ಯೋಗೇಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಮೇಲ್ಮನವಿ ವಿಚಾರಣೆ ಮೇ 26ಕ್ಕೆ ಮುಂದೂಡಿಕೆ
x

ಯೋಗೇಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಮೇಲ್ಮನವಿ ವಿಚಾರಣೆ ಮೇ 26ಕ್ಕೆ ಮುಂದೂಡಿಕೆ

ಯೋಗೇಶ್ ಗೌಡ ಕೊಲೆ ಪ್ರಕರಣ ಸಂಬಂಧ ಶಾಸಕತ್ವ ರದ್ದು ಪ್ರಶ್ನಿಸಿ ವಿನಯ್ ಕುಲಕರ್ಣಿ ಸಲ್ಲಿಸಿರುವ ಅರ್ಜಿಗೆ ಆಕ್ಷೇಪಣೆ ಸಲ್ಲಿಕೆ ಮಾಡುವಂತೆ ಸಿಬಿಐಗೆ ಹೈಕೋರ್ಟ್‌ ಸೂಚನೆ ನೀಡಿ, ವಿಚಾರಣೆಯನ್ನು ಮುಂದೂಡಿದೆ.


Click the Play button to hear this message in audio format

ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಅನರ್ಹ ಶಾಸಕ ವಿನಯ್ ಕುಲಕರ್ಣಿ ಮತ್ತು ಇತರ ಆರೋಪಿಗಳು ವಿಶೇಷ ನ್ಯಾಯಾಲಯದ ಆದೇಶ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ. ಈ ಅರ್ಜಿಯ ವಿಚಾರಣೆಯು ನ್ಯಾಯಾಲಯದಲ್ಲಿ ನಡೆಯುತ್ತಿದ್ದು, ಆಕ್ಷೇಪಣೆ ಸಲ್ಲಿಕೆ ಮಾಡುವಂತೆ ಸಿಬಿಐಗೆ ಸೂಚನೆ ನೀಡಿ ವಿಚಾರಣೆಯನ್ನು ಮೇ 26ಕ್ಕೆ ಮುಂದೂಡಿಕೆ ಮಾಡಿದೆ.

ಪ್ರಕರಣದಲ್ಲಿ ತಮಗೆ ವಿಧಿಸಲಾಗಿರುವ ಶಿಕ್ಷೆಯನ್ನು ರದ್ದುಗೊಳಿಸುವಂತೆ ಕೋರಿ 15ನೇ ಆರೋಪಿ ವಿನಯ್ ಕುಲಕರ್ಣಿ ಮತ್ತು ಇತರರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದಂ ಮತ್ತು ನ್ಯಾಯಮೂರ್ತಿ ರಾಜೇಶ್ ರೈ ಕೆ. ಅವರನ್ನೊಳಗೊಂಡ ಪೀಠವು ಈ ವಿಚಾರಣೆಯನ್ನು ನಡೆಸುತ್ತಿದೆ. ಸಿಬಿಐ ಪರ ವಕೀಲರು ನ್ಯಾಯಾಲಯಕ್ಕೆ ಹಾಜರಾಗಿ, ಅರ್ಜಿದಾರರು ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ ವಿವರವಾದ ಆಕ್ಷೇಪಣೆಗಳನ್ನು ಸಲ್ಲಿಸಲು ಹೆಚ್ಚಿನ ಕಾಲಾವಕಾಶ ಬೇಕೆಂದು ಮನವಿ ಮಾಡಿದರು. ಸಿಬಿಐ ಪರ ವಕೀಲರ ಈ ಮನವಿಯನ್ನು ಪುರಸ್ಕರಿಸಿದ ನ್ಯಾಯಪೀಠವು, ಮುಂದಿನ ವಿಚಾರಣೆಯನ್ನು ಮೇ 26ಕ್ಕೆ ನಿಗದಿಪಡಿಸಿದೆ.

ಪೊಲೀಸ್ ಅಧಿಕಾರಿ ಚನ್ನಕೇಶವ ಟಿಂಗರೀಕರ್ ವಾದ

ಇದೇ ಪ್ರಕರಣದಲ್ಲಿ ಸಾಕ್ಷ್ಯ ನಾಶ ಮತ್ತು ಇತರ ಆರೋಪಗಳ ಮೇಲೆ 7 ವರ್ಷಗಳ ಜೈಲು ಶಿಕ್ಷೆ ಹಾಗೂ 30 ಸಾವಿರ ರೂಪಾಯಿ ದಂಡಕ್ಕೆ ಗುರಿಯಾಗಿರುವ ಪೊಲೀಸ್ ವೃತ್ತ ನಿರೀಕ್ಷಕ ಚನ್ನಕೇಶವ ಟಿಂಗರೀಕರ್ 19ನೇ ಆರೋಪಿಯಾಗಿದ್ದು, ಅವರ ಪರ ವಕೀಲರು ವಾದ ಮಂಡಿಸಿದರು. ಟಿಂಗರೀಕರ್ ಅವರಿಗೆ ವಿಧಿಸಲಾಗಿರುವ ಶಿಕ್ಷೆಯ ಪ್ರಮಾಣವು 7 ವರ್ಷಗಳಾಗಿದ್ದು, ನಿಯಮದಂತೆ ಇದು ಏಕ ಸದಸ್ಯ ಪೀಠದ ಮುಂದೆ ವಿಚಾರಣೆಗೆ ಬರಬೇಕಿತ್ತು. ಆದರೆ, ಪ್ರಸ್ತುತ ಇದನ್ನು ಇತರ ಮುಖ್ಯ ಆರೋಪಿಗಳ ಅರ್ಜಿಯೊಂದಿಗೆ ವಿಭಾಗೀಯ ಪೀಠಕ್ಕೆ ಸೇರ್ಪಡೆ ಮಾಡಲಾಗಿದೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು.

ಅಲ್ಲದೆ, ಟಿಂಗರೀಕರ್ ಅವರ ವಿರುದ್ಧ ಹೊರಿಸಲಾಗಿರುವ ಆರೋಪಗಳು ಜಾಮೀನು ನೀಡಬಹುದಾದ ಸ್ವರೂಪದ್ದಾಗಿವೆ. ಆದ್ದರಿಂದ ಅವರು ಅಪೀಲು ವಿಚಾರಣೆ ಹಂತದಲ್ಲಿ ಜೈಲು ಶಿಕ್ಷೆ ಅನುಭವಿಸುವ ಅಗತ್ಯವಿಲ್ಲ, ಅವರಿಗೆ ಜಾಮೀನು ನೀಡಬೇಕು ಎಂದು ಕೋರಿದರು. ಈ ವಾದವನ್ನು ಆಲಿಸಿದ ನ್ಯಾಯಪೀಠವು, ಟಿಂಗರೀಕರ್ ಅವರ ಅರ್ಜಿಯನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಲು ಸಮ್ಮತಿಸಿ, ಅದರ ವಿಚಾರಣೆಯನ್ನು ಮೇ 14ಕ್ಕೆ ಮುಂದೂಡಿದೆ.

ಪ್ರಕರಣದ ಹಿನ್ನೆಲೆ

2016ರ ಜೂ.15ರಂದು ಬೆಳಿಗ್ಗೆ ಧಾರವಾಡದ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯ ಸಪ್ತಾಪುರದಲ್ಲಿರುವ ಜಿಮ್‌ನಲ್ಲಿ ಯೋಗೇಶ್ ಗೌಡ ಇದ್ದ ವೇಳೆ, ದುಷ್ಕರ್ಮಿಗಳು ಅವರ ಮೇಲೆ ದಾಳಿ ನಡೆಸಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಆರಂಭದಲ್ಲಿ ಪ್ರಕರಣದ ತನಿಖೆಯನ್ನು ಧಾರವಾಡದ ಉಪನಗರ ಪೊಲೀಸರು ನಡೆಸಿದ್ದರು. ಆದರೆ, ಪೊಲೀಸರು ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸುತ್ತಿದ್ದಾರೆ ಮತ್ತು ತನಿಖೆ ದಾರಿ ತಪ್ಪುತ್ತಿದೆ ಎಂದು ಯೋಗೇಶ್ ಗೌಡ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದರು. ಸ್ಥಳೀಯ ಪೊಲೀಸರು ತನಿಖೆ ನಡೆಸಿ ನ್ಯಾಯಾಲಯಕ್ಕೆ ಬಿ-ರಿಪೋರ್ಟ್ ಸಲ್ಲಿಸಿದ್ದರು. ಇದು ಕುಟುಂಬದ ಆಕ್ರೋಶಕ್ಕೆ ಕಾರಣವಾಯಿತು. 2019ರಲ್ಲಿ ರಾಜ್ಯದಲ್ಲಿ ರಾಜಕೀಯ ಬದಲಾವಣೆಯಾದಾಗ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಯೋಗೇಶ್ ಗೌಡ ಅವರ ಕುಟುಂಬದ ಮನವಿಯ ಮೇರೆಗೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿದರು. ಅದಕ್ಕೂ ಮುನ್ನ ಹೈಕೋರ್ಟ್ ಕೂಡ ಪ್ರತ್ಯೇಕ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಆದೇಶ ನೀಡಿತ್ತು. ಸಿಬಿಐ ತನಿಖೆ ಆರಂಭವಾದ ಮೇಲೆ ಪ್ರಕರಣಕ್ಕೆ ದೊಡ್ಡ ತಿರುವು ಸಿಕ್ಕಿತು. 2020ರ ನ.5ರಂದು ಸಿಬಿಐ ಅಧಿಕಾರಿಗಳು ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಬಂಧಿಸಿದರು.

ಸಿಬಿಐ ಸಲ್ಲಿಸಿದ ದೋಷಾರೋಪ ಪಟ್ಟಿ

ಸಿಬಿಐ ತನ್ನ ತನಿಖೆಯಲ್ಲಿ ವಿನಯ್ ಕುಲಕರ್ಣಿ ಮತ್ತು ಇತರ 16 ಜನರ ವಿರುದ್ಧ ಗಂಭೀರವಾದ ಸಾಕ್ಷ್ಯಾಧಾರಗಳನ್ನು ಕಲೆ ಹಾಕಿತು. ಐಪಿಸಿಯ ವಿವಿಧ ಸೆಕ್ಷನ್‌ಗಳ ಜತೆಗೆ, ಶಸ್ತ್ರಾಸ್ತ್ರ ಕಾಯ್ದೆ ಮತ್ತು ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆಯ ಅಡಿಯೂ ಆರೋಪಗಳನ್ನು ಹೊರಿಸಲಾಯಿತು. ತನಿಖೆಯ ವೇಳೆ ಇಬ್ಬರು ಪ್ರಮುಖ ಆರೋಪಿಗಳು ಮಾಫಿ ಸಾಕ್ಷಿಯಾಗಲು ಒಪ್ಪಿಕೊಂಡಿದ್ದು ಸಿಬಿಐಗೆ ದೊಡ್ಡ ಬಲ ನೀಡಿತು. 2021ರಲ್ಲಿ ಸುಪ್ರೀಂಕೋರ್ಟ್ ಅವರಿಗೆ ಷರತ್ತುಬದ್ಧ ಜಾಮೀನು ನೀಡಿತ್ತು. ಆದರೆ, ಅವರು ಧಾರವಾಡ ಜಿಲ್ಲೆಗೆ ಪ್ರವೇಶಿಸದಂತೆ ನಿರ್ಬಂಧ ವಿಧಿಸಲಾಗಿತ್ತು. ಈ ಕಾರಣದಿಂದಾಗಿ 2023ರ ವಿಧಾನಸಭಾ ಚುನಾವಣೆಯಲ್ಲಿ ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ಮೊಕ್ಕಾಂ ಹೂಡಿ ತಮ್ಮ ಪರ ಪ್ರಚಾರ ನಡೆಸಿ ಶಾಸಕರಾಗಿ ಆಯ್ಕೆಯಾದರು.

ಆದರೆ, 2025ರ ಜೂನ್‌ನಲ್ಲಿ ಸುಪ್ರೀಂಕೋರ್ಟ್ ವಿನಯ್ ಕುಲಕರ್ಣಿ ಅವರು ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ಪ್ರಯತ್ನಿಸುತ್ತಿದ್ದಾರೆ ಎಂಬ ಸಿಬಿಐ ವಾದವನ್ನು ಪುರಸ್ಕರಿಸಿ ಅವರ ಜಾಮೀನು ರದ್ದುಗೊಳಿಸಿತು. ಇದರ ಪರಿಣಾಮವಾಗಿ ಅವರು ಎರಡನೇ ಬಾರಿ ಶರಣಾಗಬೇಕಾಯಿತು. ನಂತರ 2026ರ ಜನವರಿಯಲ್ಲಿ ಹೈಕೋರ್ಟ್ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದರೂ, ಅಂತಿಮವಾಗಿ ಫೆ.27ರಂದು ಸುಪ್ರೀಂಕೋರ್ಟ್‌ನಿಂದ ಮತ್ತೆ ಜಾಮೀನು ಪಡೆದು ಬಿಡುಗಡೆಯಾದರು.

ವಿಶೇಷ ನ್ಯಾಯಾಲಯದ ತೀರ್ಪು

ದೀರ್ಘಕಾಲದ ವಿಚಾರಣೆಯ ನಂತರ, ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸಿಬಿಐ ಸಲ್ಲಿಸಿದ ಸಾಕ್ಷ್ಯಾಧಾರಗಳನ್ನು ಪರಿಗಣಿಸಿ, ವಿನಯ್ ಕುಲಕರ್ಣಿ ಸೇರಿದಂತೆ 17 ಮಂದಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಇದರಲ್ಲಿ ಪೊಲೀಸ್ ಅಧಿಕಾರಿ ಚನ್ನಕೇಶವ ಟಿಂಗರೀಕರ್ ಅವರಿಗೆ ಸಾಕ್ಷ್ಯ ನಾಶಪಡಿಸಿದ ಆರೋಪದ ಮೇಲೆ 7 ವರ್ಷಗಳ ಶಿಕ್ಷೆ ವಿಧಿಸಿದೆ.

Read More
Next Story