
ರಾಯಚೂರು ಕೃಷಿ ವಿವಿ ನೇಮಕಾತಿಯಲ್ಲಿ ಗೊಂದಲ: ಕ್ರಮ ಕೈಗೊಳ್ಳಲು ದಲಿತ ಸೇನೆ ಒತ್ತಾಯ
ರಾಯಚೂರು ಕೃಷಿ ವಿವಿಯಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಯಲ್ಲಿ ಗೊಂದಲ ಸೃಷ್ಟಿಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದಲಿತ ಸೇನೆ ಆಗ್ರಹಿಸಿದೆ.
ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾನಿಲಯದಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯು ಸರ್ಕಾರದ ಎಲ್ಲಾ ನಿಯಮಾವಳಿಗಳ ಪ್ರಕಾರ ಅತ್ಯಂತ ಪಾರದರ್ಶಕವಾಗಿ ಪೂರ್ಣಗೊಂಡಿದೆ. ಆದರೂ, ಕೆಲ ಪಟ್ಟಭದ್ರ ಹಿತಾಸಕ್ತಿಗಳು ಉದ್ದೇಶಪೂರ್ವಕವಾಗಿ ಆಧಾರರಹಿತ ಆಕ್ಷೇಪಣೆಗಳನ್ನು ಸಲ್ಲಿಸಿ ಗೊಂದಲ ಸೃಷ್ಟಿಸುತ್ತಿದ್ದು, ಇಂತಹವರ ವಿರುದ್ಧ ವಿಶ್ವವಿದ್ಯಾಲಯ ಹಾಗೂ ಜಿಲ್ಲಾಡಳಿತ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದಲಿತ ಸೇನೆ ಬಲವಾಗಿ ಒತ್ತಾಯಿಸಿದೆ.
ಬೆಂಗಳೂರಲ್ಲಿ ಮಾತನಾಡಿದ ದಲಿತ ಸೇನೆಯ ರಾಜ್ಯ ಸಂಘಟನಾ ಕಾರ್ಯದರ್ಶಿ ಜಾವೀದ್ ಖಾನ್ ಅವರು, ನೇಮಕಾತಿ ಪ್ರಕ್ರಿಯೆಯಲ್ಲಿ ಅನಗತ್ಯ ಹಸ್ತಕ್ಷೇಪ ಮಾಡುತ್ತಿರುವವರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಕೃಷಿ ವಿಜ್ಞಾನ ವಿಶ್ವವಿದ್ಯಾನಿಲಯವು 2023ರ ಅಕ್ಟೋಬರ್ 18ರಂದು ಹೊರಡಿಸಿದ ಅಧಿಕೃತ ಅಧಿಸೂಚನೆಯನ್ವಯ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿತ್ತು. ಅರ್ಜಿ ಸಲ್ಲಿಕೆ, ದಾಖಲಾತಿ ಪರಿಶೀಲನೆ, ಅರ್ಹತಾ ಪಟ್ಟಿ ಹಾಗೂ ಸಂದರ್ಶನ ಸೇರಿದಂತೆ ಪ್ರಕ್ರಿಯೆಯ ಪ್ರತಿಯೊಂದು ಹಂತವನ್ನೂ ಯುಜಿಸಿ ಮತ್ತು ಕೃಷಿ ಇಲಾಖೆಯ ನಿಯಮಗಳ ಪ್ರಕಾರವೇ ಪೂರ್ಣಗೊಳಿಸಲಾಗಿದೆ. ಇದಕ್ಕೆ ರಾಜ್ಯ ಸರ್ಕಾರದ ಆರ್ಥಿಕ ಇಲಾಖೆ ಸೇರಿದಂತೆ ಸಂಬಂಧಪಟ್ಟ ಎಲ್ಲಾ ಸಕ್ಷಮ ಪ್ರಾಧಿಕಾರಗಳಿಂದ ಸೂಕ್ತ ಅನುಮೋದನೆ ಪಡೆಯಲಾಗಿದೆ. ಹೀಗಿರುವಾಗ ಪ್ರಕ್ರಿಯೆಯಲ್ಲಿ ಯಾವುದೇ ಲೋಪವಾಗಿಲ್ಲ ಎಂದು ಸ್ಪಷ್ಟಪಡಿಸಿದರು.
ಅರ್ಹ ಅಭ್ಯರ್ಥಿಗಳಲ್ಲಿ ಆತಂಕ ಮೂಡಿಸುವ ಹುನ್ನಾರ
ಪ್ರಕ್ರಿಯೆ ಮುಕ್ತಾಯದ ಹಂತಕ್ಕೆ ಬಂದಿರುವಾಗ ಕೆಲವರು ಬೇಕೆಂದೇ ಇಲ್ಲಸಲ್ಲದ ದೂರುಗಳನ್ನು ನೀಡುತ್ತಿದ್ದಾರೆ. ಈ ನೇಮಕಾತಿಯಲ್ಲಿ ಯಾವುದೇ ರೀತಿಯ ಅಕ್ರಮ ನಡೆದಿಲ್ಲ. ಆದ್ದರಿಂದ ಯಾವುದೇ ತನಿಖೆ ಅಥವಾ ಮರುಪರಿಶೀಲನೆಯ ಅಗತ್ಯವೇ ಇಲ್ಲ. ಆದರೆ, ಕೆಲವರು ತಮ್ಮ ವೈಯಕ್ತಿಕ ಸ್ವಾರ್ಥ ಅಥವಾ ದುರುದ್ದೇಶದಿಂದ ಪದೇ ಪದೇ ಆಕ್ಷೇಪಣೆಗಳನ್ನು ಸಲ್ಲಿಸುತ್ತಿದ್ದಾರೆ. ಇದರಿಂದಾಗಿ ಹಗಲಿರುಳು ಶ್ರಮಪಟ್ಟು, ಮೆರಿಟ್ ಆಧಾರದ ಮೇಲೆ ಆಯ್ಕೆಯಾಗಲು ಕಾಯುತ್ತಿರುವ ನೂರಾರು ಅರ್ಹ ಅಭ್ಯರ್ಥಿಗಳಲ್ಲಿ ತೀವ್ರ ಆತಂಕ ಮತ್ತು ಅನಿಶ್ಚಿತತೆ ಉಂಟಾಗಿದೆ. ಜತೆಗೆ, ಕಲ್ಯಾಣ ಕರ್ನಾಟಕ ಭಾಗದ ಹೆಮ್ಮೆಯ ಶಿಕ್ಷಣ ಸಂಸ್ಥೆಯಾಗಿರುವ ಕೃಷಿ ವಿವಿಯ ಘನತೆಗೂ ಧಕ್ಕೆ ತರಲಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.
ದಲಿತ ಸೇನೆಯ ಪ್ರಮುಖ ಬೇಡಿಕೆಗಳು
ಯಾವುದೇ ನಿರ್ದಿಷ್ಟ ಸಾಕ್ಷ್ಯಾಧಾರಗಳಿಲ್ಲದೆ, ಕೇವಲ ಪ್ರಕ್ರಿಯೆಗೆ ಅಡ್ಡಿಪಡಿಸುವ ಉದ್ದೇಶದಿಂದ ಸಲ್ಲಿಕೆಯಾಗಿರುವ ಎಲ್ಲಾ ಆಕ್ಷೇಪಣೆಗಳನ್ನು ತಕ್ಷಣವೇ ತಿರಸ್ಕರಿಸಬೇಕು. ವೈಯಕ್ತಿಕ ಹಿತಾಸಕ್ತಿಗಾಗಿ ವಿಶ್ವವಿದ್ಯಾಲಯದ ಆಡಳಿತಕ್ಕೆ ಮುಜುಗರ ತರುತ್ತಿರುವ ವ್ಯಕ್ತಿಗಳ ವಿರುದ್ಧ ಶಿಸ್ತು ಹಾಗೂ ಕಾನೂನು ಕ್ರಮ ಜರುಗಿಸಬೇಕು. ಸರ್ಕಾರದ ಅನುಮೋದನೆ ಪಡೆದು ಪೂರ್ಣಗೊಂಡಿರುವ ಈ ಪ್ರಕ್ರಿಯೆಯನ್ನು ಯಾವುದೇ ಒತ್ತಡಕ್ಕೆ ಮಣಿಯದೆ ಮುಂದುವರಿಸಿ, ಅರ್ಹ ಅಭ್ಯರ್ಥಿಗಳಿಗೆ ಶೀಘ್ರವಾಗಿ ನೇಮಕಾತಿ ಆದೇಶ ನೀಡಬೇಕು ಎಂದು ಆಗ್ರಹಿಸಿದ್ದಾರೆ.

