲ್ಲಿ ಸಂತ್ರಸ್ತರ ಪರವಾಗಿ ನಿಲ್ಲುವ ಬದಲು ಅವರ ವಿರುದ್ಧವೇ ವಾದ ಮಂಡಿಸಲಾಗುತ್ತಿದೆ ಎಂಬ ಆರೋಪವನ್ನೂ ಮಾಡಿದ್ದಾರೆ.
ಮಹಿಳೆಯರಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿರುವುದಾಗಿ ಹೇಳಿಕೊಳ್ಳುವ ಸರ್ಕಾರಕ್ಕೆ ಸೌಜನ್ಯಳ ತಾಯಿಗೆ ನ್ಯಾಯ ಕೊಡಿಸುವ ಜವಾಬ್ದಾರಿಯೂ ಇದೆ. ಅವರಿಗೆ ನ್ಯಾಯದ ಭಾಗ್ಯ ಕಲ್ಪಿಸಲು ಸರ್ಕಾರ ಮುಂದಾಗಬೇಕು ಎಂದು ಮಹೇಶ್ ಶೆಟ್ಟಿ ತಿಮರೋಡಿ ಒತ್ತಾಯಿಸಿದ್ದಾರೆ.

