ಬಿಜೆಪಿ ಸರ್ಕಾರದ ವಿರುದ್ಧ ʼ40 ಪರ್ಸೆಂಟ್ ಕಮಿಷನ್ʼ ಆರೋಪ ಮಾಡಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ನಿಧನ
ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದ, ಅಂದು ವಿರೋಧ ಪಕ್ಷ ಸ್ಥಾನದಲ್ಲಿದ್ದ ಕಾಂಗ್ರೆಸ್ ‘ಪೇ ಸಿಎಂ’ ಅಭಿಯಾನ ನಡೆಸಲು ಕಾರಣವಾಗಿದ್ದ ಕರ್ನಾಟಕ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಹೊಸಕೋಟೆಯ ಅವರ ನಿವಾಸದಲ್ಲಿ ಹೃದಯಾಘಾತದಿಂದ ಗುರುವಾರ ಕೊನೆಯುಸಿರೆಳೆದಿದ್ದಾರೆ.
ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದ, ಅಂದು ವಿರೋಧ ಪಕ್ಷ ಸ್ಥಾನದಲ್ಲಿದ್ದ ಕಾಂಗ್ರೆಸ್ ‘ಪೇ ಸಿಎಂ’ ಅಭಿಯಾನ ನಡೆಸಲು ಕಾರಣವಾಗಿದ್ದ ಕರ್ನಾಟಕ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಹೊಸಕೋಟೆಯ ಅವರ ನಿವಾಸದಲ್ಲಿ ಹೃದಯಾಘಾತದಿಂದ ಗುರುವಾರ ಕೊನೆಯುಸಿರೆಳೆದಿದ್ದಾರೆ.
ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕೆಂಪಣ್ಣನವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಮನೆಗೆ ವಾಪಸ್ಸಾಗಿದ್ದರು. ಆದರೆ ಗುರುವಾರ ಬೆಳಗ್ಗೆ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ.
ಗುತ್ತಿಗೆದಾರರಿಗೆ ಆಗುತ್ತಿದ್ದ ಅನ್ಯಾಯದ ವಿರುದ್ಧ ಧ್ವನಿ ಎತ್ತಿದ್ದ ಕೆಂಪಣ್ಣ
2023ರ ವಿಧಾನಸಭಾ ಚುನಾವಣೆಗೂ ಮುನ್ನ ಅಂದಿನ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿ ಡಿ ಕೆಂಪಣ್ಣ ಗಮನ ಸೆಳೆದಿದ್ದರು. ಬಸವರಾಜ ಬೊಮ್ಮಾಯಿ ಸರ್ಕಾರ ಹಾಗೂ ಬಿಎಸ್ ಯಡಿಯೂರಪ್ಪ ಸರ್ಕಾರದ ಅವಧಿಯಲ್ಲೂ ಕೆಂಪಣ್ಣ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದರು. ಈ ಆರೋಪ ರಾಜ್ಯಾದ್ಯಂತ ದೊಡ್ಡ ಮಟ್ಟದಲ್ಲಿ ಸದ್ದು ಗದ್ದಲಕ್ಕೆ ಕಾರಣವಾಗಿತ್ತು. ತಮ್ಮ ಇಳಿ ವಯಸ್ಸಿನಲ್ಲಿಯೂ ಅವರು ಗುತ್ತಿಗೆದಾರರ ಪರವಾಗಿ ಧ್ವನಿ ಎತ್ತಿದ್ದರು. ಬಿಜೆಪಿ ನಾಯಕರು ಇವರನ್ನು ಕಾಂಗ್ರೆಸ್ ಏಜೆಂಟ್ ಎಂದು ಕರೆದಿದ್ದರು. ರಾಜ್ಯ ಸರ್ಕಾರದ ವಿರುದ್ಧ ಕೆಂಪಣ್ಣ ಕೇಂದ್ರ ಸರ್ಕಾರಕ್ಕೆ ಪತ್ರವನ್ನೂ ಬರೆದಿದ್ದರು. ಇದರಲ್ಲಿ ಅವರು ಗುತ್ತಿಗೆದಾರರಿಗೆ ಆಗುತ್ತಿರುವ ಅನ್ಯಾಯವನ್ನು ಉಲ್ಲೇಖಿಸಿದ್ದರು. ಕಾಂಗ್ರೆಸ್ ಅಂದಿನ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಅಭಿಯಾನವನ್ನು ಹಮ್ಮಿಕೊಂಡಿತ್ತು. ರಾಜ್ಯಾದ್ಯಂತ ಪೋಸ್ಟರ್ ಅಭಿಯಾನವನ್ನು ಕೂಡಾ ನಡೆಸಿತ್ತು.
ಕಾಂಗ್ರೆಸ್ ಸರ್ಕಾರದ ವಿರುದ್ಧವೂ ಆರೋಪ ಮಾಡಿದ್ದ ಕೆಂಪಣ್ಣ
ಬಿಜೆಪಿ ಸರ್ಕಾರದ ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಡಿ ಕೆಂಪಣ್ಣ ಕಾಂಗ್ರೆಸ್ ಆಡಳಿತಕ್ಕೆ ಬಂದ ಕಾಂಗ್ರೆಸ್ ಆಡಳಿತದಲ್ಲೂ ಶೇ 40ರ ಕಮಿಷನ್ ಮುಂದುವರಿದಿದೆ ಎಂದು ಕೆಂಪಣ್ಣ ಇದೇ ವರ್ಷ ಫೆಬ್ರವರಿಯಲ್ಲಿ ಆರೋಪಿಸಿದ್ದರು. ಗುತ್ತಿಗೆದಾರರ ಬಿಲ್ಗಳನ್ನು ಕ್ಲಿಯರ್ ಮಾಡಲು ಕಮಿಷನ್ ಕೇಳಲಾಗುತ್ತಿದೆ ಎಂದು ಕೆಂಪಣ್ಣ ಆರೋಪಿಸಿದ್ದರು. ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ಐದೂವರೆ ತಿಂಗಳಾದರೂ ಕಾಮಗಾರಿ ಬಿಲ್ ಬಾಕಿ ಪಾವತಿ ಪಾರದರ್ಶಕವಾಗಿ ನಡೆಯುತ್ತಿಲ್ಲ. ಬಾಕಿ ಬಿಲ್ ಪಾವತಿಯಾಗುತ್ತಿಲ್ಲ ಎಂಬುದು ಒಂದೆಡೆಯಾದರೆ, ಕೆಲವು ಇಲಾಖೆಗಳಲ್ಲಿ ಆಗುತ್ತಿರುವ ಸಣ್ಣಪುಟ್ಟ ಪಾವತಿಗಳು ಪಾರದರ್ಶಕವಾಗಿ ನಡೆಯುತ್ತಿಲ್ಲ. ಇದರಿಂದ ಅನೇಕ ಸಮಸ್ಯೆ ಗುತ್ತಿಗೆದಾರರಿಗೆ ಎದುರಾಗಿದೆ ಎಂದು ಕೆಂಪಣ್ಣ ಆರೋಪಿಸಿದ್ದರು..
ಕಂಬನಿ ಮಿಡಿದ ಸಿ.ಎಂ
ಕೆಂಪಣ್ಣ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಂಬನಿ ಮಿಡಿದಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದು, ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣನವರ ನಿಧನವಾರ್ತೆ ನೋವುಂಟುಮಾಡಿದೆ. ಹಿಂದಿನ ಸರ್ಕಾರದ ಅವಧಿಯಲ್ಲಿ ದೇಶಾದ್ಯಂತ ಸುದ್ದಿ ಮಾಡಿದ್ದ 40% ಕಮಿಷನ್ ಹಗರಣವನ್ನು ಹೊರತಂದು, ಗುತ್ತಿಗೆ ಕಾಮಗಾರಿಗಳಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರದ ವಿರುದ್ಧ ಅವರು ಸೆಟೆದು ನಿಂತಿದ್ದರು.
ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ನಿಧನಯಾವುದೇ ಒತ್ತಡ, ಆಮಿಷಗಳಿಗೆ ಒಳಗಾಗದ ನಿರ್ಭೀತ ಧ್ವನಿಯೊಂದನ್ನು ನಾಡು ಇಂದು ಕಳೆದುಕೊಂಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರೆಕಲಿ, ಅವರ ಕುಟುಂಬ ವರ್ಗಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.