
ವಿಮ್ಸ್ ಆಡಳಿತ ಮಂಡಳಿ ಈ ಆರೋಪಗಳನ್ನು ಗಂಭೀರವಾಗಿ ಪರಿಗಣಿಸಿ ಸಮಗ್ರ ತನಿಖೆ ನಡೆಸಬೇಕು. ಆರೋಪಗಳು ಸಾಬೀತಾದರೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂಬುದು ರೋಗಿಗಳ ಸಂಬಂಧಿಕರ ಒತ್ತಾಯವಾಗಿದೆ.
ವಿಮ್ಸ್ ಆಸ್ಪತ್ರೆಯಲ್ಲಿ ಉಚಿತ ಔಷಧಿಗೂ ಕಮಿಷನ್ ಕಂಟಕ? ಖಾಸಗಿ ಲ್ಯಾಬ್‌ಗಳತ್ತ ರೋಗಿಗಳು
ಔಷಧಿಗಳ ವಿಚಾರ ಮಾತ್ರವಲ್ಲದೆ ರಕ್ತ ಪರೀಕ್ಷೆ, ಸ್ಕ್ಯಾನಿಂಗ್ ಸೇರಿದಂತೆ ವಿವಿಧ ವೈದ್ಯಕೀಯ ಪರೀಕ್ಷೆಗಳಿಗೂ ರೋಗಿಗಳನ್ನು ಖಾಸಗಿ ಲ್ಯಾಬೋರೇಟರಿಗಳಿಗೆ ಕಳುಹಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.
ಸರ್ಕಾರಿ ಆಸ್ಪತ್ರೆಗಳೆಂದರೆ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಸಂಜೀವಿನಿ ಎಂಬ ನಂಬಿಕೆಯಿದೆ. ಆದರೆ ಕಲ್ಯಾಣ ಕರ್ನಾಟಕ ಭಾಗದ ಪ್ರಮುಖ ಸರ್ಕಾರಿ ಆಸ್ಪತ್ರೆಯಾಗಿರುವ ಬಳ್ಳಾರಿಯ ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ (ವಿಮ್ಸ್) ಇದೀಗ ಗಂಭೀರ ಆರೋಪಗಳಿಂದ ಸುದ್ದಿಯಾಗಿದೆ. ಆಸ್ಪತ್ರೆಯಲ್ಲಿ ಉಚಿತವಾಗಿ ದೊರೆಯಬೇಕಾದ ಔಷಧಿಗಳಿದ್ದರೂ ವೈದ್ಯರು ಹೊರಗಿನ ಮೆಡಿಕಲ್ ಶಾಪ್‌ಗಳಿಂದ ಖರೀದಿಸುವಂತೆ ಚೀಟಿ ಬರೆದುಕೊಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಕಲ್ಯಾಣ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲದೆ ಆಂಧ್ರಪ್ರದೇಶ ಮತ್ತು ತೆಲಂಗಾಣದ ಕೆಲವು ಭಾಗಗಳ ರೋಗಿಗಳೂ ವಿಮ್ಸ್ ಆಸ್ಪತ್ರೆಯನ್ನು ಅವಲಂಬಿಸಿದ್ದಾರೆ. ಪ್ರತಿನಿತ್ಯ ಸಾವಿರಾರು ಜನರು ಚಿಕಿತ್ಸೆಗಾಗಿ ಇಲ್ಲಿಗೆ ಬರುತ್ತಾರೆ. ಆದರೆ ಉಚಿತವಾಗಿ ಸಿಗಬೇಕಾದ ಔಷಧಿಗಳಿಗೂ ಹಣ ಖರ್ಚು ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ರೋಗಿಗಳ ಸಂಬಂಧಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಔಷಧಿ ದಾಸ್ತಾನು ಇದ್ದರೂ ಹೊರಗಿನಿಂದ ಖರೀದಿಸುವ ಅನಿವಾರ್ಯತೆ?
ಸಾಮಾನ್ಯ ಜ್ವರ, ನೆಗಡಿಯ ಮಾತ್ರೆಗಳಿಂದ ಹಿಡಿದು ದುಬಾರಿ ಔಷಧಿಗಳವರೆಗೆ ಹೊರಗಿನ ಮೆಡಿಕಲ್ ಶಾಪ್‌ಗಳಿಂದ ಖರೀದಿಸುವಂತೆ ವೈದ್ಯರು ಚೀಟಿ ಬರೆದುಕೊಡುತ್ತಿದ್ದಾರೆ ಎನ್ನಲಾಗಿದೆ. ಆಸ್ಪತ್ರೆಯ ಔಷಧಿ ಸಂಗ್ರಹದಲ್ಲಿ ಸಾಕಷ್ಟು ದಾಸ್ತಾನು ಇದ್ದರೂ ರೋಗಿಗಳು ಹೊರಗಿನಿಂದ ಔಷಧಿ ಖರೀದಿಸಬೇಕಾದ ಸ್ಥಿತಿ ಎದುರಾಗಿದೆ ಎಂಬುದು ಸಂಬಂಧಿಕರ ಆರೋಪವಾಗಿದೆ.
ಖಾಸಗಿ ಲ್ಯಾಬ್‌ಗಳ ಜೊತೆ ಕಮಿಷನ್ ವ್ಯವಹಾರದ ಶಂಕೆ
ಔಷಧಿಗಳ ವಿಚಾರ ಮಾತ್ರವಲ್ಲದೆ ರಕ್ತ ಪರೀಕ್ಷೆ, ಸ್ಕ್ಯಾನಿಂಗ್ ಸೇರಿದಂತೆ ವಿವಿಧ ವೈದ್ಯಕೀಯ ಪರೀಕ್ಷೆಗಳಿಗೂ ರೋಗಿಗಳನ್ನು ಖಾಸಗಿ ಲ್ಯಾಬೋರೇಟರಿಗಳಿಗೆ ಕಳುಹಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಆಸ್ಪತ್ರೆಯಲ್ಲೇ ಪರೀಕ್ಷೆ ನಡೆಸುವ ಸೌಲಭ್ಯವಿದ್ದರೂ ಖಾಸಗಿ ಲ್ಯಾಬ್‌ಗಳ ಮೊರೆ ಹೋಗುವಂತೆ ಮಾಡಲಾಗುತ್ತಿದೆ ಎಂದು ರೋಗಿಗಳ ಸಂಬಂಧಿಕರು ದೂರಿದ್ದಾರೆ. ಇದರ ಹಿಂದೆ ಕಮಿಷನ್ ವ್ಯವಹಾರ ನಡೆಯುತ್ತಿದೆಯೇ ಎಂಬ ಅನುಮಾನವನ್ನೂ ಅವರು ವ್ಯಕ್ತಪಡಿಸಿದ್ದಾರೆ. ಆಸ್ಪತ್ರೆಯ ಕೆಲವು ಸಿಬ್ಬಂದಿಯೇ ಹೊರಭಾಗದಲ್ಲಿ ಖಾಸಗಿ ಲ್ಯಾಬ್‌ಗಳನ್ನು ಹೊಂದಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಆದರೆ ಈ ಆರೋಪಗಳು ಇನ್ನೂ ಅಧಿಕೃತವಾಗಿ ದೃಢಪಟ್ಟಿಲ್ಲ.
ತಪ್ಪಿತಸ್ಥರ ವಿರುದ್ಧ ಕ್ರಮದ ಭರವಸೆ ನೀಡಿದ ವಿಮ್ಸ್ ನಿರ್ದೇಶಕ
ಈ ಆರೋಪಗಳ ಕುರಿತು ಪ್ರತಿಕ್ರಿಯಿಸಿರುವ ವಿಮ್ಸ್ ನಿರ್ದೇಶಕ ಡಾ. ಮರಿರಾಜ್, ಹೊರಗಿನ ಮೆಡಿಕಲ್ ಶಾಪ್‌ಗಳಿಂದ ಔಷಧಿ ಖರೀದಿಸುವಂತೆ ಚೀಟಿ ಬರೆದುಕೊಡುವ ವೈದ್ಯರ ಮಾಹಿತಿ ನೀಡಿದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಸರ್ಕಾರ ಬಡ ರೋಗಿಗಳಿಗಾಗಿ ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಔಷಧಿ ಮತ್ತು ಪ್ರಯೋಗಾಲಯ ಸೌಲಭ್ಯಗಳನ್ನು ಕಲ್ಪಿಸಿದೆ. ಆದರೂ ರೋಗಿಗಳು ಖಾಸಗಿ ಮೆಡಿಕಲ್ ಹಾಗೂ ಲ್ಯಾಬ್‌ಗಳಿಗೆ ಹಣ ಪಾವತಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ವಿಮ್ಸ್ ಆಡಳಿತ ಮಂಡಳಿ ಈ ಆರೋಪಗಳನ್ನು ಗಂಭೀರವಾಗಿ ಪರಿಗಣಿಸಿ ಸಮಗ್ರ ತನಿಖೆ ನಡೆಸಬೇಕು. ಆರೋಪಗಳು ಸಾಬೀತಾದರೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂಬುದು ರೋಗಿಗಳ ಸಂಬಂಧಿಕರ ಒತ್ತಾಯವಾಗಿದೆ.

